ADVERTISEMENT

ಫಲಾನುಭವಿಗಳಿಗೆ ಸಲವತ್ತು ತಲುಪಿಸಿ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಜುಲೈ 2020, 17:11 IST
Last Updated 6 ಜುಲೈ 2020, 17:11 IST
ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿದರು.
ಸಭೆಯಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಅಧಿಕಾರಿಗಳು ಬಡವರ ಪರವಾಗಿ ಕೆಲಸ ಮಾಡಬೇಕಾದರೆ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಬದ್ಧತೆ ತೋರಬೇಕು’ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಮಿಕ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಕೋವಿಡ್-19 ತುರ್ತು ಸಂದರ್ಭದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು. ಸಾರ್ವಜನಿಕರು ಕೊರೊನಾ ಜೊತೆಗೆ ಬದುಕುವುದನ್ನು ಕಲಿಯಬೇಕು. ಲಾಕ್‌ಡೌನ್‌ ಕಾರಣಕ್ಕೆ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಘೋಷಿಸಿರುವ ಪರಿಹಾರ ಧನ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು’ ಎಂದು ತಿಳಿಸಿದರು.

ADVERTISEMENT

‘ಕ್ಷೌರಿಕರು, ಅಗಸರು ಹಾಗೂ ಕಾರ್ಮಿಕರಿಗೆ ರಾಜ್ಯ ಸರ್ಕಾರ ಘೋಷಿಸಿರುವ ಪರಿಹಾರಧನವನ್ನು ಮುಂದಿನ ದಿನಗಳಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ’ ಎಂದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಜಿಲ್ಲೆಯಲ್ಲಿ ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರಿದ 2,077 ಕ್ಷೌರಿಕರು, 2,602 ಅಗಸರು ಇದ್ದಾರೆ. ಈ ಪೈಕಿ ಈಗಾಗಲೇ ಪರಿಹಾರ ಧನಕ್ಕಾಗಿ 4,679 ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ’ ಎಂದು ಹೇಳಿದರು.

‘ಈಗಾಗಲೇ 661 ಕ್ಷೌರಿಕರು ಮತ್ತು 694 ಅಗಸರ ಅರ್ಜಿಗಳನ್ನು ಪುರಸ್ಕರಿಸಲಾಗಿದೆ. ಉಳಿದ ಅರ್ಜಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದ್ದು, ಎರಡು ದಿನಗಳ ಒಳಗೆ ಪೂರ್ಣಗೊಳ್ಳುತ್ತದೆ. ಪರಿಹಾರ ಧನ ವಿತರಣೆಯಲ್ಲಿ ವಿಳಂಬ ಮಾಡುವುದಿಲ್ಲ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ. ಬಿ ಚಿಕ್ಕನರಸಿಂಹಯ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಕಾರ್ಮಿಕ ಅಧಿಕಾರಿ ವರಲಕ್ಷ್ಮೀ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.