
ಗೌರಿಬಿದನೂರು: ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯುವ ಮೂಲಕ ರೈತರ ಹಿತ ಕಾಯಬೇಕು ಎಂದು ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಎಂ.ಆರ್. ಲಕ್ಷ್ಮಿನಾರಾಯಣ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಒಂದು ಕ್ವಿಂಟಾಲ್ ಮೆಕ್ಕೆಜೋಳಕ್ಕೆ ₹2,400 ಬೆಂಬಲ ಬೆಲೆ ಘೋಷಿಸಿದೆ. ಇದರ ಜೊತೆಗೆ ರಾಜ್ಯ ಸರ್ಕಾರವು ಕ್ವಿಂಟಲ್‌ಗೆ ₹600 ಬೆಂಬಲ ಘೋಷಿಸಬೇಕು. ಈ ಮೂಲಕ ರೈತರ ಹಿತ ಕಾಯಲು ಮುಂದಾಗಬೇಕು. ಇಲ್ಲದಿದ್ದರೆ, ಇದೇ 24ರಂದು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಮುಂಭಾಗದಲ್ಲಿ ರೈತರು ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಬೇಕಾಗುತ್ತದೆ. ನಂತರ ತಾಲ್ಲೂಕು ಪಂಚಾಯಿತಿ ಆವರಣದಿಂದ ಎಪಿಎಂಸಿ ಮಾರುಕಟ್ಟೆವರೆಗೆ ರೈತರು ಪ್ರತಿಭಟನಾ ಜಾಥಾ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ಲೋಕೇಶ್ ಗೌಡ ಮಾತನಾಡಿ, ಕೇಂದ್ರ ಸರ್ಕಾರ ಸುಮಾರು 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಅಮದು ಮಾಡಿಕೊಳ್ಳುತ್ತಿದೆ. ಇದರಿಂದಾಗಿ ನಮ್ಮ ರೈತರು ಬೆಳೆದ ಮೆಕ್ಕೆಜೋಳಕ್ಕೆ ಸರಿಯಾದ ಬೆಲೆ ಸಿಗುತ್ತಿಲ್ಲ ಎಂದು ದೂರಿದರು.
ಪ್ರಜಾ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಆರ್.ಎನ್. ರಾಜು ಮಾತನಾಡಿ, ಒಂದು ಎಕರೆ ಮೆಕ್ಕೆಜೋಳ ಬೆಳೆಯಲು ರೈತರಿಗೆ ಕನಿಷ್ಠ ₹40 ಸಾವಿರ ಖರ್ಚು ಬರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಪ್ರಮಾಣದ ಇಳುವರಿ ಸಿಗುತ್ತಿಲ್ಲ. ಇದರಿಂದಾಗಿ ರೈತರು ವ್ಯವಸಾಯದಿಂದಲೇ ವಿಮುಖರಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸನತ್ ಕುಮಾರ್, ಮುದ್ದುರಂಗಪ್ಪ, ಗೋಪಿ, ಬಾಬು, ವೆಂಕಟೇಶ್, ನರಸಾರೆಡ್ಡಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.