ADVERTISEMENT

ಉಸ್ತುವಾರಿ ಸಚಿವರು ಈ ನೀರು ಬಳಸಲಿ: ಸಂಸದ ಡಾ.ಕೆ.ಸುಧಾಕರ್‌ ಆಕ್ರೋಶ

ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಮೂರನೇ ಹಂತದ ಶುದ್ಧೀಕರಣಕ್ಕೆ ನಕಾರ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 4:57 IST
Last Updated 2 ಆಗಸ್ಟ್ 2025, 4:57 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಚಿಕ್ಕಬಳ್ಳಾಪುರ: ಕೆ.ಸಿ.ವ್ಯಾಲಿ ಮತ್ತು ಎಚ್‌.ಎನ್‌.ವ್ಯಾಲಿ ಯೋಜನೆಯ ನೀರಿನ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ ಎಂಬ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಹೇಳಿಕೆಯನ್ನು ಸಂಸದ ಡಾ.ಕೆ.ಸುಧಾಕರ್ ತೀವ್ರವಾಗಿ ಖಂಡಿಸಿದ್ದಾರೆ. 

ಈ ಕುರಿತು ‘ಡೆಕ್ಕನ್ ಹೆರಾಲ್ಡ್‌’ನಲ್ಲಿ ಪ್ರಕಟವಾಗಿರುವ ಸುದ್ದಿಯನ್ನು ತಮ್ಮ ಫೇಸ್‌ಬುಕ್ ಖಾತೆ ಮತ್ತು ‘ಎಕ್ಸ್‌’ನಲ್ಲಿ ಸಂಸದರು ಹಂಚಿಕೊಂಡಿದ್ದಾರೆ. 

ಜನರು ಸುರಕ್ಷಿತವಲ್ಲದ ನೀರನ್ನು ಕುಡಿಯಬೇಕು ಎಂದು ಕಾಂಗ್ರೆಸ್ ಸರ್ಕಾರವು ಬಯಸುತ್ತಿದೆಯಾ? ಸಾರ್ವಜನಿಕ ಆರೋಗ್ಯ ಸುರಕ್ಷತೆ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿ ಇಲ್ಲವಾ?

ADVERTISEMENT

ಕೆ.ಸಿ ವ್ಯಾಲಿ ಮತ್ತು ಎಚ್.ಎನ್ ವ್ಯಾಲಿ ಯೋಜನೆಗಳಡಿಯಲ್ಲಿ ಮೂರನೇ ಹಂತದ ಶುದ್ಧೀಕರಣ ಅಗತ್ಯವಿಲ್ಲ. ಮೂರು ಹಂತದ ಶುದ್ಧೀಕರಣವಾದರೆ ಕುಡಿಯುವ ನೀರಿಗಾಗಿ ಬಳಸಬಹುದು ಎಂಬ ರಾಜ್ಯ ಸರ್ಕಾರದ ನಿಲುವು ಅತ್ಯಂತ ಕಳವಳಕಾರಿ ಮತ್ತು ಖಂಡನೀಯ.

ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು, ಮೂರು ಹಂತದ ಶುದ್ಧೀಕರಣವಾದರೆ ಆ ನೀರನ್ನು ಕುಡಿಯಲು ಬಳಸಬಹುದು ಎಂದು ಹೇಳಿದ್ದಾರೆ. ಈ ನೀರನ್ನು ಮೊದಲು ಸಚಿವರೇ ಕುಡಿದು ಹಾಗೂ ತಮ್ಮ ಮನೆಗಳಲ್ಲಿ ಉಪಯೋಗಿಸಿ ತೋರಿಸಲಿ. ಹಾಗೆಯೇ ಕಾಂಗ್ರೆಸ್‌ ಶಾಸಕರಿಗೆ ಮತ್ತು ಸಂಪುಟ ಸಹೋದ್ಯೋಗಿಗಳಿಗೆ ಕುಡಿಯಲು ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ದಿವಾಳಿ ಆಗಿದೆ. ಮೂರನೇ ಹಂತದ ಶುದ್ಧೀಕರಣ ಮಾಡಲು ಸರ್ಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂದು ಪ್ರಾಮಾಣಿಕತೆಯಿಂದ ಒಪ್ಪಿಕೊಳ್ಳಲಿ. ಅದು ಬಿಟ್ಟು ಮೂರನೇ ಹಂತದ ಶುದ್ಧೀಕರಣವೇ ಅಗತ್ಯವಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡುವುದು ಯಾವ ಸೀಮೆ ನ್ಯಾಯ? ಎಂದು ಡಾ.ಕೆ.ಸುಧಾಕರ್ ಪ್ರಶ್ನಿಸಿದ್ದಾರೆ. 

ಕಾಂಗ್ರೆಸ್‌ನ ದಿವಾಳಿ ಸರ್ಕಾರದ ಪಾಪಕ್ಕೆ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ ಜನರು ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳಬೇಕಾ? ತಮ್ಮ ಪಾಪರ್ ಸರ್ಕಾರದ ಅಯೋಗ್ಯತೆಗೆ ಅಮಾಯಕ ಜನರು ಬಲಿ ಆಗಬೇಕಾ? ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ ಮೂರನೇ ಹಂತದ ಶುದ್ಧೀಕರಣ ಮಾಡಿಸಲಿ. ಇಲ್ಲವಾದರೆ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮೂರನೇ ಹಂತದ ಶುದ್ಧೀಕರಣ ಯೋಜನೆ ಜಾರಿ ಮಾಡಲಿದೆ ಎಂದು ‘ಎಕ್ಸ್‌’ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.