ಚಿಂತಾಮಣಿ: ತಾಲ್ಲೂಕಿನ ಮುರುಗಮಲೆಯಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗಿದ್ದು ಭಕ್ತರಿಗೆ ತೊಂದರೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಸ್ತೆ ಅಗಲೀಕರಣ ಕಾಮಗಾರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿ 4-5 ತಿಂಗಳಾಗಿದೆ. ಮುರುಗಮಲೆ ಯಾತ್ರಾಸ್ಥಳವಾಗಿದ್ದು ಪ್ರತಿನಿತ್ಯ ನೂರಾರು ಜನರು ಬರುತ್ತಾರೆ. ರಸ್ತೆ ಕಾಮಗಾರಿಗೆ ಅಗತ್ಯವಾದ ಜಲ್ಲಿ ಮತ್ತಿತರ ವಸ್ತುಗಳನ್ನು ಗುಡ್ಡೆ ಹಾಕಿದ್ದಾರೆ. ಕಸಕಡ್ಡಿ ಮಳೆ ನೀರು ನಿಂತಿದೆ. ಖಾಸಗಿ ನಿವೇಶನಗಳ ಮುಂದೆ ನರೇಗಾ ಮೂಲಕ ಮಾಡಿದ್ದ ಚರಂಡಿಗಳನ್ನು ಕಿತ್ತು ಹಾಕಿದ್ದಾರೆ. ಆ ನೀರು ರಸ್ತೆಗೆ ಹರಿಯುತ್ತಿದೆ. ಕೊಚ್ಚೆ ನೀರಿನಿಂದ ಸೊಳ್ಳೆಗಳ ಆವಾಸಸ್ಥಾನವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ತಿಳಿಸಿದರು.
ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗೆ ಪರಿಸ್ಥಿತಿ ವಿವರಿಸಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಾಮಗಾರಿ ತಡವಾಗುತ್ತಿರುವುದರಿಂದ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಆಗ್ರಹಪಡಿಸಿದರು.
ದರ್ಗಾ ಆವರಣದಲ್ಲಿ ಇತ್ತೀಚೆಗೆ ಅನಧಿಕೃತ ಅಂಗಡಿಗಳು ತಲೆ ಎತ್ತುತ್ತಿವೆ. ದರ್ಗಾ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಕ್ಫ್ ಬೋರ್ಡ್ ಅಧಿಕಾರಿಗಳು ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಬೆಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.