ADVERTISEMENT

‘ಎಲ್ಲರಿಗೂ ಕಾನೂನು ಸೌಲಭ್ಯ ಸಿಗಲಿ’

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2020, 6:35 IST
Last Updated 12 ನವೆಂಬರ್ 2020, 6:35 IST
ಶಿಡ್ಲಘಟ್ಟದ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ಮಾತನಾಡಿದರು
ಶಿಡ್ಲಘಟ್ಟದ ನ್ಯಾಯಾಲಯ ಸಂಕೀರ್ಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ಮಾತನಾಡಿದರು   

ಶಿಡ್ಲಘಟ್ಟ: ‘ಹಣದ ಕೊರತೆಯಿಂದ ಜನಸಾಮಾನ್ಯರು ಕಾನೂನು ಸೌಲಭ್ಯದಿಂದ ವಂಚಿತರಾಗಬಾರದು. ಅನಕ್ಷರಸ್ಥ ಹಾಗೂ ಬಡ ವರ್ಗದವರಿಗೆ ಉಚಿತ ಕಾನೂನು ಸೇವೆ ಸಿಗಬೇಕು ಎನ್ನುವ ಉದ್ದೇಶದಿಂದ ಉಚಿತ ಕಾನೂನು ಸೇವಾ ಕಾಯ್ದೆಯನ್ನು ಜಾರಿಗೆ ತರಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಡಿ.ಆರ್. ಮಂಜುನಾಥ್ ತಿಳಿಸಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ತಾಲ್ಲೂಕು ಆಡಳಿತದಿಂದ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಸೋಮವಾರ ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ನಾಗರಿಕರಿಗೆ ಕಾನೂನು, ಮೂಲಸೌಲಭ್ಯದ ಬಗ್ಗೆ ಅರಿವು ಮೂಡಿಸುವಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸಬೇಕು. ಇಂದಿನ ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಬಹಳ ಮುಂದುವರಿದಿದ್ದು, ಕಾನೂನಿನ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ADVERTISEMENT

ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ವಿ. ಚಂದ್ರಶೇಖರಗೌಡ ಮಾತನಾಡಿ, ಯಾರೊಬ್ಬರೂ ಕಾನೂನಿನ ಮೂಲಕ ಪರಿಹಾರ ಪಡೆದುಕೊಳ್ಳುವಲ್ಲಿ ವಂಚಿತರಾಗಬಾರದು. ಈ ಆಶಯದಡಿ ಜಾರಿಗೆ ತಂದಿರುವ ಕಾಯ್ದೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂಜುಕುಮಾರ್ ಎ. ಪಚ್ಚಾಪುರೆ, ಸಿವಿಲ್ ನ್ಯಾಯಾಧೀಶರಾದ ಡಿ. ರೋಹಿಣಿ, ಮಹಿಳಾ ಸಾಂತ್ವನ ಕೇಂದ್ರದ ಅಧ್ಯಕ್ಷೆ ವಿಜಯಾ ವೆಂಕಟರಾಮ್, ವಕೀಲರ ಸಂಘದ ಕಾರ್ಯದರ್ಶಿ ಎಂ.ಬಿ. ಲೋಕೇಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.