ಬಾಗೇಪಲ್ಲಿ: ಪಂಚಾಯಿತಿ ವ್ಯಾಪ್ತಿಯ ಕೊತ್ತಕೋಟೆ, ಪೆಸಲಪರ್ತಿ, ರಾಮನೊಡ್ಡಂಪಲ್ಲಿ, ಕೊಲಿಮಿಪಲ್ಲಿ, ಜಿಲ್ಲಾಲಪಲ್ಲಿ ಸೇರಿದಂತೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. 2025ರ ಜನವರಿ ತಿಂಗಳ ಒಳಗೆ ಸಾಗುವಳಿ ಚೀಟಿಗಳನ್ನು ವಿತರಿಸಲಾಗುವುದು ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.
ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಕೊತ್ತಕೋಟೆ ಗ್ರಾಮ ಪಂಚಾಯಿತಿ ಹಾಗೂ ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನಂಪಲ್ಲಿ ಕ್ರಾಸ್‌ನಲ್ಲಿ ಬುಧವಾರ ನಡೆದ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು. ಕೊತ್ತಕೋಟೆ ಗ್ರಾಮ ಪಂಚಾಯಿತಿಯನ್ನು ಪೋಡಿಮುಕ್ತ ಪಂಚಾಯಿತಿ ಎಂದು ಘೋಷಣೆ ಮಾಡಲಾಗಿದೆ. ಕಂದಾಯ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2200 ಕ್ಕೂ ಹೆಚ್ಚು ಅರ್ಹ ಫಲಾನುಭವಿಗಳನ್ನು ಗುರ್ತಿಸಲಾಗಿದೆ. ಸರ್ಕಾರದಿಂದ ಸಿಗುವ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಲಾಗಿದೆ. ಜನಸ್ಪಂದನದ ಮೂಲಕ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ಗ್ರಾಮಸ್ಥರು ಸರತಿಸಾಲಿನಲ್ಲಿ ನಿಂತು 227 ಅಹವಾಲುಗಳನ್ನು ಸಲ್ಲಿಸಿದರು. ಕಂದಾಯ ಇಲಾಖೆಯಿಂದ 284 ಮಂದಿ ಫಲಾನುಭವಿಗಳಿಗೆ ಫವತಿಖಾತೆ ಪತ್ರಗಳ ವಿತರಣೆ ಸೇರಿದಂತೆ ಮಳೆ ಹಾನಿಗೆ ಪರಿಹಾರ, ಪಿಂಚಿಣಿದಾರರಿಗೆ ವೃದ್ಧಾಪ್ಯ ವೇತನ, ಸಂದ್ಯಾ ಸುರಕ್ಷಾ ಯೋಜನೆ, ವಿಧವಾ ವೇತನ ಸೇರಿದಂತೆ ಸುಮಾರು 2000 ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಪತ್ರಗಳನ್ನು ವಿತರಿಸಲಾಯಿತು. ತಹಶೀಲ್ದಾರ್ ಮನೀಷಾ ಎನ್ ಪತ್ರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ರಮೇಶ್ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಜೊತೆ ಜನರ ಅಹವಾಲುಗಳ ಅರ್ಜಿಗಳನ್ನು ಪರಿಶೀಲನೆ ಮಾಡಿದರು.
ಕೊತ್ತಕೋಟೆ ಗ್ರಾಮ ಪಂಚಾಯಿತಿ, ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಆರೋಗ್ಯ ತಪಾಸಣೆ ಮಾಡಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ಶ್ರೀನಿವಾಸ್, ಕೊತ್ತಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿ ನಾರಾಯಣ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ, ಆರೋಗ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ, ಕೃಷಿ ಸಹಾಯಕ ನಿರ್ದೇಶಕಿ ಜಿ.ಲಕ್ಷ್ಮೀ, ಮುಖಂಡರಾದ ಎಸ್.ಎಸ್.ರಮೇಶಬಾಬು, ಪಿ.ಮಂಜುನಾಥರೆಡ್ಡಿ, ಲಕ್ಷ್ಮೀನರಸಿಂಹಪ್ಪ, ಜಯಪ್ರಕಾಶರೆಡ್ಡಿ, ವಿಷ್ಣುವರ್ಧನರೆಡ್ಡಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.