ADVERTISEMENT

ಚೇಳೂರು | ವಿದ್ಯಾರ್ಥಿಗಳ ಸ್ಥಳಾಂತರ; ದುರಸ್ತಿಗೆ ₹ 14 ಲಕ್ಷಕ್ಕೆ ಮನವಿ

ಚಿಲಕಲನೇರ್ಪು ಹಾಸ್ಟೆಲ್ ದುರಸ್ತಿಗೆ ಕ್ರಮ; ಸೆ.19ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟವಾಗಿತ್ತು ವರದಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 6:27 IST
Last Updated 22 ಸೆಪ್ಟೆಂಬರ್ 2025, 6:27 IST
ಚೇಳೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಕ್ಪಾಲ್ ಚಿಲಕಲನೇರ್ಪು ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು
ಚೇಳೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಕ್ಪಾಲ್ ಚಿಲಕಲನೇರ್ಪು ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು   

ಚೇಳೂರು: ತಾಲ್ಲೂಕಿನ ಚಿಲಕಲನೆರ್ಪು ಗ್ರಾಮದಲ್ಲಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ದುರಸ್ತಿಗೆ ಇಲಾಖೆಯು ಮುಂದಾಗಿದೆ. 

ಸೆ.19ರಂದು ‘ಅಧ್ವಾನದ ಚಿಲಕಲನೇರ್ಪು ಹಾಸ್ಟೆಲ್’ ಎಂದು ಪ್ರಜಾವಾಣಿಯಲ್ಲಿ ವರದಿ ಪ್ರಕಟವಾಗಿತ್ತು.

ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ತುರ್ತು ಕ್ರಮಕ್ಕೆ ಮುಂದಾಗಿದ್ದಾರೆ.
ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಕ್ಪಾಲ್ ಶನಿವಾರ ಚಿಲಕಲನೇರ್ಪು ವಸತಿ ನಿಲಯಕ್ಕೆ ಭೇಟಿ ನೀಡಿ ಕಟ್ಟಡ ಪರಿಶೀಲಿಸಿದರು. ನಂತರ ಮಕ್ಕಳಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದರು.

ADVERTISEMENT

ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅವರನ್ನು ತಾತ್ಕಾಲಿಕವಾಗಿ ಸುರಕ್ಷಿತವಾದ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ.

‘ಇಲಾಖೆ ಉಪನಿರ್ದೇಶಕಿ ಮುನಿರತ್ನಮ್ಮ ಅವರ ಜೊತೆ ಚರ್ಚೆ ನಡೆಸಿದ್ದೇನೆ. ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಅವರು ಕಟ್ಟಡ ದುರಸ್ತಿಗಾಗಿ ₹ 14 ಲಕ್ಷ ಬಿಡುಗಡೆ ಮಾಡುವಂತೆ ಆಯುಕ್ತರಿಗೆ ಪತ್ರ ಬರೆದಿದ್ದಾರೆ’ ಎಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸಕ್ಪಾಲ್ ತಿಳಿಸಿದರು.

‘ವಸತಿ ನಿಲಯದ ದುರಸ್ತಿಗೆ ಹಣ ಬಿಡುಗಡೆಯಾಗಲಿದೆ. ಕಟ್ಟಡ ದುರಸ್ತಿ ಕಾರ್ಯ ಪೂರ್ಣಗೊಳ್ಳುವವರೆಗೂ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಸಾಧ್ಯವಾಗಲಿದೆ’ ಎಂದು ಹಾಸ್ಟೆಲ್ ಮೇಲ್ವಿಚಾರಕ ವೈ.ಎನ್. ಮಂಜುನಾಥ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.