ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರು ಆ.5ರ ಬೆಳಿಗ್ಗೆ 6ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಒಂದು ವೇಳೆ ಮುಷ್ಕರ ನಡೆದರೂ ಜಿಲ್ಲೆಯಲ್ಲಿ ಸಾರಿಗೆ ಸೇವೆಯಲ್ಲಿ ವ್ಯತ್ಯಯ ಆಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದರು.
ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ನಿಗಮದ ಕಚೇರಿಯಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ ಎಂದರು.
ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರು ನಿಗಮಗಳ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಆ.4ರಂದು ಬೆಂಗಳೂರಿನಲ್ಲಿ ಮಾತುಕತೆ ನಡೆಸಲಿದೆ. ಮಾತುಕತೆ ಯಶಸ್ವಿಯಾಗಿ ಮುಷ್ಕರವನ್ನು ಸಂಘಟನೆಗಳು ಕೈ ಬಿಟ್ಟರೆ ನಿಗಮಗಳ ಸಾರಿಗೆ ವ್ಯವಸ್ಥೆಯು ಯಥಾ ಸ್ಥಿತಿಯಲ್ಲಿ ಮುಂದುವರೆಯಲಿದೆ. ಇಲ್ಲವಾದಲ್ಲಿ ಸಾರಿಗೆ ನಿಗಮಗಳ ಬಸ್‌ಗಳ ಸಂಚಾರ ಸ್ಥಗಿತಗೊಳ್ಳಲಿದೆ ಎಂದರು.
ಆದ್ದರಿಂದ ಸಾರ್ವಜನಿಕ ಸಾರಿಗೆಯಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಪರ್ಯಾಯವಾಗಿ ಸಾರಿಗೆ ವ್ಯವಸ್ಥೆಯನ್ನು ಜಿಲ್ಲೆಯಲ್ಲಿ ಒದಗಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯಲ್ಲಿ ನೋಂದಾಯಿಸಲಾಗಿರುವ ಮಜಲು ವಾಹನಗಳು, ಒಪ್ಪಂದದ ವಾಹನಗಳು, ಖಾಸಗಿ ಸೇವಾ ವಾಹನಗಳು ಮತ್ತು ಶಾಲಾ ವಾಹನಗಳು ಸೇರಿದಂತೆ ಒಟ್ಟು 1059 ವಾಹನಗಳನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.
ಈ ವಾಹನಗಳು ನಿಗಮದ ಬಸ್ ನಿಲ್ದಾಣಗಳಿಂದಲೇ ಕಾರ್ಯಾಚರಣೆ ಮಾಡಲು ಸೂಕ್ತ ವ್ಯವಸ್ಥೆ ಮಾಡಲಾಗುತ್ತದೆ. ಒಪ್ಪಂದದ ವಾಹನಗಳನ್ನು ಬೆಂಗಳೂರು, ಕೋಲಾರ, ಚಿಂತಾಮಣಿ, ಬಾಗೇಪಲ್ಲಿ ಮತ್ತು ಗೌರಿಬಿದನೂರು ನಗರಗಳಿಗೆ ಕಾರ್ಯಚರಣೆ ಮಾಡಲು ಕ್ರಮವಹಿಸಲಾಗುವುದು. ಮ್ಯಾಕ್ಸಿಕ್ಯಾಬ್ ಮತ್ತು ಆಟೊಗಳು ಜಿಲ್ಲೆಯ ಗ್ರಾಮಗಳಿಂದ ಕಾರ್ಯಾಚರಣೆ ನಡೆಸಲಿವೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ 581 ಖಾಸಗಿ ಶಾಲಾ ಬಸ್‌ಗಳನ್ನು ಸಹ ಪ್ರಯಾಣಿಕರ ಅನುಕೂಲಕ್ಕೆ ಬಳಸಿಕೊಳ್ಳಲಾಗುವುದು. ಆಟೊಗಳು ಸ್ಥಳೀಯ ಗ್ರಾಮಗಳಿಂದ ಕಾರ್ಯಾಚರಣೆ ನಡೆಸಲಿವೆ. ಈ ಎಲ್ಲ ಖಾಸಗಿ ವಾಹನಗಳಲ್ಲಿ ಕೆಎಸ್‌ಆರ್‌ಟಿಸಿ ವಾಹನಗಳ ದರಗಳನ್ನೇ ಪಾವತಿಸಿ ಪ್ರಯಾಣಿಕರು ಪ್ರಯಾಣ ಮಾಡಬಹುದು. ಜಿಲ್ಲೆಯಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಮಾತನಾಡಿ, ಜಿಲ್ಲೆಯಲ್ಲಿ ಸಾರಿಗೆ ನೌಕರರ ಮುಷ್ಕರ ನಡೆದರೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೆಎಸ್ಆರ್‌ಟಿಸಿ ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಬಸವರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಚಾರಿ, ಚಿಂತಾಮಣಿಯ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ. ಬೈರಾರೆಡ್ಡಿ ವಿವಿಧ ಇಲಾಖೆಯ ಅಧಿಕಾರಿಗಳು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.