ADVERTISEMENT

ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ಎಚ್‌.ವಿ.ಮಂಜುನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2019, 11:27 IST
Last Updated 11 ಸೆಪ್ಟೆಂಬರ್ 2019, 11:27 IST
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಮಂಜುನಾಥ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಮಂಜುನಾಥ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಸದ್ಯದ ಸ್ಥಿತಿಯಲ್ಲಿ ಮಳೆ ಕೊರತೆ ಸುಧಾರಿಸುವಂತೆ ಕಾಣುತ್ತಿಲ್ಲ. ಆದ್ದರಿಂದ ಅಧಿಕಾರಿಗಳು ಆದ್ಯತೆ ಮೆರೆಗೆ ಕುಡಿಯುವ ನೀರಿಗೆ ಕೊರತೆಯಾಗದ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಮಂಜುನಾಥ್ ಹೇಳಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳನ್ನು ಉದ್ದೇಶಿಸಿ, ‘ಪ್ರಸ್ತುತ ಕುಡಿಯುವ ನೀರು ಸಮಸ್ಯೆ ಇರುವ ಕಡೆಗಳಲ್ಲಿ ಆದ್ಯತೆ ಮೆರೆಗೆ ನೀರು ಪೂರೈಕೆಗೆ ಕ್ರಮಕೈಗೊಳ್ಳಬೇಕು. ಕೊಳವೆಬಾವಿಗಳು ಬತ್ತಿದ ಕಡೆಗಳಲ್ಲಿ ಹೊಸದಾಗಿ ಅಥವಾ ಹಳೆಯ ಬಾವಿಗಳನ್ನು ಮರು ಕೊರೆಯಿಸುವ ಕಾರ್ಯವನ್ನು ತ್ವರಿತಗತಿಯಲ್ಲಿ ನಡೆಸಬೇಕು’ ಎಂದು ಅಧಿಕಾರಿಗಳಿಗೆ ಆದೇಶಿಸಿದರು.

‘ಹಳೆ ಕೊಳವೆಬಾವಿಗಳನ್ನು ಮರು ಕೊರೆಯುವಾಗ ಅದರಲ್ಲಿರುವ ಪಂಪ್‌, ಮೋಟರ್‌ಗಳನ್ನು ಪರಿಶೀಲಿಸಿ ಚೆನ್ನಾಗಿದ್ದರೆ ಪುನಃ ಬಳಕೆ ಮಾಡಬೇಕು. ಅನಗತ್ಯವಾಗಿ ಹೊಸ ಪಂಪ್, ಮೋಟರ್‌ಗಳಿಗೆ ಹಣ ಖರ್ಚು ಮಾಡಬಾರದು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಪಂಪ್‌, ಮೋಟರ್‌ಗಳ ದಾಸ್ತಾನು ನಿರ್ವಹಣೆ ಮಾಡಬೇಕು’ ಎಂದು ಹೇಳಿದರು.

‘ಇವತ್ತು ಜಿಲ್ಲೆಯಲ್ಲಿ ಮಳೆ ನೀರು ಸಂಗ್ರಹಿಸುವ ಕಾರ್ಯ ಸಮರೋಪಾದಿಯಲ್ಲಿ ನಡೆಯಬೇಕಿದೆ. ಆ ನಿಟ್ಟಿನಲ್ಲಿ ಕಲ್ಯಾಣಿಗಳ ಸ್ವಚ್ಛತೆ ಮತ್ತು ಮಳೆ ನೀರು ಸಂಗ್ರಹ ವ್ಯವಸ್ಥೆ ಅಳವಡಿಕೆ ಕಾರ್ಯವನ್ನು ಮುತುವರ್ಜಿಯಿಂದ ಮಾಡಬೇಕು. 10 ದಿನಗಳ ಒಳಗೆ ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಎಲ್ಲ ಕಲ್ಯಾಣಿಗಳ ಸ್ವಚ್ಛತೆಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು’ ಎಂದು ಸೂಚಿಸಿದರು.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್‌ ಶಿವಕುಮಾರ್, ‘ಸದ್ಯ ಜಿಲ್ಲೆಯಲ್ಲಿ 362 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಆ ಪೈಕಿ 151 ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ನಿತ್ಯ 395 ಟ್ಯಾಂಕರ್‌ ನೀರು ಪೂರೈಸಲಾಗುತ್ತಿದೆ. 211 ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ ಅವರನ್ನು ಉದ್ದೇಶಿಸಿ ಅಧ್ಯಕ್ಷರು, ‘ಆಶಾ ಕಾರ್ಯಕರ್ತೆಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಐದು ವರ್ಷದ ಒಳಗಿನ ಅಪೌಷ್ಟಿಕ ಮಕ್ಕಳನ್ನು ಗುರುತಿಸಿ, ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿರುವ ಅಪೌಷ್ಟಿಕ ಮಕ್ಕಳ ಪುನಶ್ಚೇತನ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸುವ ಕೆಲಸವಾಗಬೇಕು. ಈ ಬಗ್ಗೆ ಗಮನ ಹರಿಸುವಂತೆ ತಾಲ್ಲೂಕು ವೈದ್ಯರಿಗೆ ಆದೇಶಿಸಿ’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತಾ ವ್ಯವಸ್ಥೆ ಸರಿಯಾಗಿಲ್ಲ ಎಂದು ದೂರುಗಳು ಬರುತ್ತಿವೆ. ಸ್ವಚ್ಛತಾ ವ್ಯವಸ್ಥೆ ಗುತ್ತಿಗೆ ಪಡೆದವರಿಗೆ ದಂಡ ವಿಧಿಸಿ, ನೋಟಿಸ್‌ ಜಾರಿ ಮಾಡಿ. ಆಗಲು ಅವರು ತಿದ್ದಿಕೊಳ್ಳದಿದ್ದರೆ ಅವರನ್ನು ತೆಗೆದುಹಾಕಿ ಬೇರೆಯವರಿಗೆ ಆ ಕೆಲಸ ವಹಿಸಿ’ ಎಂದು ಸೂಚಿಸಿದರು.

ಡಿಡಿಪಿಐ ಎಸ್‌.ಜಿ.ನಾಗೇಶ್‌ ಅವರನ್ನು ಉದ್ದೇಶಿಸಿ ಮಂಜುನಾಥ್, ‘ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರಿಗೆ ಮಾತ್ರ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡಿ. ಉಳಿದಂತೆ ಯಾರು ಶಿಫಾರಸಿಗೂ ಮಣಿಯದೆ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಿ’ ಎಂದು ಹೇಳಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಫೌಜಿಯಾ ತರನ್ನುಮ್ ಅವರು, ‘ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮೂಡಿಸುವ ನಿಟ್ಟಿನಲ್ಲಿ 6 ರಿಂದ 9ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ‘ಸ್ಪೆಲ್ ಬೀ’ಯಂತಹ ಕಾರ್ಯಕ್ರಮಗಳನ್ನು ಆಯೋಜಿಸಬೇಕಾಗಿದೆ. ಶಿಕ್ಷಣ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಮತ್ತಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕಿದೆ’ ಎಂದು ತಿಳಿಸಿದರು.

ಅಧ್ಯಕ್ಷರು ಸಿಇಒ ಅವರನ್ನು ಉದ್ದೇಶಿಸಿ, ‘ವ್ಯಾಜ್ಯದಿಂದಾಗಿ ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆ ಅಡಿ ಕಳೆದ ಮೂರು ವರ್ಷಗಳಿಂದ ಒಂದೇ ಒಂದು ಕೊಳವೆಬಾವಿ ಕೊರೆಯಿಸಲು ಸಾಧ್ಯವಾಗಿಲ್ಲ. ಇದರಿಂದ ಅರ್ಹ ಫಲಾನುಭವಿಗಳು ಸಮಸ್ಯೆ ಅನುಭವಿಸುವಂತಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸಿ ಆದಷ್ಟು ಬೇಗ ಸಮಸ್ಯೆ ಬಗೆಹರಿಸುವ ಕೆಲಸ ಮಾಡುವ ಅಗತ್ಯವಿದೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಪಿ.ನಿರ್ಮಲಾ ಮುನಿರಾಜು, ಮುಖ್ಯ ಯೋಜನಾಧಿಕಾರಿ ಎನ್.ಮಾಧುರಾಮ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.