ADVERTISEMENT

ಸಾಲ ಆರ್ಥಿಕ ಪ್ರಗತಿಗೆ ಪೂರಕ: ಸಚಿವ ಡಾ.ಕೆ ಸುಧಾಕರ್

ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2020, 6:48 IST
Last Updated 21 ಜೂನ್ 2020, 6:48 IST
ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯೆಯರಿಗೆ ಶೂನ್ಯ ಬಡ್ಡಿ ದರದ ಸಾಲ ಚೆಕ್ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯೆಯರಿಗೆ ಶೂನ್ಯ ಬಡ್ಡಿ ದರದ ಸಾಲ ಚೆಕ್ ವಿತರಿಸಲಾಯಿತು.   

ಚಿಕ್ಕಬಳ್ಳಾಪುರ: ‘ಮಹಿಳೆಯರು ಆರ್ಥಿಕವಾಗಿ ಸಬಲರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದ ಸ್ತ್ರೀ ಶಕ್ತಿ ಸಂಘಗಳಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಲಾಗುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದರು.

ನಗರದಲ್ಲಿ ಶನಿವಾರ ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಸ್ತ್ರೀ ಶಕ್ತಿ ಸಂಘಗಳಿಗೆ ಶೂನ್ಯ ಬಡ್ಡಿ ದರದ ಸಾಲ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು ಪುರುಷರ ಸಮನಾಗಿ ಬೆಳೆಯಬೇಕು. ಆದ್ದರಿಂದ ಮಹಿಳೆಯರ ಸಬಲೀಕರಣಕ್ಕಾಗಿ ಡಿ.ಸಿ.ಸಿ ಬ್ಯಾಂಕ್ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತಿದೆ. ಈ ಸಾಲ ಯೋಜನೆ ಆರ್ಥಿಕ ಪ್ರಗತಿಗೆ ಪೂರಕವಾಗಲಿದೆ. ಸಾಲದ ಹಣವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಜೀವನ ಉತ್ತಮ ಪಡಿಸಿಕೊಳ್ಳಬೇಕು’ ಎಂದು ಹೇಳಿದರು.

ADVERTISEMENT

‘ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಹಾಗೂ ಆರ್ಥಿಕ ಚೈತನ್ಯ ತುಂಬುದಕ್ಕೆ ಶೂನ್ಯ ಬಡ್ಡಿದರ ಸಾಲ ಯೋಜನೆ ಮಹಿಳೆಯರಿಗೆ ಸಹಕಾರಿಯಾಗಲಿದೆ. ಸಾಲವನ್ನು ಯಾವುದೇ ಕಾರಣಕ್ಕೂ ದುಂದು ವೆಚ್ಚ ಅಥವಾ ದುರುಪಯೋಗ ಮಾಡಿಕೊಳ್ಳದೆ ಕುರಿ, ಮೇಕೆ, ಹಸು ಸಾಕಾಣಿಕೆಗೆ ಉಪಯೋಗಿಸಿಕೊಂಡು ನಿಮ್ಮ ಜೀವನವನ್ನು ಆರ್ಥಿಕವಾಗಿ ಸದೃಢರಾಗಿಸಿಕೊಳ್ಳಬೇಕು’ ಎಂದರು.

‘ಕೊರೊನಾ ತಡೆಗಟ್ಟಲು ಪ್ರತಿಯೊಬ್ಬರೂ ಕಡ್ಡಾಯವಾಗಿ ಮುಖಗವಸುಗಳನ್ನು ಬಳಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸೋಂಕು ನಿಗ್ರಹ ಮಾಡಬೇಕು. 60 ವರ್ಷ ದಾಟಿದ ಹಿರಿಯರು ಹಾಗೂ ಸಕ್ಕರೆ, ಹೃದಯ ಕಾಯಿಲೆ ಇರುವಂತಹ ವ್ಯಕ್ತಿಗಳಿಗೆ ಕೊರೊನಾ ವೈರಸ್ ಸೋಂಕು ತಗಲದಂತೆ ಎಚ್ಚರ ವಹಿಸಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 42 ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ₹1.82 ಲಕ್ಷ ಸಾಲ ವಿತರಿಸಲಾಯಿತು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ ರಾಮಸ್ವಾಮಿ, ಡಿ.ಸಿ.ಸಿ ಬ್ಯಾಂಕ್ ನಿರ್ದೆಶಕರಾದ ದ್ಯಾವಪ್ಪ, ವೇದಾ ಸುದರ್ಶನ್, ಡಿ.ಸಿ.ಸಿ ಬ್ಯಾಂಕ್ ಚಿಕ್ಕಬಳ್ಳಾಪುರ ಶಾಖೆ ವ್ಯವಸ್ಥಾಪಕಿ ಜ್ಯೋತಿ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕ ನಾಗೇಶ್, ಎ.ಪಿ.ಎಂ.ಸಿ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ಕೆ.ವಿ.ನಾಗರಾಜ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.