ADVERTISEMENT

ಜಾತಿ, ಧರ್ಮ, ಜನಾಂಗ ತ್ಯಜಿಸಿದರೆ ಅಭಿವೃದ್ಧಿ: ಕೃಷ್ಣಾರೆಡ್ಡಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2021, 1:49 IST
Last Updated 27 ಜನವರಿ 2021, 1:49 IST
ಚಿಂತಾಮಣಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ, ತಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ರೇಖಾಉಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾಂಜುನಾಥ್ ಧ್ವಜವಂದನೆ ಸ್ವೀಕರಿಸಿದರು
ಚಿಂತಾಮಣಿಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ.ಕೃಷ್ಣಾರೆಡ್ಡಿ, ತಹಶೀಲ್ದಾರ್ ಹನುಮಂತರಾಯಪ್ಪ, ನಗರಸಭೆ ಅಧ್ಯಕ್ಷೆ ರೇಖಾಉಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾಂಜುನಾಥ್ ಧ್ವಜವಂದನೆ ಸ್ವೀಕರಿಸಿದರು   

ಚಿಂತಾಮಣಿ: ‘ದೇಶದ ಜನರು ಜಾತಿ, ಧರ್ಮ, ಜನಾಂಗವನ್ನು ತ್ಯಜಿಸಿ ನಾವೆಲ್ಲ ಭಾರತೀಯರು ಎಂಬ ಮನೋಭಾವನೆ ಬೆಳೆಸಿಕೊಂಡರೆ ಮಾತ್ರ ದೇಶ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತದೆ’ ಎಂದು ಶಾಸಕ ಎಂ.ಕೃಷ್ಣಾರೆಡ್ಡಿ ತಿಳಿಸಿದರು.

ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ಮಂಗಳವಾರ ಹಮ್ಮಿಕೊಂಡಿದ್ದ 72ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಅಸಂಖ್ಯಾತ ಜನರ ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ ಲಭಿಸಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹನೀಯರನ್ನು ಸ್ಮರಿಸಿಕೊಳ್ಳುವುದು, ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದವರಿಗೆ ಗೌರವ ಸಲ್ಲಿಸುವುದು ಇಂದಿನ ವಿಶೇಷವಾಗಿದೆ. ವಿಶ್ವದಲ್ಲೇ ಅತ್ಯುತ್ತಮವಾದ ಸಂವಿಧಾನ ಹೊಂದಿದ್ದರೂ ದೇಶ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದಲ್ಲಿ ಇನ್ನೂ ಅಸಮಾನತೆ, ಜಾತೀಯತೆ, ಅಸ್ಪೃಶ್ಯತೆ ಸಂಪೂರ್ಣವಾಗಿ ನಾಶವಾಗದೆ, ಇಂದಿಗೂ ಜೀವಂತವಾಗಿದೆ. ಈ ರೀತಿಯ ಅನಿಷ್ಟ ಪಿಡುಗುಗಳಿಂದಲೇ ದೇಶ ನಿರೀಕ್ಷಿಸಿದಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲ’ ಎಂದು ಅಭಿಪ್ರಾಯಪಟ್ಟರು.

ADVERTISEMENT

ತಹಶೀಲ್ದಾರ್ ಹನುಮಂತರಾಯಪ್ಪ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಪೊಲೀಸ್, ಎನ್.ಸಿ.ಸಿ, ಸ್ಕೌಟ್ ಅಂಡ್ ಗೈಡ್ಸ್, ವಿದ್ಯಾರ್ಥಿಗಳಿಂದ ಧ್ವಜವಂದನೆ, ಪಥಸಂಚಲನೆ ನಡೆಯಿತು. ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಗಳನ್ನು ವಿತರಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು
ನಡೆದವು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾಮಂಜುನಾಥ್, ಉಪಾಧ್ಯಕ್ಷ ನಾರಾಯಣಸ್ವಾಮಿ, ಕಾರ್ಯನಿರ್ಹಣಾಧಿಕಾರಿ ಮಂಜುನಾಥ್, ನಗರಸಭೆ ಅಧ್ಯಕ್ಷೆ ರೇಖಾಉಮೇಶ್, ಉಪಾಧ್ಯಕ್ಷೆ ಸುಹಾಸಿನಿರೆಡ್ಡಿ, ಪ್ರಭಾರಿ ಪೌರಾಯುಕ್ತ ಉಮಾಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ನಗರ ಠಾಣೆಯ ಇನ್ಸ್ ಪೆಕ್ಟರ್ ಆನಂದಕುಮಾರ್, ನಗರಸಭೆ ಸದಸ್ಯರಾ ಮಂಜುನಾಥ್, ಜೈಭೀಮ್ ಮುರಳಿ, ಜಯಮ್ಮ, ಕೃಷ್ಣಮೂರ್ತಿ, ಸಾಧಿಕ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.