ADVERTISEMENT

ದಿಕ್ಕು ತಪ್ಪಿಸುತ್ತಿರುವ ವಿದ್ಯಾರ್ಥಿ ಸಂಘಟನೆಗಳು

ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಬೇಸರ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2018, 12:43 IST
Last Updated 11 ಆಗಸ್ಟ್ 2018, 12:43 IST
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.   

ಚಿಕ್ಕಬಳ್ಳಾಪುರ: ‘ವಿವಿಧ ವಿದ್ಯಾರ್ಥಿ ಸಂಘಟನೆಗಳು ಇವತ್ತು ವಿದ್ಯಾರ್ಥಿ ಸಮೂಹವನ್ನು ಅನವಶ್ಯಕ ಹೋರಾಟಗಳಿಗೆ ಬಳಸಿಕೊಳ್ಳ ಮೂಲಕ ದಿಕ್ಕು ತಪ್ಪಿಸುತ್ತಿವೆ. ಇದರಿಂದ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸಮಾಜದ ಏಳಿಗೆಗೆ ಶ್ರಮಿಸಿದ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು’ ಎಂದು ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಹೇಳಿದರು.

ನಗರದಲ್ಲಿ ಶನಿವಾರ ಬಹುಜನ ವಿದ್ಯಾರ್ಥಿ ಸಂಘದ (ಬಿವಿಎಸ್‌) ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇವತ್ತು ಗ್ರಾಮೀಣ ಮತ್ತು ನಗರ ಪ್ರದೇಶದವರ ನಡುವೆ ಸಾಕಷ್ಟು ಅಂತರ ಹೆಚ್ಚುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕಿದೆ. ಪ್ರತಿಭಾವಂತರನ್ನು ಗುರುತಿಸಿ ಗೌರವಿಸುವ ಕೆಲಸವಾಗಬೇಕಿದೆ. ಆ ನಿಟ್ಟಿನಲ್ಲಿ ಬಹುಜನ ವಿದ್ಯಾರ್ಥಿ ಸಂಘ ಉತ್ತಮ ಕೆಲಸ ಮಾಡುತ್ತಿದೆ’ ಎಂದು ತಿಳಿಸಿದರು.

ADVERTISEMENT

‘ಅಂಬೇಡ್ಕರ್ ಅವರು ದೂರದೃಷ್ಟಿ ಇಟ್ಟುಕೊಂಡು ಉತ್ತಮ ಸಂವಿಧಾನ ರಚಿಸದಿದ್ದರೆ ಇವತ್ತು ಮಹಿಳೆಯರಿಗೆ ಮತದಾನದ ಹಕ್ಕು ಸಿಗುತ್ತಿರಲಿಲ್ಲ. ಜ್ಯೋತಿ ಬಾ ಫುಲೆ, ಸಾವಿತ್ರಿ ಬಾಯಿ ಫುಲೆ ಶ್ರಮದ ಫಲವಾಗಿ ಸಮಾಜದಲ್ಲಿ ಹೆಣ್ಣು ಮಕ್ಕಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಯಿತು. ಅವರ ವಿಚಾರಧಾರೆಗಳನ್ನು ಪಾಲಿಸುವ ಅಗತ್ಯವಿದೆ’ ಎಂದರು.

‘ಇವತ್ತು ರಾಜ್ಯ ಮತ್ತು ಕೇಂದ್ರದಲ್ಲಿ ಉತ್ತಮ ಶಿಕ್ಷಣ ಸಚಿವರಿದ್ದಾರೆ. ಶಿಕ್ಷಣ ಮಂತ್ರಿಗಳು ಚೆನ್ನಾಗಿ ಕೆಲಸ ಮಾಡಿದಾಗ ಮಾತ್ರ ದೇಶದ ಶಿಕ್ಷಣ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ. ದೇಶದ ಆರ್ಥಿಕ ವ್ಯವಸ್ಥೆಗೆ ಆರ್‌ಬಿಐ ಪರಿಕಲ್ಪನೆ ಹುಟ್ಟು ಹಾಕಿದವರೇ ಅಂಬೇಡ್ಕರ್ ಅವರು. ಆದ್ದರಿಂದ ನೋಟುಗಳಲ್ಲಿ ಗಾಂಧೀಜಿ ಅವರ ಬದಲು ನಿಜವಾಗಿ ಅಂಬೇಡ್ಕರ್ ಅವರ ಭಾವಚಿತ್ರ ಮುದ್ರಿಸಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.

ಬಿವಿಎಸ್‌ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರಾಜು ಮಾತನಾಡಿ, ‘2002ರಲ್ಲಿ ಸ್ಥಾಪನೆಯಾದ ಬಿವಿಎಸ್ ಸಂಘಟನೆ ನಿರಂತರವಾಗಿ ವಿದ್ಯಾರ್ಥಿಗಳ ಪರ ಹೋರಾಟಗಳನ್ನು ನಡೆಸುತ್ತಿದೆ. ಅಂಬೇಡ್ಕರ್ ಆದರ್ಶ, ಸಿದ್ದಾಂತಗಳು ಹಾಗೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಂಘಟನೆ ಸಾಗುತ್ತಿದೆ. 16 ವರ್ಷಗಳಿಂದ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿಕೊಂಡು ಬರಲಾಗುತ್ತಿದೆ’ ಎಂದರು.

ಬಿಎಸ್‌ಪಿ ರಾಜ್ಯ ಘಟಕದ ಅಧ್ಯಕ್ಷ ಪ್ರೊ.ಹರಿರಾಮ್, ಮುಖಂಡರಾದ ಯಂಕಾ ನಾಯಕ್, ರಾಜಣ್ಣ, ರಾಜಶೇಖರ್, ಜಯಪ್ರಕಾಶ್ ಯಾದವ್, ಜಗದೀಶ್, ನರಸಿಂಹಯ್ಯ, ಮಟಮಪ್ಪ, ಮುನಿಕೃಷ್ಣಪ್ಪ, ಟಿ.ಜಿ.ನಾರಾಯಣಸ್ವಾಮಿ, ಬಾಲಕೃಷ್ಣ, ಪ್ರಶಾಂತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.