
ಗೌರಿಬಿದನೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೈಪುಣ್ಯತೆಯಿಂದ ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ಬಂದಿದೆ. ಅದೇ ರೀತಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಷ್ಟಪಟ್ಟು ಪಕ್ಷ ಕಟ್ಟಿದ್ದಾರೆ ಎಂದು ಡಾ. ಎಚ್.ಎನ್. ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು.
ನಗರದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗದಂತೆ ವರಿಷ್ಠರು ನೋಡಿಕೊಳ್ಳುತ್ತಾರೆ. ರಾಜ್ಯ ಸರ್ಕಾರವು ಸುಭದ್ರವಾಗಿರುತ್ತದೆ. ಇಂಥ ಒಳ್ಳೆಯ ಸರ್ಕಾರವನ್ನು ಕಳೆದುಕೊಳ್ಳಲು ಜನರು ಸಿದ್ಧರಿಲ್ಲ. ಇಬ್ಬರು ನಾಯಕತ್ವ ಮುಂದುವರಿಯಲಿದೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯವಾಗಿವೆ. ಬೇರೆ ದೇಶ, ರಾಜ್ಯಗಳಲ್ಲಿ ಇವುಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಟೀಕೆ ಮಾಡುತ್ತಿದ್ದ ಬಿಜೆಪಿಯೇ ಮಹಾರಾಷ್ಟ್ರ, ಬಿಹಾರದಲ್ಲಿ ಇದನ್ನೇ ಜಾರಿಗೊಳಿಸಿದೆ ಎಂದರು.
ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಲಿದೆ ಎಂಬ ಟೀಕೆಗೆ ಉತ್ತರ ನೀಡುವ ಹಾಗೆ ರಾಜ್ಯ ಸರ್ಕಾರ ಎಲ್ಲ ಜಿಲ್ಲೆಗಳಲ್ಲಿ ಸಮಾವೇಶಗಳನ್ನು ನಡೆಸಿ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದೆ. ನ. 24ರಂದು ಜಿಲ್ಲೆಯ ಶಿಡ್ಲಘಟ್ಟದಲ್ಲಿ ₹2,000 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಚಾಲನೆ ನೀಡುತ್ತಿದ್ದಾರೆ ಎಂದರು.
3ನೇ ಹಂತದ ಎಚ್.ಎನ್. ವ್ಯಾಲಿ ಕಾಮಗಾರಿ, ವಿಶ್ವದರ್ಜೆ ಮಾರುಕಟ್ಟೆ ನಿರ್ಮಾಣ, ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಹಮ್ಮಿಕೊಳ್ಳಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಅಲ್ಲಿಂದಲೇ ಚಾಲನೆ ನೀಡಲಿದ್ದಾರೆ. ನಮ್ಮ ತಾಲ್ಲೂಕಿನ 6 ಎಎನ್‌ಎಂ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಮತ್ತು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾದ ಮೇಲೆ ಮೊದಲ ಬಾರಿಗೆ ತಾಲ್ಲೂಕಿಗೆ ಬಂದಿದ್ದರು. ಇದೀಗ ಜಿಲ್ಲೆಗೆ 2ನೇ ಭೇಟಿಯಾಗಿ ಶಿಡ್ಲಘಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ರಾಜ್ಯವು ಆರ್ಥಿಕವಾಗಿ ಸದೃಢವಾಗಿದೆ ಎಂದು ಸಾರಲಿದ್ದಾರೆ ಎಂದರು.
ತಾಲ್ಲೂಕಿನ ಅಲಿಪುರ ಮೊರಾರ್ಜಿ ವಸತಿ ಶಾಲೆ, ಡಿ.ಪಾಳ್ಯಕ್ಕೆ ಅಂಬೇಡ್ಕರ್ ವಸತಿ ಶಾಲೆ ನಾನು ಮಂಜೂರು ಮಾಡಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್. ಕೇಶವರೆಡ್ಡಿ, ಪ್ರಕಾಶ್‌ರೆಡ್ಡಿ, ಹರ್ಷವರ್ಧನರೆಡ್ಡಿ, ತಾರಾನಾಥ್, ವೇಣು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.