
ಚಿಂತಾಮಣಿ: ನಗರದಲ್ಲಿನ ಗ್ರಂಥಾಲಯದ ಕಟ್ಟಡವನ್ನು ₹5 ಕೋಟಿ ವೆಚ್ಚದಲ್ಲಿ ನವೀಕರಣಗೊಳಿಸಿ, ಡಿಜಿಟಲ್ ಗ್ರಂಥಾಲಯವನ್ನಾಗಿ ರೂಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ನಗರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ, ಮಾತನಾಡಿದರು.
ಗ್ರಂಥಾಲಯದ ಎರಡು ಅಂತಸ್ತಿನ ಕಟ್ಟಡ ನಿರ್ಮಾಣದ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ. ಕಂಪ್ಯೂಟರೀಕರಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಿರಂತರವಾಗಿ ತರಬೇತಿ ನೀಡುವ ಚಿಂತನೆ ಇದೆ ಎಂದರು.
ಕಟ್ಟಡ ಕಾಮಗಾರಿ ನಿರ್ಮಾಣವಾಗುವವರೆಗೆ ತಾತ್ಕಾಲಿಕವಾಗಿ ಗ್ರಂಥಾಲಯ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸಲಿದೆ. ಅಗತ್ಯವಾದರೆ ಇನ್ನೂ ಹೆಚ್ಚಿನ ಅನುದಾನಕ್ಕೂ ಪ್ರಸ್ತಾವನೆ ಸಲ್ಲಿಸಲಾಗುವುದು. ಅತ್ಯಂತ ಸುಸಜ್ಜಿತ ಮತ್ತು ಆಧುನಿಕ ತಂತ್ರಜ್ಞಾನ ಗ್ರಂಥಾಲಯ ನಿರ್ಮಿಸಲಾಗುವುದು ಎಂದರು.
ನಗರದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವಿಸ್ತರಣೆ ಮಾಡುವ ಕಟ್ಟಡ ಕಾಮಗಾರಿ ಹಾಗೂ ಕ್ರಿಟಿಕಲ್ ಕೇರ್ ಆಸ್ಪತ್ರೆಯ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಅಲ್ಲದೆ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದರು.
ಜಿಲ್ಲಾಧಿಕಾರಿ ಜಿ.ಪ್ರಭು, ತಹಶೀಲ್ದಾರ್ ಸುದರ್ಶನ ಯಾದವ್, ಪೌರಾಯುಕ್ತ ಚಲಪತಿ, ಎಸ್.ಸುಬ್ರಮಣ್ಯಂ, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.