ಶಿಡ್ಲಘಟ್ಟ: ನಗರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹2 ಕೋಟಿಗೆ ಮಂಜೂರಾತಿ ನೀಡಿದ್ದು, ಈಗಾಗಲೇ ₹75 ಲಕ್ಷ ಬಿಡುಗಡೆ ಮಾಡಿರುವುದಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.
ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಸಚಿವರಿಂದ ಸಿಕ್ಕ ಉತ್ತರಗಳ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.
‘ಸರ್ಕಾರಿ ಕಾರ್ಯಕ್ರಮ ಹಾಗೂ ಇತರೆ ಕಾರ್ಯಕ್ರಮಗಳನ್ನು ಮಾಡಲು ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಅನುದಾನದ ಬಿಡುಗಡೆಗೆ ಕೋರಿದೆ. ಅದಕ್ಕೆ ಸಮಾಜ ಕಲ್ಯಾಣ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅನುದಾನ ಲಭ್ಯತೆಗೆ ಅನುಗುಣವಾಗಿ ಬಾಕಿ ಅನುದಾನ ಬಿಡುಗಡೆ ಮಾಡುವ ಮೂಲಕ ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮವಹಿಸುವುದಾಗಿ ತಿಳಿಸಿದ್ದಾರೆ’ ಎಂದರು.
‘ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣ ರಸ್ತೆ ಅಭಿವೃದ್ಧಿ ಮತ್ತು ನಿರ್ವಹಣೆಗೆ ಅನುದಾನ ಮಂಜೂರಾತಿ ಮಾಡಿ ಹಾಳಾಗಿರುವ ರಸ್ತೆ ದುರಸ್ತಿ ಪಡಿಸಲು ಕ್ರಮವಹಿಸಲಾಗುತ್ತಿದೆ ಎಂದು ಲಿಖಿತ ಉತ್ತರ ಕೊಟ್ಟಿದ್ದಾರೆ’ ಎಂದರು.
‘ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಹೊಸದಾಗಿ ಅಂಗನವಾಡಿ ಕೇಂದ್ರ ತೆರೆಯಲು ಅಗತ್ಯಕ್ಕೆ ತಕ್ಕಂತೆ ಹೊಸ ಅಂಗನವಾಡಿ ಕೇಂದ್ರ ಸ್ಥಾಪಿಸಲು, ಕೇಂದ್ರ ಸರ್ಕಾರದ ಅನುಮೋದನೆ ಪಡೆದು ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.