
ಚಿಂತಾಮಣಿ: ಮಹಾಶಿವರಾತ್ರಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು. ಕೈವಾರದ ಎಲ್ಲ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು. ಬೆಳಗ್ಗೆಯಿಂದಲೇ ದೂರದ ಊರುಗಳಿಂದ ಬಂದಿದ್ದ ಭಕ್ತರು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿದರು.
ಭೀಮಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ: ಭೀಮಲಿಂಗೇಶ್ವರ ದೇವಾಲಯದಲ್ಲಿ ಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಳಿಗ್ಗೆ 8ರಿಂದ 11ಗಂಟೆವರೆಗೆ ಪಂಚ ಶಿವಲಿಂಗಗಳಿಗೆ ರುದ್ರಾಭಿಷೇಕ, ಅಷ್ಟವಧಾನ ಸೇವೆ, ಸಹಸ್ರ ಬಿಲ್ವಾರ್ಚನೆ ಸೇರಿದಂತೆ ವಿವಿಧ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಮಹಾಮಂಗಳಾರತಿ ನೆರವೇರಿತು.
ಇತರ ದೇವಾಲಯಗಳಲ್ಲಿ ಭಕ್ತರ ಸಂದಣಿ: ಕೈವಾರ ಅಮರನಾರಾಯಣಸ್ವಾಮಿ ದೇವಾಲಯ ಮತ್ತು ಯೋಗಿನಾರಾಯಣ ಮಠದಲ್ಲೂ ಶಿವರಾತ್ರಿ ಪ್ರಯುಕ್ತ ಭಕ್ತರ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ತಾತಯ್ಯ ಅವರ ಮೂಲ ಬೃಂದಾವನವನ್ನು ವಿವಿಧ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ಆಂಧ್ರಪ್ರದೇಶ, ತಮಿಳುನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಭಕ್ತರು ವಿಶೇಷವಾಗಿ ಯೋಗಿನಾರಾಯಣ ಮಠಕ್ಕೆ ಆಗಮಿಸಿದ್ದರು. ರಾತ್ರಿ ಜಾಗರಣೆಯಲ್ಲಿ ಭಾಗವಹಿಸಿದ್ದರು. ಮಠದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ದೇವಾಲಯಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆದರು.
ಧರ್ಮಾಧಿಕಾರಿ ಎಂ.ಆರ್. ಜಯರಾಂ ಮತ್ತು ಟ್ರಸ್ಟ್ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.