ADVERTISEMENT

ಪದವಿಯ ಎಲ್ಲರಿಗೂ ಲ್ಯಾಪ್‌ಟಾಪ್‌ ವಿತರಿಸಿ

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಎನ್‍ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2020, 9:15 IST
Last Updated 18 ಫೆಬ್ರುವರಿ 2020, 9:15 IST
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಎನ್‍ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಎನ್‍ಎಸ್‌ಯುಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.   

ಚಿಕ್ಕಬಳ್ಳಾಪುರ: ಪದವಿ ಶಿಕ್ಷಣದ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಲ್ಯಾಪ್‌ಟಾಪ್‌ ನೀಡುವಂತೆ ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‍ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಸೋಮವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಎನ್‍ಎಸ್‌ಯುಐ ರಾಜ್ಯ ಘಟಕದ ಸಂಚಾಲಕ ಕುಂದಲಗುರ್ಕಿ ಮುನೀಂದ್ರ, ‘ಪದವಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಈ ಹಿಂದಿನ ಕಾಂಗ್ರೆಸ್‌ ಸರ್ಕಾರ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ ಯೋಜನೆ ಜಾರಿಗೊಳಿಸಿತ್ತು. ಇದರಿಂದ ಬಡ, ಮಧ್ಯಮ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ, ಕಾರಣಾಂತರಗಳಿಂದ ಕಳೆದ ವರ್ಷ ಸರ್ಕಾರ ಲ್ಯಾಪ್‌ಟಾಪ್‌ ವಿತರಿಸಿಲ್ಲ. ಆದರೆ ಈ ಬಾರಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ರಾಜ್ಯ ಸರ್ಕಾರ ಲ್ಯಾಪ್‌ಟಾಪ್‌ ವಿತರಣೆ ಮಾಡುತ್ತಿದೆ’ ಎಂದು ಹೇಳಿದರು.

‘ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಮಾತ್ರ ಲ್ಯಾಪ್‌ಟಾಪ್‌ ವಿತರಿಸುತಿತ್ತು. ಎನ್‌ಎಸ್‌ಯುಐ ಹೋರಾಟದ ಬಳಿಕ ಸರ್ಕಾರದ ಎಲ್ಲ ವರ್ಗಗಳ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ವಿತರಿಸಲು ನಿರ್ಧರಿಸಿತು. ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡುವುದಾಗಿ ಸರ್ಕಾರವು ಮೂರು ವರ್ಷಗಳಿಂದ ಹೇಳುತ್ತಾ ಬಂದಿದೆ. ಈಗ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ವಿತರಣೆ ಮಾಡಲು ನಿರ್ದೇಶನ ನೀಡಲಾಗಿದೆ. ಸರ್ಕಾರದ ಈ ಮಲತಾಯಿ ಧೋರಣೆಯನ್ನು ಕೈ ಬಿಡಬೇಕು’ ಎಂದು ಹೇಳಿದರು.

ADVERTISEMENT

‘ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ದೊರೆಯದೇ ಇರುವುದರಿಂದ ದ್ವಿತೀಯ ಹಾಗೂ ತೃತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ, ಬಿ.ಎ, ಬಿ.ಕಾಂ, ಬಿ.ಎಸ್‌ಸಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಬೇಕು. ಮೊದಲ ವರ್ಷದ ವಿದ್ಯಾರ್ಥಿಗಳಿಗಷ್ಟೆ ನೀಡುತ್ತಿರುವುದು ಖಂಡನೀಯ’ ಎಂದು ತಿಳಿಸಿದರು.

‘2017–18 ಮತ್ತು 2018–19ನೇ ಸಾಲಿನಲ್ಲಿ ಪದವಿ ಶಿಕ್ಷಣಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುವುದಾಗಿ ಅಂದಿನ ಸಮ್ಮಿಶ್ರ ಸರ್ಕಾರ ಹೇಳಿತ್ತು, ಜತೆಗೆ ಲ್ಯಾಪ್‌ಟಾಪ್‌ ಖರೀದಿಗೆ ಟೆಂಡರ್‌ ಕೂಡ ಕರೆದಿತ್ತು. ಆದರೆ ಇದೀಗ, ರಾಜ್ಯ ಸರ್ಕಾರ ದ್ವಿತೀಯ ಹಾಗೂ ತೃತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವುದಿಲ್ಲ ಎಂದು ಹೇಳುವುದು ಸರಿಯಲ್ಲ’ ಎಂದರು.

‘ತಂತ್ರಜ್ಞಾನ ಬಳಕೆ ಮಾಡಿಕೊಳ್ಳದೆ ವಿದ್ಯಾರ್ಥಿಗಳು ಗುಣಾತ್ಮಕ ಕಲಿಕೆಯಲ್ಲಿ ಹಿಂದೆ ಬೀಳುವಂತಾಗಿದೆ. ಆದ್ದರಿಂದ, ಸರ್ಕಾರ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡದೆ, ತ್ವರಿತಗತಿಯಲ್ಲಿ ಲ್ಯಾಪ್‌ಟಾಪ್‌ ವಿತರಿಸಲು ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ’ ಎಂದು ಹೇಳಿದರು.

ಪ್ರತಿಭಟನಾಕಾರರು ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿ ಮುಖಂಡರಾದ ದೀಪಕ್ ರಾಜ್, ಹುಸೇನ್, ಅನಿತಾಕುಮಾರಿ, ಅರ್ಪಿತಾ, ಲಕ್ಷ್ಮಿ, ಅನುಷಾ, ಚೈತ್ರಾ, ಜಯಶ್ರೀ, ಮಂಜುಳಾ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.