ADVERTISEMENT

ಡಿಜಿಟಲ್‌ ಕಲಿಕೆಗೆ ಒತ್ತು: ಸಚಿವ ಡಾ.ಕೆ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 5:51 IST
Last Updated 20 ಫೆಬ್ರುವರಿ 2021, 5:51 IST
ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡವನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು
ಚಿಕ್ಕಬಳ್ಳಾಪುರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡವನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಉದ್ಘಾಟಿಸಿದರು   

‌‌‌ಚಿಕ್ಕಬಳ್ಳಾಪುರ: ‘ಕೋವಿಡ್ ನಂತರ ಡಿಜಿಟಲ್ ಕಲಿಕೆಗೆ ಹೆಚ್ಚು ನೀಡಲಾಗಿದ್ದು, ಜಿಲ್ಲೆಯಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಪರಿಹರಿಸಲಾಗುತ್ತಿದೆ’ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

₹3 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕೋವಿಡ್ ಲಾಕ್‌ಡೌನ್‌ನಿಂದಾಗಿ ಡಿಜಿಟಲ್ ಕಲಿಕೆಗೆ ಹೆಚ್ಚು ಮಹತ್ವ ನೀಡಲಾಗಿದೆ. ಆದರೆ, ಅನೇಕ ಗ್ರಾಮಗಳಲ್ಲಿ ಇದರ ಸವಾಲು ಅಧಿಕವಾಗಿದೆ. ವಿದ್ಯುತ್, ಅಂತರ್ಜಾಲದ ಸಮಸ್ಯೆ ಎದುರಾಗಿದೆ. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ADVERTISEMENT

‘ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ವ್ಯಾಸಂಗ ಮಾಡಿದ ಶಿಕ್ಷಣ ಸಂಸ್ಥೆ ಇದಾಗಿದ್ದು, ಇದನ್ನು ಅಭಿವೃದ್ಧಿಪಡಿಸಲಾಗಿದೆ. ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದೆ. ಸರ್ಕಾರ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯ ನೀಡಲಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಒಳಗಾಗದೆ ಉತ್ತಮವಾಗಿ ವ್ಯಾಸಂಗ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನದಿಂದ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುತ್ತಿದ್ದು, ಇದನ್ನು ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಪಡೆಯಬೇಕು. ಸಾಮಾಜಿಕ ಜಾಲತಾಣಗಳನ್ನು ಕೆಟ್ಟದ್ದಕ್ಕೆ ಹೆಚ್ಚು ಬಳಸಿಕೊಳ್ಳಲಾಗುತ್ತಿದೆ. ಸುಳ್ಳನ್ನು ಬೇಗನೆ ಜನರು ನಂಬುತ್ತಾರೆ. ಲಸಿಕೆಯಿಂದ ಅಪಾಯವಿದೆ ಎಂದು ಜಾಲತಾಣದಲ್ಲಿ ಬರೆದರೆ ಅದನ್ನೇ ಜನರು ನಂಬುತ್ತಾರೆ. ಇದರಿಂದಾಗಿ ಲಸಿಕೆ ಅಭಿಯಾನಕ್ಕೆ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.