ADVERTISEMENT

ಚಿಕ್ಕಬಳ್ಳಾಪುರ: ಸಿರಿಧಾನ್ಯಗಳನ್ನು ಬೆಳೆಯಲು ರೈತರಿಗೆ ಪ್ರೋತ್ಸಾಹಿಸಿ

ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಒ ಬಿ.ಫೌಜಿಯಾ ತರನ್ನುಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 14:13 IST
Last Updated 23 ಜೂನ್ 2020, 14:13 IST
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಆಧುನಿಕ ಜೀವನ ಶೈಲಿಯಿಂದ ಉಂಟಾಗುತ್ತಿರುವ ವಿವಿಧ ದೈಹಿಕ ಕಾಯಿಲೆಗಳನ್ನು ನಿಯಂತ್ರಿಸುವಲ್ಲಿ ಸಿರಿಧಾನ್ಯಗಳ ಬಳಕೆ ಅಗತ್ಯವಾಗಿದೆ. ಆದ್ದರಿಂದ. ರೈತರಿಗೆ ಸಿರಿಧಾನ್ಯ ಬೆಳೆಯಲು ಉತ್ತೇಜನ ನೀಡುವ ಜತೆಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲು ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಣಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕಡಿಮೆ ನೀರಿನಲ್ಲಿ ಉತ್ತಮವಾಗಿ ಬೆಳೆಯಬಹುದಾದ ಸಿರಿಧಾನ್ಯಗಳನ್ನು ಬೆಳೆಯುವಂತೆ ರೈತರಿಗೆ ಪ್ರೇರೇಪಿಸುವ ಕೆಲಸ ಮಾಡಬೇಕು. ಯುವಪೀಳಿಗೆಗಳಿಗೂ ಇಷ್ಟವಾಗುವ ರೀತಿಯಲ್ಲಿ ಸಿರಿಧಾನ್ಯಗಳ ಆಹಾರಗಳನ್ನು ತಯಾರಿಸಿ ಮಾರುಕಟ್ಟೆಗೆ ಪರಿಚಯಿಸುವ ಕೆಲಸ ಕೂಡ ನಡೆಯಬೇಕಿದೆ’ ಎಂದು ತಿಳಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಮಳೆಯ ಅಭಾವದಿಂದ ಬರಗಾಲ ಎದುರಾಗಿದೆ. ಕಡಿಮೆ ನೀರಿನಲ್ಲಿ ಬೆಳೆಯಲಾಗುವಂತಹ ಸಿರಿಧಾನ್ಯ ಬೆಳೆಗಳಿಗೆ ರೈತರು ಹೆಚ್ಚು ಆದ್ಯತೆ ನೀಡಲು ಅರಿವು ಮೂಡಿಸಿ. ರೈತರು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಬೇಕಾದರೆ ಮಾರುಕಟ್ಟೆಯಲ್ಲಿ ಸಿರಿಧಾನ್ಯಗಳಿಗೆ ಬೇಡಿಕೆ ಹೆಚ್ಚಾಗಬೇಕು. ಹಾಗಾಗಿ, ಸಿರಿಧಾನ್ಯಗಳ ಮಾರುಕಟ್ಟೆಯನ್ನು ವಿಸ್ತರಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು’ ಎಂದು ಹೇಳಿದರು.

‘ನರೇಗಾ ಯೋಜನೆ ಅಡಿ ಬರುವ ಸವಲತ್ತುಗಳನ್ನು ಪ್ರತಿಯೊಬ್ಬ ಫಲಾನುಭವಿಗೆ ತಲುಪಿಸುವ ಕೆಲಸ ಮಾಡಬೇಕು. ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸುವಂತಹ ಭಿತ್ತಿಪತ್ರಗಳನ್ನು ಪ್ರದರ್ಶಿಸಬೇಕು’ ಎಂದರು.

‘ಅಂತರ್ಜಲ ಚೇತನ ಯೋಜನೆ ಅಡಿ ಬರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪುರ್ಣಗೊಳಿಸಲು ಅಧಿಕಾರಿಗಳು ಸಿದ್ಧರಾಗಬೇಕು. ನರೇಗಾ ಯೋಜನೆ ಅಡಿ ಕೈಗೆತ್ತಿಕೊಂಡಿರುವ ಜಾನುವಾರುಗಳಿಗೆ ಶೇಡ್ ನಿರ್ಮಾಣ ಕಾಮಗಾರಿಗಳ ಬಗ್ಗೆ ನೋಡಲ್ ಅಧಿಕಾರಿ ಮಾಹಿತಿ ಪಡೆದು ಅರ್ಹ ರೈತ ಫಲಾನುಭವಿಗಳಿಗೆ ತಲುಪಿಸುವ ಕಾರ್ಯಮಾಡಬೇಕು’ ಎಂದು ತಿಳಿಸಿದರು.

‘ಅಧಿಕಾರಿಗಳುಕಳಪೆ ಕೀಟನಾಶಕ, ರಸಗೊಬ್ಬರ ಹಾಗೂ ಬೀಜ ಮಾರಾಟ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಿತವಾಗಿ ಅಂಗಡಿಗಳಿಗೆ ತೆರಳಿ ಪರಿಶೀಲನೆ ನಡೆಸಬೇಕು. ನಿಯಮಗಳು ಉಲ್ಲಂಘಿಸುವ ಮಾರಾಟಗಾರರ ವಿರುದ್ಧ ಕಾನೂನುಕ್ರಮ ಜರುಗಿಸಬೇಕು’ ಎಂದು ಸೂಚನೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ, ಕೃಷಿ ಇಲಾಖೆಯ ಉಪನಿರ್ದೇಶಕಿ ಪಂಕಜಾ ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.