ಶಿಡ್ಲಘಟ್ಟ: ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಹೊರಟ ಧರ್ಮಯಾತ್ರೆಗೆ ಭಾನುವಾರ ನಗರದ ಅಶೋಕ ರಸ್ತೆಯ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.
‘ನಮ್ಮ ಹಿಂದೂ ಧರ್ಮದ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಹಿಂದೂಗಳೆಲ್ಲಾ ಒಂದಾಗಿ ಧರ್ಮ ರಕ್ಷಣೆಗೆ ನಿಲ್ಲಬೇಕು’ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ಧರ್ಮ ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿ ಮಾಡಿ ಚ್ಯುತಿಯಾಗುವಂತಹ ಕೆಲಸ ಮಾಡುತ್ತಿದೆ’ ಎಂದು ದೂರಿದರು.
‘ಇದೀಗ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಬಗ್ಗೆ ಅಪಪ್ರಚಾರ ಮಾಡುವವರಿಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು’.
‘ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿ ನೂರಾರು ಮಂದಿ ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಕೈಗೊಂಡಿದ್ದೇವೆ’ ಎಂದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ನರೇಶ್, ಕೊತ್ತನೂರು ಜಗದೀಶ್, ರಾಮಕೃಷ್ಣಪ್ಪ, ಬಾಲಕೃಷ್ಣ, ಚೆಲುವರಾಜು, ನಾರಾಯಣಸ್ವಾಮಿ, ಪ್ರಕಾಶ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.