ADVERTISEMENT

ಚಿಕ್ಕಬಳ್ಳಾಪುರ | ಜನಸ್ನೇಹಿ ಆಡಳಿತ ನೀಡಲು ಜಿಲ್ಲಾಧಿಕಾರಿ ಜಿ. ಪ್ರಭು ಸೂಚನೆ

ಶಿಡ್ಲಘಟ್ಟ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಜಿ. ಪ್ರಭು ಭೇಟಿ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2026, 5:13 IST
Last Updated 3 ಫೆಬ್ರುವರಿ 2026, 5:13 IST
ಶಿಡ್ಲಘಟ್ಟದ ತಾಲ್ಲೂಕು ಕಚೇರಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು
ಶಿಡ್ಲಘಟ್ಟದ ತಾಲ್ಲೂಕು ಕಚೇರಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಸಾರ್ವಜನಿಕರ ಅಹವಾಲು ಸ್ವೀಕರಿಸಿದರು   

ಶಿಡ್ಲಘಟ್ಟ: ಜನಸಾಮಾನ್ಯರ ಯಾವುದೇ ಕೆಲಸವನ್ನು ತ್ವರಿತವಾಗಿ ಮಾಡಿಕೊಡಬೇಕು. ಅವರನ್ನು ವಿನಾಕಾರಣ ಕಚೇರಿಗೆ ಅಲೆದಾಡಿಸಬಾರದು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಪ್ರಭು ಸೂಚನೆ ನೀಡಿದರು. 

ಇಲ್ಲಿನ ತಾಲ್ಲೂಕು ಕಚೇರಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ. ಪ್ರಭು ಅವರು ತಾಲ್ಲೂಕು ಕಚೇರಿಯಲ್ಲಿ ನಡೆಯುತ್ತಿರುವ ಭೂ ದಾಖಲೆಗಳ ಗಣಕೀಕರಣ ಕಾರ್ಯವನ್ನು ಪರಿಶೀಲನೆ ನಡೆಸಿದರು. ಇದೇ ವೇಳೆ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿದರು. 

ಬಳಿಕ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಕರೆಯಲಾಗುತ್ತದೆ. ಹೀಗಾಗಿ, ಜಿಲ್ಲೆಯಾದ್ಯಂತ ಇರುವ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ಜನಸ್ನೇಹಿ ಆಡಳಿತ ನೀಡಲು ತಹಶೀಲ್ದಾರ್ ಸೇರಿದಂತೆ ಎಲ್ಲ ಅಧಿಕಾರಿಗಳು ಮುಂದಾಗಬೇಕು’ ಎಂದು ಹೇಳಿದರು. 

ADVERTISEMENT

ಕಚೇರಿಯಲ್ಲಿ ಕಡತಗಳ ನಿರ್ವಹಣೆ ಹಾಗೂ ಹಾಜರಾತಿ ನಿರ್ವಹಣೆ ಮಾಡಬೇಕು. ಕಚೇರಿಗೆ ಬರುವ ನಾಗರಿಕರೊಂದಿಗೆ ಅಧಿಕಾರಿಗಳು ಸೌಜನ್ಯಯುತವಾಗಿ ನಡೆದುಕೊಳ್ಳಬೇಕು. ನಾಗರಿಕರಿಂದ ಬಂದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಸಕಾಲದಲ್ಲಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ತಹಶೀಲ್ದಾರ್ ಅವರು ಕಡ್ಡಾಯವಾಗಿ ಕುಂದುಕೊರತೆ ಸಭೆ ಆಯೋಜಿಸಬೇಕು. ತಾಲ್ಲೂಕು, ಹೋಬಳಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೂ ಸಾರ್ವಜನಿಕರ ಕುಂದುಕೊರತೆ ಸಭೆ ಆಯೋಜಿಸಿ, ಜನರ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ತಾಕೀತು ಮಾಡಿದರು. 

ಈಗಾಗಲೇ ಭೂದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ಮುಂದಿನ ಎರಡು ತಿಂಗಳೊಳಗೆ ಶಿಡ್ಲಘಟ್ಟ ತಾಲ್ಲೂಕಿನ ಎಲ್ಲ ಮೂಲ ದಾಖಲೆಗಳ ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಳ್ಳಲಿದೆ. ರೈತರು ತಾಲ್ಲೂಕು ಕಚೇರಿಗೆ ಬರುವ ಬದಲು ತಾವಿದ್ದಲ್ಲಿಯೇ ಭೂ ದಾಖಲೆಗಳನ್ನು ಪಡೆದುಕೊಳ್ಳುವ ವ್ಯವಸ್ಥೆ ತ್ವರಿತವಾಗಿ ಆಗಲಿದೆ ಎಂದರು. 

ನಗರದಲ್ಲಿರುವ ಎಲ್ಲ ಸಾರ್ವಜನಿಕ ಆಸ್ತಿಗಳ ನಿರ್ವಹಣೆ ಹಾಗೂ ಸಂರಕ್ಷಣೆ ಅತಿ ಮುಖ್ಯ. ನಗರಸಭೆ ಸಮರ್ಪಕವಾಗಿ ನಡೆಯಬೇಕಾದರೆ ಸಂಪನ್ಮೂಲವೂ ಮುಖ್ಯ. ಸ್ವಯಂ ಘೋಷಣೆಯೊಂದಿಗೆ ಕಮರ್ಷಿಯಲ್ ಜಾಗಕ್ಕೆ ಮನೆ ತೆರಿಗೆ ಕಟ್ಟುವುದು. 2000 ಅಡಿ ಜಾಗವಿದ್ದರೆ 1 ಸಾವಿರ ಅಡಿ ಜಾಗಕ್ಕೆ ಮಾತ್ರ ತೆರಿಗೆ ಕಟ್ಟುವುದು ಗಮನಕ್ಕೆ ಬಂದಿದೆ. ಹಾಗಾಗಿ ಮೊದಲ ಹಂತದಲ್ಲಿ ಎಲ್ಲ ವಾಣಿಜ್ಯ ಕಟ್ಟಡಗಳ ಪರಿಶೀಲನೆ ಕಾರ್ಯ ನಡೆಸಲಿದ್ದೇವೆ. ಈ ಹಿಂದೆ ಅವರು ಕಟ್ಟಿರುವ ತೆರಿಗೆ ಪರಿಶೀಲನೆ ನಡೆಸಿ ಕಟ್ಟಬೇಕಾದ ತೆರಿಗೆ ಹಣ ಕಟ್ಟಿಸಿಕೊಳ್ಳಲಾಗುವುದು. ಒಂದಷ್ಟು ತೆರಿಗೆ ಹಣ ಬಂದರೆ ನಗರಸಭೆಗಳನ್ನು ಮೌಲ್ಯಯುತವಾಗಿ ನಡೆಸಲು ಸಾಧ್ಯವಾಗುತ್ತದೆ ಎಂದರು.

ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಲಾಯಿತು. ಸ್ವೀಕರಿಸಿದ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ನಿಗದಿತ ಅವಧಿಯೊಳಗೆ ವಿಲೇವಾರಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ವೇಳೆ ತಹಶೀಲ್ದಾರ್ ಎನ್. ಗಗನಸಿಂಧು, ಗ್ರೇಡ್ 2 ತಹಶೀಲ್ದಾರ್ ಕೆ.ಎನ್.ಎಂ. ಮಂಜುನಾಥ್, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಹಾಜರಿದ್ದರು.

2027ಕ್ಕೆ ಹೈಟೆಕ್ ಮಾರುಕಟ್ಟೆ

ಜಿಲ್ಲಾಧಿಕಾರಿ ಜಿ. ಪ್ರಭು ಅವರು ತಾಲ್ಲೂಕು ಕಚೇರಿಗೆ ಭೇಟಿ ನೀಡುವ ಮುನ್ನ ನಗರದ ಹೊರವಲಯದ ವರದನಾಯಕನಹಳ್ಳಿ ಬಳಿ ನಿರ್ಮಾಣ ಹಂತದಲ್ಲಿರುವ ಹೈಟೆಕ್ ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಅಲ್ಲಿರುವ ಸಣ್ಣ ಪುಟ್ಟ ಒತ್ತುವರಿಗಳನ್ನು ಕೂಡಲೇ ತೆರವುಗೊಳಿಸಿ ಕಾಂಪೌಂಡ್ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು. ಮುಂಬರುವ 2027ರ ಡಿಸೆಂಬರ್ ಒಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟಿಲಾಗುವುದು. ಈ ನಿಟ್ಟಿನಲ್ಲಿ ಕಾಲಕಾಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.  ನಗರಸಭೆಯಲ್ಲಿ ಕಾರ್ಯನಿರ್ವಹಿಸುವ ಸುಮಾರು 70 ಪೌರಾಕಾರ್ಮಿಕರ ಸುರಕ್ಷತೆ ಹಾಗೂ ಆರೋಗ್ಯ ನಮಗೆ ಮುಖ್ಯ. ಅವರಿಗೆ ಸಿಗಬೇಕಾದ ಆರೋಗ್ಯ ಸೇವೆ ಸೇರಿದಂತೆ ಪ್ರತಿನಿತ್ಯ ನೀಡುವ ತಿಂಡಿ ಹಾಗೂ ಗೃಹಭಾಗ್ಯದಡಿ ಮನೆ ನಿರ್ಮಾಣ ಇನ್ನಿತರೆ ಎಲ್ಲ ಸೇವೆಗಳನ್ನು ಕಲ್ಪಿಸಲಾಗುವುದು ಎಂದು ಡಿಸಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.