ಚಿಕ್ಕಬಳ್ಳಾಪುರ: ಮಾಸಿಕ ಕನಿಷ್ಠ ₹36 ಸಾವಿರ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಾಸ್ಟೆಲ್ ಮತ್ತು ವಸತಿ ನಿಲಯಗಳಲ್ಲಿ ಕೆಲಸ ಮಾಡುವ ಹೊರಗುತ್ತಿಗೆ ಸಿಬ್ಬಂದಿ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟಿಸಿದರು.
ನಿವೃತ್ತಿಯವರೆಗೆ ಎಲ್ಲ ಹಾಸ್ಟೆಲ್ ಹೊರಗುತ್ತಿಗೆ ಸಿಬ್ಬಂದಿಗೆ ಸೇವಾ ಭದ್ರತೆ ನೀಡಬೇಕು. ಕಾಯಂ ಮಾಡಬೇಕು. ಬಾಕಿ ಇರುವ ವೇತನವನ್ನು ತಕ್ಷಣವೇ ನೀಡಬೇಕು. ಕಾರ್ಮಿಕ ಇಲಾಖೆ ಕಾನೂನು ಪ್ರಕಾರ ಇಎಸ್‌ಐ, ಐಡಿ ಕಾರ್ಡ್, ಪಿಎಫ್ ತುಂಬಿದ ರಸೀದಿ, ವೇತನ ಚೀಟಿ, ಸೇವಾ ಪ್ರಮಾಣ ಪತ್ರ, ಆದೇಶ ಪತ್ರ ನೀಡಬೇಕು. ಜಿಲ್ಲಾಧಿಕಾರಿ ಅವರು ಇಲಾಖೆಯ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಸಭೆ ಕರೆಯಬೇಕು, ಬೀದರ್ ಜಿಲ್ಲೆಯ ಮಾದರಿಯಲ್ಲಿ ವಿವಿದೋದ್ದೇಶ ಸಹಕಾರ ಸಂಘವನ್ನು ಚಿಕ್ಕಬಳ್ಳಾಪುರ ಜುಲ್ಲೆಯಲ್ಲಿಯೂ ರಚಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಪ್ರತಿಭಟನಕಾರರ ಮನವಿ ಸ್ವೀಕರಿಸಿದರು.
ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುನಿಯಪ್ಪ ಕೆ., ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ನರಸಿಂಹಮೂರ್ತಿ, ಭಾಗ್ಯಮ್ಮ, ಅಮರಾವತಿ, ಮಂಜುನಾಥ್, ಪ್ರಸನ್ನ ಕುಮಾರ್, ರಾಮಪ್ಪ, ಪ್ರಮೀಳಾ, ವೆಂಕಟರೋಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.