ಚಿಕ್ಕಬಳ್ಳಾಪುರ: ಕುಟುಂಬ, ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಒಬ್ಬ ಮಹಿಳೆ ಓದಿದರೆ ಒಂದು ಶಾಲೆ ತೆರೆದಂತೆ.ಮಹಿಳೆ ಆರ್ಥಿಕವಾಗಿ ಸದೃಢವಾದಲ್ಲಿ ಒಂದು ಬ್ಯಾಂಕ್ ತೆರೆದಂತೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ತಾಲ್ಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ
ಹಾಗೂ ಸಹಾಯಕ ನಿರ್ದೇಶಕರ ಕಚೇರಿಯ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
ಜಿಲ್ಲೆಯಲ್ಲಿನ ಕೆರೆಕಟ್ಟೆಗಳನ್ನು ಗುತ್ತಿಗೆ ಪಡೆದು ಮೀನು ಸಾಕಾಣಿಕೆ ಮಾಡುವುದು ಬಯಲುಸೀಮೆಯ ಮೀನುಗಾರರ ಪ್ರಮುಖ ಉದ್ಯೋಗ ಹಾಗೂ ಆರ್ಥಿಕ ಮೂಲವಾಗಿದೆ. ಮೀನುಗಾರರ ಹಿತಕ್ಕಾಗಿ ಸರ್ಕಾರ ಕಟ್ಟಿಬದ್ಧವಾಗಿದೆ ಎಂದರು.
ಮಹಿಳೆಯರನ್ನು ಸದೃಢಗೊಳಿಸುವ ಉದ್ದೇಶದಿಂದ ಸ್ತ್ರೀ ಶಕ್ತಿ ಸಂಘಗಳ ಮೂಲಕ ಬಡ್ಡಿ ರಹಿತ ಸಾಲ ಸೌಲಭ್ಯ ನೀಡಲಾಗುತ್ತಿದೆ. ಇದರಿಂದ ಅವರ ಕುಟುಂಬದ ಸ್ಥಿತಿಗತಿ ಬದಲಾವಣೆಯಾಗಿ ಆರ್ಥಿಕವಾಗಿ ಕುಟುಂಬದ ಪೋಷಣೆ ಸುಲಭಗೊಳುತ್ತಿದೆ ಎಂದು ಹೇಳಿದರು.
ವಿವಿಧ ಕಾಮಗಾರಿಗೆ ಭೂಮಿಪೂಜೆ:ತಾಲ್ಲೂಕಿನ ಶ್ರೀರಾಂಪುರದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಹೆಚ್ಚುವರಿ ಕೊಠಡಿಯ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ, ದೊಡ್ಡಮರಳಿ ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರದ ಕಟ್ಟಡ ಉದ್ಘಾಟನೆ, ಕುಪ್ಪಹಳ್ಳಿಯಲ್ಲಿ ಆದರ್ಶ ಗ್ರಾಮ ಯೋಜನೆಯ ವಿವಿಧ ಕಾಮಗಾರಿಗಳ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರು ಚಾಲನೆ ನೀಡಿದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ತಹಶೀಲ್ದಾರ್ ಗಣಪತಿ ಶಾಸ್ತ್ರಿ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕಿ ಯಶಸ್ವಿನಿ, ದೊಡ್ಡಮರಳಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಗ್ರಾ.ಪಂ ಅಧ್ಯಕ್ಷ ಬಿ.ಕೆ. ಮಂಜುನಾಥ್, ಚನ್ನಕೇಶವ, ದ್ಯಾವಣ್ಣ, ಸತೀಶ್, ರಾಮಸ್ವಾಮಿ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.