ADVERTISEMENT

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಅಬಾಧಿತ

ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 15:33 IST
Last Updated 18 ಮಾರ್ಚ್ 2020, 15:33 IST
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಮಾತನಾಡಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಮಾರ್ಚ್‌ 27 ರಿಂದ ಏಪ್ರಿಲ್ 9ರ ವರಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ 15,476 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮಹಿಳೆಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಮುಖಗವಸು (ಮಾಸ್ಕ್) ಹಾಕಿಕೊಂಡು ಪರೀಕ್ಷೆ ಬರೆಯಬಹುದು. ಯಾವುದೇ ತರಹದ ಡಿಜಿಟಲ್ ಕೈಗಡಿಯಾರ ಬಳಸದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಜಿ.ನಾಗೇಶ್ ಮಾತನಾಡಿ, ‘ಈ ಬಾರಿ ಬಾಗೇಪಲ್ಲಿಯಲ್ಲಿ- 7, ಚಿಕ್ಕಬಳ್ಳಾಪುರ -15, ಚಿಂತಾಮಣಿ- 14, ಗೌರಿಬಿದನೂರು- 14, ಗುಡಿಬಂಡೆ -4, ಶಿಡ್ಲಘಟ್ಟ- 10 ಹೀಗೆ ಜಿಲ್ಲೆಯಲ್ಲಿ ಒಟ್ಟು 64 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಲ್ಲಿರುವ 645 ಪರೀಕ್ಷಾ ಕೊಠಡಿಗಳಲ್ಲಿ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಸ್ವೀಕರಿಸಲು ಮುಖ್ಯ ಅಧೀಕ್ಷಕರು ಮತ್ತು ಮೇಲ್ವಿಚಾಕರನ್ನು ನೇಮಕ ಮಾಡಲಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಒಳಗೊಂಡಂತೆ ಪ್ರತಿ ತಾಲ್ಲೂಕಿಗೊಂದರಂತೆ ಆರು ಜಾಗೃತ ದಳಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 29 ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ಡಿವೈಎಸ್‌ಪಿ ರವಿಶಂಕರ್, ಜಿಲ್ಲಾ ಖಜಾನೆ ಉಪನಿರ್ದೇಶಕ ಬಿ.ಎಂ.ಮುನಿರೆಡ್ಡಿ ಹಾಗೂ ಎಲ್ಲಾ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.