ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ ಆ.13ರಂದು ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷ ಹಾಗು ಪ್ರಗತಿ ಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಕೆಡಿಎಸ್‌ಎಸ್) ರಾಜ್ಯಸಂಚಾಲಕ ವಿಜಯ ನರಸಿಂಹ ತಿಳಿಸಿದರು.
ನಗರದಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿದೆ. ಈ ಕುರಿತು ಧ್ವನಿ ಎತ್ತುವವರ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗುತ್ತಾರೆ. ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ. ಜಿಲ್ಲೆಯಲ್ಲಿ ಅಪರಾಧಿಗಳಿಗೆ ನೀಡುವ ಶಿಕ್ಷೆಯ ಪ್ರಮಾಣವು ಬಹಳಷ್ಟು ಕುಸಿಯುತ್ತಿದೆ ಎಂದು ಆರೋಪಿಸಿದರು.
ಚಿಂತಾಮಣಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಮತ್ತೆ ಅದೇ ಜಾಗದಲ್ಲಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮತಿ ನೀಡಬೇಕು ಎನ್ನುವುದು ಸೇರಿದಂತೆ 18ಕ್ಕೂ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಆ.13ರಂದು ಜೈ ಭೀಮ್ ಹಾಸ್ಟೆಲ್ ಆವರಣದಿಂದ ಜಿಲ್ಲಾಡಳಿತ ಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ವಿವರಿಸಿದರು.
ಸಮಿತಿ ರಾಜ್ಯ ಸಂಚಾಲಕ ಬಾಲಕುಂಟಹಳ್ಳಿ ಗಂಗಾಧರಪ್ಪ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪರಿಶಿಷ್ಟರು ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಿದ್ದರೂ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟುವಲ್ಲಿ ಸರ್ಕಾರ ವಿಫಲವಾಗಿದೆ. ದಲಿತ ಮುಖಂಡರ ಮೇಲೆ ರೌಡಿಪಟ್ಟಿ ತೆರೆಯಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕದಿದ್ದಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುವುದು ಎಂದರು.
ಮುಖಂಡರಾದ ಮುನಿಕೃಷ್ಣಯ್ಯ, ನಾಗಪ್ಪ, ನಾರಾಯಣಸ್ವಾಮಿ, ಕವಾಲಿ ವೆಂಕಟರವಣಪ್ಪ, ರಮಣ್ ಅಕೇಶ್, ಸುರೇಶ್, ನಂದೀಶ್, ಮಂಜು, ನವೀನ್ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.