ADVERTISEMENT

ಚಿಕ್ಕಬಳ್ಳಾಪುರ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಜಿಲ್ಲಾಧಿಕಾರಿ ಕಚೇರಿ ಎದುರು ರೈತ ಸಂಘ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2024, 13:50 IST
Last Updated 21 ಆಗಸ್ಟ್ 2024, 13:50 IST
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ರೈತ ಸಂಘದ ಸದಸ್ಯರು
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ರೈತ ಸಂಘದ ಸದಸ್ಯರು   

ಚಿಕ್ಕಬಳ್ಳಾಪುರ: ಹಲವು ವರ್ಷಗಳಿಂದ ಜಮೀನುಗಳಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈತ ಸಂಘದ ಸದಸ್ಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

30 ವರ್ಷಗಳಿಂದ ಜಮೀನುಗಳಲ್ಲಿ ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ ನೀಡಿ ರೈತರನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಈ ಕಿರುಕುಳವನ್ನು ಕೈ ಬಿಡದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು. 

ಕೆರೆ ಮತ್ತು ರಾಜಕಾಲುವೆ ಒತ್ತುವರಿ, ಕೆರೆಗಳಲ್ಲಿ ಬೆಳೆದಿರುವ ಮುಳ್ಳಿನ ಗಿಡಗಳು ಮತ್ತು ಹೂಳು ತೆರವುಗೊಳಿಸಬೇಕು. ಒತ್ತುವರಿ ತೆರವುಗೊಳಿಸುವಂತೆ ಹಲವು ಬಾರಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಕ್ರಮವಹಿಸಿಲ್ಲ. ಎಚ್‌.ಎನ್.ವ್ಯಾಲಿ ಯೋಜನೆಯ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸಿ ಹರಿಸದ ಕಾರಣ ಭೂಮಿ ವಿಷವಾಗುತ್ತಿದೆ. 

ADVERTISEMENT

ಗುಂಡುತೋಪುಗಳನ್ನು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಬೇಕು. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ತಕ್ಷಣವೇ ಜಮೀನು ಮಂಜೂರು ಮಾಡಬೇಕು. 

ರೈತರ ಬೆಳೆಗಳಿಗೆ ಸಾಕಾಗುವಷ್ಟು ರಸಗೊಬ್ಬರ ಪೂರೈಸಬೇಕು. ಬಾಗೇಪಲ್ಲಿ ತಾಲ್ಲೂಕಿನ ಮಾರ್ಗಾನುಕುಂಟೆ ಚಿಂತಮಾಕಲದಿನ್ನೆ ಸರ್ವೆ ನಂ 25ರ ಸ್ಮಶಾನಕ್ಕೆ ದಾರಿ ಕಲ್ಪಿಸಬೇಕು. ಬಾಗೇಪಲ್ಲಿ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಇ–ಸ್ವತ್ತು ನೀಡುತ್ತಿಲ್ಲ. ಈ ಬಗ್ಗೆ ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ನರೇಗಾ ದುರ್ಬಳಕೆ ಆಗುತ್ತಿದೆ. ಗುಡಿಬಂಡೆ ತಾಲ್ಲೂಕಿನ ಎಲ್ಲ ಸರ್ವೆ ನಂಬರ್‌ಗಳ ದುರಸ್ತಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಿದರು. 

ರೈತ ಸಂಘದ ಲಕ್ಷ್ಮಿನಾರಾಯಣ ರೆಡ್ಡಿ, ಎಸ್‌.ಎಂ.ರವಿಪ್ರಕಾಶ್, ಅರುಣ್ ಕುಮಾರ್, ಚನ್ನೇಗೌಡ, ಮಾರುತಿ, ಕೆ.ಆರ್.ಈಶ್ವರ್ ರೆಡ್ಡಿ, ನಾರಾಯಣಸ್ವಾಮಿ ಹಾಗೂ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.