ADVERTISEMENT

ಗೃಹಲಕ್ಷ್ಮಿ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ₹ 1.09 ಲಕ್ಷ ಕೋಟಿ ಜಮೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 15:33 IST
Last Updated 4 ಜುಲೈ 2025, 15:33 IST
ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಯಲುವಳ್ಳಿ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ‍ಪ್ರತಿಮೆಗೆ ಮುತ್ತಿಟ್ಟರು
ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಯಲುವಳ್ಳಿ ರಮೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ‍ಪ್ರತಿಮೆಗೆ ಮುತ್ತಿಟ್ಟರು   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 21 ಲಕ್ಷ ಫಲಾನುಭವಿಗಳು ನೋಂದಣಿಯಾಗಿದ್ದು, ₹1.09 ಲಕ್ಷ ಕೋಟಿ ಜಮೆಯಾಗಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ಎನ್. ರಮೇಶ್ ತಿಳಿಸಿದರು.

ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನದ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ 5,43,061 ಕುಟುಂಬಗಳಿಗೆ ಪಡಿತರ ವಿತರಿಸುವ ವ್ಯವಸ್ಥೆಯಾಗಿದೆ. ಯುವ ನಿಧಿ ಯೋಜನೆಯಡಿ 4,282 ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳನ್ನು ನೋಂದಣಿ ಮಾಡಿ ₹5.84 ಕೋಟಿ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ADVERTISEMENT

ಗೃಹ ಜ್ಯೋತಿ ಯೋಜನೆಯಡಿ 6.31 ಲಕ್ಷ ಫಲಾನುಭವಿಗಳಿಗೆ 200 ಯುನಿಟ್ ಉಚಿತ ವಿದ್ಯುತ್ ನೀಡಿ ₹23,371 ಲಕ್ಷ ವೆಚ್ಚ ಮಾಡಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ 6.21 ಕೋಟಿ ಉಚಿತ ಟಿಕೆಟ್ ವಿತರಿಸಲಾಗಿದೆ ಎಂದು ಹೇಳಿದರು.

ಗ್ಯಾರಂಟಿಗಳನ್ನು ಶೇ 100ರಷ್ಟು ಅರ್ಹರಿಗೆ ತಲುಪಿಸಲು ಬದ್ಧ. ಅರ್ಹ ಫಲಾನುಭವಿಗಳು ಅನಿವಾರ್ಯ ಕಾರಣಗಳಿಂದ ವಂಚಿತರಾಗಿದ್ದಲ್ಲಿ ಅಂತಹವರು ಕೂಡಲೇ ಸಂಬಂಧಪಟ್ಟ ಇಲಾಖೆಯ ಕಚೇರಿಗಳನ್ನು ಸಂಪರ್ಕಿಸಿ ಯೋಜನೆಗಳ ಸೌಲಭ್ಯ ಪಡೆಯಬೇಕು ಎಂದು ಮನವಿ ಮಾಡಿದರು.

ಜುಲೈ1 ರಿಂದ 4ರವರೆಗೆ ನಿಲ್ದಾಣದಲ್ಲಿ ಗ್ಯಾರಂಟಿ ಯೋಜನೆಗಳ ವಸ್ತು ಪ್ರದರ್ಶನ ಹಮ್ಮಿಕೊಂಡಿದ್ದು, ಸಾವಿರಾರು ಜನರು  ಮಾಹಿತಿ ಪಡೆದಿದ್ದಾರೆ ಎಂದರು.

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿದರು. ಸೆಲ್ಫಿ ಪಾಯಿಂಟ್‌ಗಳಲ್ಲಿ ಗಣ್ಯರು ಫೋಟೊ ತೆಗೆಸಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸುಬ್ಬಾರೆಡ್ಡಿ, ರಾಮಕೃಷ್ಣಪ್ಪ, ಆದಿರೆಡ್ಡಿ, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷ ಜಯರಾಮ್ ಕೆ.ಎನ್.,  ಮುನಿನಾರಾಯಣಪ್ಪ, ನರೇಂದ್ರ,  ಮಧುಸೂದನ್ ರೆಡ್ಡಿ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅತಿಕ್ ಪಾಷಾ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಡಿ.ಟಿ.ಒ ಪ್ರಭು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕ ಎಂ.ಆರ್. ಮಂಜುನಾಥ ಪಾಲ್ಗೊಂಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.