ADVERTISEMENT

ಡ್ರಗ್ಸ್ ಮಾಫಿಯಾ; ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 5:23 IST
Last Updated 16 ಸೆಪ್ಟೆಂಬರ್ 2020, 5:23 IST
ಕೆ.ಎಚ್.ಮುನಿಯಪ್ಪ
ಕೆ.ಎಚ್.ಮುನಿಯಪ್ಪ   

ಶಿಡ್ಲಘಟ್ಟ: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದಡಿ ಸಿಲುಕಿರುವ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಿ ಎಂದು ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,‘ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದ ಯುವಕರನ್ನು ರಕ್ಷಣೆ ಮಾಡಲು ಡ್ರಗ್ಸ್ ಮಾಫಿಯಾವನ್ನು ಮಟ್ಟ ಹಾಕಬೇಕೆಂದು ಒತ್ತಾಯಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆ ಕಲ್ಪಿಸಲು ಸಂವಿಧಾನ ರಚಿಸಿದ್ದಾರೆ. ದೇಶದ ಪ್ರಧಾನಮಂತ್ರಿ ಸಂವಿಧಾನವನ್ನು ಗೌರವಿಸುತ್ತಾರೆ. ಆದರೇ ಅವರ ಪಕ್ಷದ ನಾಯಕರು-ಮಂತ್ರಿಗಳು ಸಂವಿಧಾನವನ್ನು ಬದಲಿಸಲು ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಹೇಳುವ ಮೂಲಕ ಸಂವಿಧಾನವನ್ನು ಅಪಮಾನಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ಪಕ್ಷದ ನೀತಿಯನ್ನು ಜನ ಅರ್ಥ ಮಾಡಿಕೊಳ್ಳುವ ಮೂಲಕ ತಕ್ಕ ಪಾಠ ಕಲಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದರು.

ADVERTISEMENT

ಪ್ರತಿ ವರ್ಷ ಎರಡು ಕೋಟಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದಾಗಿ ವಾಗ್ದಾನ ಮಾಡಿ ಅಧಿಕಾರಕ್ಕೆ ಬಂದ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರ ಉದ್ಯೋಗ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ರೈತರು ಬೆಳೆಯುತ್ತಿರುವ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಇಲ್ಲದೇ ಸಂಕಷ್ಟದ ಸ್ಥಿತಿಯಲ್ಲಿದ್ದಾರೆ. ಅವರಿಗೆ ಶಕ್ತಿ ತುಂಬಿಸುವ ಕೆಲಸ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಮಾಡುತ್ತಿಲ್ಲ. ಕೂಲಿ ಕಾರ್ಮಿಕರು, ರೈತರು ಮತ್ತು ಜನಸಾಮಾನ್ಯರ ಹಿತವನ್ನು ಮರೆತು ಆಡಳಿತ ನಡೆಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷಕ್ಕಾಗಿ ಎಲ್ಲ ರೀತಿಯ ತ್ಯಾಗ ಮಾಡಲು ತಯಾರಿದ್ದೇನೆ. ಯಾರ ತಪ್ಪು ಮಾಡಿದ್ದಾರೆ ಎಂದು ದೇವರು ನೋಡಿಕೊಳ್ಳಲಿ. ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದಿಂದ ಬಂದ ನನಗೆ ಕಾಂಗ್ರೆಸ್ ಪಕ್ಷ ಮಹತ್ವದ ಜವಾಬ್ದಾರಿ ನೀಡಿದ್ದು ಅದಕ್ಕಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಅಭಿನಂದಿಸುತ್ತೇನೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.