ADVERTISEMENT

ಹದಗೆಟ್ಟ ರಸ್ತೆಗಳ ಡಾಂಬರೀಕರಣಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2020, 14:45 IST
Last Updated 7 ಅಕ್ಟೋಬರ್ 2020, 14:45 IST
ಕನ್ನಡಸೇನೆ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್‌ ಅವರಿಗೆ ಮನವಿ ಸಲ್ಲಿಸಿದರು.
ಕನ್ನಡಸೇನೆ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್‌ ಅವರಿಗೆ ಮನವಿ ಸಲ್ಲಿಸಿದರು.   

ಚಿಕ್ಕಬಳ್ಳಾಪುರ: ನಗರಸಭೆಯ ವ್ಯಾಪ್ತಿಯಲ್ಲಿ ತುಂಬಾ ಹದಗೆಟ್ಟಿರುವ ರಸ್ತೆಗಳ ಡಾಂಬರೀಕರಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಕನ್ನಡಸೇನೆ ಪದಾಧಿಕಾರಿಗಳು ಬುಧವಾರ ಹೆಚ್ಚುವರಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಕನ್ನಡಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ರವಿಕುಮಾರ್, ‘ಚಿಕ್ಕಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಸ್ತೆಗಳು ತುಂಬಾ ಹದಗೆಟ್ಟು ಹೋಗಿದ್ದು, ಸಾರ್ವಜನಿಕರು ನಗರದಲ್ಲಿ ಸಂಚರಿಸಲು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.

‘ರಸ್ತೆಗಳಲ್ಲಿ ಗುಂಡಿ ಬಿದ್ದು ವಾಹನ ಸವಾರರು ಅಪಘಾತಗಳಿಗೆ ತುತ್ತಾಗುತ್ತಿದ್ದಾರೆ. ನಗರದ ಪ್ರಮುಖ ರಸ್ತೆಗಳಾದ ನಂದಿ ರಸ್ತೆ, ಗಂಗಮ್ಮ ಗುಡಿ ರಸ್ತೆಗಳಲ್ಲಿ ವಿವಿಧ ಕಾಮಗಾರಿಗಳಿಗಾಗಿ ರಸ್ತೆಗಳನ್ನು ಅಗೆದು ಸರಿಯಾಗಿ ಡಾಂಬರೀಕರಣ ಮಾಡದ ಕಾರಣ ಸಾರ್ವಜನಿಕರು ಸಂಚಾರಕ್ಕೆ ಪರದಾಡುವಂತಾಗಿದೆ’ ಎಂದು ತಿಳಿಸಿದರು.

ADVERTISEMENT

‘ಜಿಲ್ಲಾಧಿಕಾರಿ ಅವರು ನಗರ ಸಂಚಾರ ಕೈಗೊಂಡು ರಸ್ತೆಗಳ ರಿಪೇರಿಗೆ ಕ್ರಮಕೈಗೊಂಡು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಸಂಘಟನೆ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.