ADVERTISEMENT

ಜಿಲ್ಲಾ ಪಂಚಾಯಿತಿ ಅಧ್ಯಕ್ಷನಿಗೂ ಕೋವಿಡ್‌?

ಜಿಲ್ಲೆಯಲ್ಲಿ ಶನಿವಾರ ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿ 20 ಜನರಲ್ಲಿ ಕೋವಿಡ್‌ ಪತ್ತೆ, ಒಬ್ಬ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 14:46 IST
Last Updated 11 ಜುಲೈ 2020, 14:46 IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶನಿವಾರ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಸೇರಿದಂತೆ 20 ಜನರಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಅವರಿಗೂ ಕೋವಿಡ್‌ ತಗುಲಿರುವ ಶಂಕೆ ವ್ಯಕ್ತವಾಗಿದೆ. ಅಧಿಕೃತ ವರದಿಯ ಬಳಿಕವಷ್ಟೇ ಆ ಬಗ್ಗೆ ಖಚಿತಪಡಿಸಲು ಸಾಧ್ಯ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

ಚಿಕ್ಕನರಸಿಂಹಯ್ಯ ಅವರು ಸದ್ಯ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಅಧ್ಯಕ್ಷರಿಗೆ ಕೋವಿಡ್‌ ಸೋಂಕು ತಗುಲಿದೆ ಎಂಬ ಸುದ್ದಿ ಶನಿವಾರ ಎಲ್ಲೆಡೆ ಹರಡುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ, ಅಧಿಕಾರಿ ವರ್ಗದವರು ಭಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ಶನಿವಾರ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಇಬ್ಬರು ಪೊಲೀಸ್‌ ಕಾನ್‌ಸ್ಟೆಬಲ್‌ಗಳು ಸೇರಿದಂತೆ ಒಂಬತ್ತು ಜನರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಗೌರಿಬಿದನೂರು ತಾಲ್ಲೂಕಿನ 6, ಬಾಗೇಪಲ್ಲಿಯ 5 ಜನರಲ್ಲಿ ಕೋವಿಡ್‌ ಇರುವುದು ದೃಢಪಟ್ಟಿದೆ.

ಈ ಪೈಕಿ ಬಾಗೇಪಲ್ಲಿ ತಾಲ್ಲೂಕಿನ 46 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಶನಿವಾರದ ಹೊತ್ತಿಗೆ ಸೋಂಕಿತರ ಸಂಖ್ಯೆ 371ಕ್ಕೆ ಏರಿಕೆಯಾಗಿದೆ.

ಈವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 97, ಬಾಗೇಪಲ್ಲಿ 63, ಚಿಂತಾಮಣಿ 51, ಗೌರಿಬಿದನೂರು 136, ಶಿಡ್ಲಘಟ್ಟ 22 ಮತ್ತು ಗುಡಿಬಂಡೆ ತಾಲ್ಲೂಕಿನಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ತಗುಲಿದೆ.

ಸೋಂಕಿತರ ಪೈಕಿ ಈವರೆಗೆ 13 ಜನರು ಮೃತಪಟ್ಟಿದ್ದಾರೆ. ಚಿಕಿತ್ಸೆಯಿಂದ 223 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಕೋವಿಡ್‌ ವಾರ್ಡ್‌ನಲ್ಲಿ 134 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.