ADVERTISEMENT

ಪ್ರಜಾಪ್ರಭುತ್ವದ ‌ಉಳಿವಿಗಾಗಿ ಕಾಂಗ್ರೆಸ್‌ಗೆ ಬೆಂಬಲ : ದಸಂಸ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2023, 14:36 IST
Last Updated 22 ಏಪ್ರಿಲ್ 2023, 14:36 IST
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ದಸಂಸ ಮುಖಂಡರು
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ದಸಂಸ ಮುಖಂಡರು   

ಗೌರಿಬಿದನೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಶಕ್ತಿಗಳನ್ನು ಮಣಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲಾಗುವುದು ಎಂದು ದಸಂಸ ಜಿಲ್ಲಾ ಸಂಚಾಲಕ ಸಿ.ಜಿ.ಗಂಗಪ್ಪ ಹೇಳಿದರು.

ಶನಿವಾರ ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಕಾಂಗ್ರೆಸ್ ಗೆಲುವು ಅನಿವಾರ್ಯ. ಚುನಾವಣೆಯಲ್ಲಿ ಕಾಂಗ್ರೆಸ್ ಆಯ್ಕೆಯಾಗಿ ಸರ್ಕಾರ ರಚಿಸಿದ ಬಳಿಕ ಜನಪರ ಆಡಳಿತ ನೀಡುವುದರ ಜೊತೆಗೆ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿ ಹಿಡಿಯಬೇಕು. ಪರಿಶಿಷ್ಟರಿಗೆ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಅನುಗುಣವಾಗಿ ರಾಜ್ಯದ ಬಜೆಟ್‌ನ ಅನುದಾನ ಕಡ್ಡಾಯವಾಗಿ ಮೀಸಲಿಡಬೇಕು. ಅವಶ್ಯಕತೆಗೆ ತಕ್ಕಂತೆ ಯೋಜನೆಗಳನ್ನು ರೂಪಿಸಬೇಕು’ ಎಂದು ಹೇಳಿದರು.

ತಾಲ್ಲೂಕು ಸಂಚಾಲಕ ಪಿ.ನರಸಿಂಹಮೂರ್ತಿ ಮಾತನಾಡಿ, ‘ರಾಜ್ಯ ಸರ್ಕಾರದಲ್ಲಿ ಬಹುತೇಕ ದಿನಗಳಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೊರಗುತ್ತಿಗೆ ನೇಮಕಾತಿ ರದ್ದು ಮಾಡಬೇಕು ಹಾಗೂ ಪಿಟಿಸಿಎಲ್ ಕಾಯ್ದೆ ಬಲಪಡಿಸಿ ದಲಿತರ ಭೂಮಿ ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತಾಪಿ ಜನರ ವಿರೋಧಿ ಭೂಸುಧಾರಣೆ ಕಾಯ್ದೆ, ವಿದ್ಯುತ್ ಖಾಸಗೀಕರಣ ಮಸೂದೆ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡಲು ಒತ್ತಾಯಿಸಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂಬ ಶರತ್ತುಗಳನ್ನು ವಿಧಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡಲಾಗುವುದು’ ಎಂದು ಹೇಳಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಇಡಗೂರು ಸೋಮಯ್ಯ, ಜೆ.ಎನ್. ಆದಿನಾರಾಯಣಪ್ಪ, ನಗರಗೆರೆ ಲಕ್ಷ್ಮಿನಾರಾಯಣ, ಹುದುಗೂರು ಬಾಲಪ್ಪ, ಕೆ.ಎಸ್.ತಿಪ್ಪಯ್ಯ, ಧರಣಿಕುಮಾರ್, ತೇಜು ಇದ್ದರು.

ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ದಸಂಸ ಮುಖಂಡರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.