ADVERTISEMENT

ಸುಗ್ರಿವಾಜ್ಞೆಗಳನ್ನು ಕಾನೂನು ಮಾಡದಂತೆ ಒತ್ತಾಯ

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 10:21 IST
Last Updated 16 ಸೆಪ್ಟೆಂಬರ್ 2020, 10:21 IST
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು. 
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.    

ಚಿಕ್ಕಬಳ್ಳಾಪುರ: ರೈತ ಹಾಗೂ ಕಾರ್ಮಿಕ ವಿರೋಧಿ ಸುಗ್ರಿವಾಜ್ಞೆಗಳನ್ನು ಕಾನೂನು ಮಾಡದಂತೆ ಒತ್ತಾಯಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ‘ರಾಜ್ಯ ಸರ್ಕಾರ ಮೂರು ಕಾಯ್ದೆಗಳಿಗೆ ತಿದ್ದುಪಡಿ ತರಲು ಸುಗ್ರಿವಾಜ್ಞೆಗಳನ್ನು ಹೊರಡಿಸಿದೆ. ಅವುಗಳಿಗೆ ಸೆಪ್ಟೆಂಬರ್ 21 ರಿಂದ ನಡೆಯುವ ವಿಧಾನಸಭೆ ಅಧಿವೇಶನದಲ್ಲಿ ಶಾಸನಸಭೆ ಅಂಗಿಕಾರ ಪಡೆಯಲು ಸರ್ಕಾರ ಸಿದ್ಧತೆ ನಡೆಸಿದೆ’ ಎಂದು ಹೇಳಿದರು.

‘ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕೈಗಾರಿಕಾ ವ್ಯಾಜ್ಯಗಳ ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದೆ. ಇದರಿಂದ ರೈತರು, ಕಾರ್ಮಿಕರು, ಜನಸಾಮಾನ್ಯರ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗಲಿದೆ’ ಎಂದು ತಿಳಿಸಿದರು.

ADVERTISEMENT

‘ಈ ಸುಗ್ರಿವಾಜ್ಞೆಗಳು ಆರ್ಥಿಕ ಅಸಮಾನತೆಯನ್ನು ತೀವ್ರಗೊಳಿಸಲಿವೆ. ದಲಿತ, ಅಲ್ಪಸಂಖ್ಯಾತ, ಮಹಿಳೆ ಹೀಗೆ ವಿವಿಧ ಸಾಮಾಜಿಕ ಜನ ಸಮೂಹಗಳನ್ನು ಸಂಕಷ್ಟಕ್ಕಿಡು ಮಾಡುವಂತಹ ಪರಿಣಾಮಗಳನ್ನು ಉಂಟು ಮಾಡಲಿವೆ. ಜನಸಾಮಾನ್ಯರು ಕೋವಿಡ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಹೊತ್ತಿನಲ್ಲಿ ಪ್ರತಿಭಟಿಸಲಾಗದ ಸಮಯ ದುರುಪಯೋಗಪಡಿಸಿಕೊಂಡು ಇಂತಹ ಸುಗ್ರಿವಾಜ್ಞೆಗಳನ್ನು ಜಾರಿಗೆ ತಂದಿರುವುದು ಸಂವಿಧಾನ ಬಾಹಿರವಾಗಿದೆ’ ಎಂದು ಆರೋಪಿಸಿದರು.

‘ಕೇಂದ್ರ ಸರ್ಕಾರ ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೋರೆಟ್‌ ಕಂಪೆನಿಗಳ ಸುಪರ್ದಿಗೆ ಒಪ್ಪಿಸುವ ಉದ್ದೇಶ ಹೊಂದಿದೆ. ಅದಕ್ಕಾಗಿಯೇ ಸ್ವಾತಂತ್ರ್ಯ, ಸಮಾನತೆ, ಸಾಮಾಜಿಕ ನ್ಯಾಯ, ಒಕ್ಕೂಟ ತತ್ವ, ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ವಿರುದ್ಧವಾಗಿ ಸುಗ್ರಿವಾಜ್ಞೆಗಳ ಮೂಲಕ ಕಾಯ್ದೆಗಳ ತಿದ್ದುಪಡಿಗೆ ಮುಂದಾಗಿದೆ’ ಎಂದು ಹೇಳಿದರು.

‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು’ ಎಂದು ತಿಳಿಸಿದರು.

‘ರೈತನೇ ದೇಶದ ಬೆನ್ನೆಲುಬು ಎಂದು ಹೇಳುತ್ತಲೇ ರೈತರನ್ನು ಮೂಲೆಗುಂಪು ಮಾಡುವ ಕೆಲಸ ಮಾಡಲಾಗುತ್ತಿದೆ. ಉದ್ಯಮಿಗಳ ಲಾಬಿಗೆ ಮಣಿದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರನ್ನು ನಿರ್ಲಕ್ಷ್ಯ ಮಾಡುತ್ತ ಬಂದ ಪರಿಣಾಮ, ಇವತ್ತು ಅನ್ನದಾತರು ಬೀದಿಗೆ ಬೀಳುವ ಸ್ಥಿತಿ ಬಂದಿದೆ’ ಎಂದು ತಿಳಿಸಿದರು.

‘ಲಾಕ್‌ಡೌನ್‌ನಂತಹ ಸಂದರ್ಭದಲ್ಲಿ ಸರ್ವಾಧಿಕಾರಿ ಕ್ರಮದಿಂದ ಸುಗ್ರಿವಾಜ್ಞೆ ಮೂಲಕ ಹಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಬೇಕಿದೆ. ಸಚಿವರು ವಿಧಾನಸಭೆಯ ಅಧಿವೇಶನದಲ್ಲಿ ಈ ಸುಗ್ರಿವಾಜ್ಞೆಗಳನ್ನು ವಿರೋಧಿಸಬೇಕು’ ಎಂದು ಆಗ್ರಹಿಸಿದರು.

ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಚಿಕ್ಕಬಳ್ಳಾಪುರ ತಾಲ್ಲೂಕು ಘಟಕದ ಪದಾಧಿಕಾರಿಗಳಾದ ರಾಜಣ್ಣ, ಮುನಿನರಸಪ್ಪ, ದೊಡ್ಡನರಸಿಂಹಪ್ಪ, ವೆಂಕಟೇಶಪ್ಪ, ಬಿ.ವೆಂಕಟರಾಯಪ್ಪ, ಬಸವರಾಜು, ರಾಮಕೃಷ್ಣಪ್ಪ, ಜೆ.ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.