ADVERTISEMENT

ಬಾಗೇಪಲ್ಲಿಯಲ್ಲಿ ಗಿರಿಜನೋತ್ಸವ

ಫೆ.27ಕ್ಕೆ ಸಿರಿಧಾನ್ಯ ಮೇಳ, ಕೃಷಿ ಮಾಹಿತಿ, ಪ್ರದರ್ಶನದ ಮೆರುಗು

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 4:31 IST
Last Updated 23 ಫೆಬ್ರುವರಿ 2021, 4:31 IST
ಎಸ್.ಎನ್.ಸುಬ್ಬಾರೆಡ್ಡಿ, ಶಾಸಕರು
ಎಸ್.ಎನ್.ಸುಬ್ಬಾರೆಡ್ಡಿ, ಶಾಸಕರು   

ಬಾಗೇಪಲ್ಲಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಗಿರಿಜನೋತ್ಸವ’– ಕಲೆ, ಸಾಹಿತ್ಯ ಸಂಸ್ಕೃತಿ ಸಂಗಮ ಕಾರ್ಯಕ್ರಮವನ್ನು ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾವರಣದಲ್ಲಿ ಫೆ.27ರಂದು ಸಂಜೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳ ಸಭೆಯಲ್ಲಿ ಸೋಮವಾರ ಅವರು ಮಾತನಾಡಿದರು.

ಕೋವಿಡ್‌ನಿಂದ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿ ಕಾರ್ಯಕ್ರಮಗಳು ಇರಲಿಲ್ಲ. ಇದೀಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗಿರಿಜನೋತ್ಸವ ಆಯೋಜಿಸಲಾಗಿದೆ. ಜಿಲ್ಲಾ, ತಾಲ್ಲೂಕಿನ ಕಲಾವಿದರಿಂದ ಕಲಾ ಪ್ರದರ್ಶನ ಇರುತ್ತದೆ. ಚಿತ್ರಾವತಿ ಮೇಲುಸೇತುವೆಯಿಂದ ಬಾಲಕಿಯರ ಸರ್ಕಾರಿ ಶಾಲೆಯವರಿಗೂ ಬೃಹತ್ ಕಲಾತಂಡಗಳೊಂದಿಗೆ ಭವ್ಯವಾದ ಭುವನೇಶ್ವರಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ವೇದಿಕೆ ಕಾರ್ಯಕ್ರಮದಲ್ಲಿ ನಾದಸ್ವರ ಕಚೇರಿ, ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಮಾತನಾಡಿ, ಗಡಿ ತಾಲ್ಲೂಕಿನಲ್ಲಿ ಕನ್ನಡವನ್ನು ಮತ್ತಷ್ಟು ಗಟ್ಟಿಗೊಳಿಸಲು, ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳಿಸಲು, ಜನಜಾಗೃತಿ ಮೂಡಿಸಲು ಗಿರಿಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈಗಾಗಲೇ ಪೂರ್ವಸಿದ್ಧತೆಗಳನ್ನು ಮಾಡಲಾಗಿದೆ ಎಂದರು.

ಕೃಷಿ ಇಲಾಖೆಯಿಂದ ಸಿರಿಧಾನ್ಯಗಳ ಮೇಳ, ತೋಟಗಾರಿಕೆ, ರೇಷ್ಮೆ, ಪಶು, ಆರೋಗ್ಯ ಸೇರಿದಂತೆ ವಿವಿಧ ಇಲಾಖೆ, ಸರ್ಕಾರಿ ಸೌಲಭ್ಯಗಳ ಬಗ್ಗೆ ಪ್ರದರ್ಶನಗಳ ಮಳಿಗೆಗಳನ್ನು ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನರಸಿಂಹಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಆರ್.ನರೇಂದ್ರಬಾಬು, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ.ಮಂಜುನಾಥ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ವೈ.ನಾರಾಯಣ, ಕನ್ನಡ ವಿಭಾಗದ ಮುಖ್ಯಸ್ಥ ಡಾ.ಕೆ.ಎಂ.ನಯಾಜ್ ಅಹಮದ್, ಗ್ರಂಥಪಾಲಕ ಡಾ.ಸಿಎಸ್.ವೆಂಕಟರಾಮರೆಡ್ಡಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಪ್ರಧಾನಕಾರ್ಯದರ್ಶಿ ಡಿ.ಎನ್.ಕೃಷ್ಣಾರೆಡ್ಡಿ, ಚಿಕ್ಕಬಳ್ಳಾಪುರದ ವಿವೇಕನಾಂದ ಕಲಾ ಬಳಗದ ಅಧ್ಯಕ್ಷ ಸೋ.ಸು.ನಾಗೇಂದ್ರನಾಥ್, ಕನ್ನಡ ಕಲಾ ಸಂಘ ಅಧ್ಯಕ್ಷ ಪಿ.ಎಸ್.ರಾಜೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.