ADVERTISEMENT

ಎಂಇಎಸ್ ಸಂಘಟನೆ ನಿಷೇಧಕ್ಕೆ ಆಗ್ರಹ

ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ನಗರದಲ್ಲಿ ಕರವೇ ಕಾರ್ಯಕರ್ತರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2019, 11:34 IST
Last Updated 31 ಡಿಸೆಂಬರ್ 2019, 11:34 IST
ಅಂಬೇಡ್ಕರ್ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದಲ್ಲಿ ಎಂಇಎಸ್ ಕಾರ್ಯಕರ್ತರು ಮಾಡುತ್ತಿರುವ ಉದ್ಧಟತನವನ್ನು ಖಂಡಿಸಿ ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಶ್ರೀಧರ್ ಬಾಬು, ‘ಮಹಾರಾಷ್ಟ್ರದಲ್ಲಿನ ಕೆಲ ಪುಂಡ ಮರಾಠಿಗರು ವಿನಾಕಾರಣ ಕನ್ನಡದ ಧ್ವಜವನ್ನು ಸುಡುವ ಜತೆಗೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಈಗ ಮಹಾರಾಷ್ಟ್ರದಲ್ಲಿ ಕನ್ನಡ ಚಲನಚಿತ್ರಗಳನ್ನು ಪ್ರದರ್ಶಿಸಬಾರದು ಎಂದು ಪುಂಡಾಟ ಮೆರೆಯುತ್ತಿದ್ದಾರೆ. ಅವರ ಮೇಲೆ ಮಹಾರಾಷ್ಟ್ರ ಸರ್ಕಾರ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಸೌಹಾರ್ದಯುತವಾಗಿ ಜೀವನ ನಡೆಸುತ್ತಿದ್ದಾರೆ. ಆದರೆ, ಎಂಇಎಸ್ ಕಾರ್ಯಕರ್ತರು ವಿನಾಕಾರಣ ಕ್ಯಾತೆ ತೆಗೆಯುತ್ತಿದ್ದಾರೆ. ಕನ್ನಡದ ಧ್ವಜವನ್ನು ಸುಟ್ಟು ಕನ್ನಡಿಗರ ಆಕ್ರೋಶ ಮೂಡಿಸುವ ಮೂಲಕ ಗಡಿ ಭಾಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಕನ್ನಡಿಗರು ಶಾಂತಿಪ್ರಿಯರು. ಆದರೆ ಗಡಿ ಭಾಗದ ರಾಜ್ಯಗಳು ವಿನಾಕಾರಣ ಹಾಗೂ ಸದಾಕಾಲ ಒಂದಿಲ್ಲೋಂದು ವಿಚಾರ ಕೆದಕಿ ನಮ್ಮ ಮೇಲೆ ಅತಿಕ್ರಮಣ ಮಾಡಿ ನಮ್ಮ ಸಹನೆಯನ್ನು ಕೆದಕುತ್ತಿದ್ದಾರೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ಕನ್ನಡದ ಧ್ವಜವನ್ನು ಸುಟ್ಟಿರುವುದಲ್ಲದೆ ಕರ್ನಾಟಕ ಮುಖ್ಯಮಂತ್ರಿ ಪ್ರತಿಕೃತಿ ದಹಿಸಿರುವುದು ಖಂಡನೀಯ‘ ಎಂದು ಹೇಳಿದರು.

ಮಹಾರಾಷ್ಟ್ರದ ಗಡಿ ಭಾಗದಲ್ಲಿ ಕನ್ನಡದ ಚಲನಚಿತ್ರದ ನಾಮಫಲಕಗಳಿಗೆ ಮಸಿ ಬಳಿದು ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿದ್ದಾರೆ. ಸದಾಕಾಲ ಇಂತಹ ಕೃತ್ಯಗಳನ್ನು ಮಾಡುತ್ತಿರುವ ಎಂಇಎಸ್ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿ, ದೇಶದಲ್ಲಿ ಶಾಶ್ವತ ಶಾಂತಿ ನೆಲೆಸುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಸಿ.ಆರ್.ಮಹೇಶ್, ನಂದಿ ಘಟಕದ ಅಧ್ಯಕ್ಷ ಕೆ.ಬಿ ಚೇತನ್, ಮುಖಂಡರಾದ ಚಂದ್ರಶೇಖರ್, ಶ್ರೀನಿವಾಸ್ ಗೌಡ, ಜಯಂತ್, ಮೂರ್ತಿ, ಶಶಿಕುಮಾರ್ , ಆದಿಲ್ ಷರೀಫ್, ಶ್ರೀನಿವಾಸ್, ಲಕ್ಷ್ಮಿನಾರಾಯಣ, ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.