ADVERTISEMENT

ಯುವ ಜನತೆ ಸಮಾಜಕ್ಕೆ ಮಾದರಿಯಾಗಲಿ: ಬಿ.ಎನ್.ಬಚ್ಚೇಗೌಡ

‘ಸೇವಾ ದಿವಸ್’ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಆಯೋಜನೆ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2019, 10:57 IST
Last Updated 17 ಸೆಪ್ಟೆಂಬರ್ 2019, 10:57 IST
ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಸಂಸದ ಬಿ.ಎನ್.ಬಚ್ಚೇಗೌಡ ಅವರು ಪ್ರಮಾಣಪತ್ರ ವಿತರಿಸಿದರು.
ಶಿಬಿರದಲ್ಲಿ ರಕ್ತದಾನ ಮಾಡಿದವರಿಗೆ ಸಂಸದ ಬಿ.ಎನ್.ಬಚ್ಚೇಗೌಡ ಅವರು ಪ್ರಮಾಣಪತ್ರ ವಿತರಿಸಿದರು.   

ಚಿಕ್ಕಬಳ್ಳಾಪುರ: ‘ಪ್ರತಿಯೊಬ್ಬರೂ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹನೀಯರನ್ನು ನೆನಪಿಸಿಕೊಳ್ಳಬೇಕು ಹಾಗೂ ಯುವಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ರೋಗಿಯ ಜೀವವನ್ನು ಉಳಿಸಿ ಸಮಾಜಕ್ಕೆ ಮಾದರಿಯಾಗಬೇಕು’ ಎಂದು ಸಂಸದ ಬಿ.ಎನ್.ಬಚ್ಚೇಗೌಡ ಹೇಳಿದರು.

ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಮಂಗಳವಾರ ಚಂದ್ರಶೇಖರ್‌ ಆಜಾದ್‌, ಭಗತ್ ಸಿಂಗ್ ಹಾಗೂ ಪ್ರಧಾನಿ ನರೆಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ‘ಸೇವಾ ದಿವಸ್’ ಪ್ರಯುಕ್ತ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ಸೇವೆಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡು ದೇಶ ಸೇವೆ ಮಾಡುತ್ತಿದ್ದಾರೆ. ದೇಶದ ಏಳಿಗೆಗಾಗಿ ಶ್ರಮಿಸುತ್ತಿರುವ ಮೋದಿ ಅವರು ಬಡವರು, ರೈತರ ಪರವಾಗಿ ಅನೇಕ ಜನಪರ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮುಂಬರುವ ದಿನಗಳಲ್ಲಿ ಇನ್ನು ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಲು ಉದ್ದೇಶಿಸಿದ್ದಾರೆ’ ಎಂದು ತಿಳಿಸಿದರು.

ADVERTISEMENT

‘ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ. ಅಂತಹ ಮಹನೀಯರ ಜನ್ಮದಿನದಂದು ಯುವ ಸಮುದಾಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರ ಸೇವೆ ಹಾಗೂ ಜನ ಸೇವೆಯಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದರ ಬಗ್ಗೆ ನಮಗೆ ದೆಹಲಿಯಲ್ಲಿ ಚೆನ್ನಾಗಿ ಅನುಭವಕ್ಕೆ ಬಂತು’ ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ್‌ ತಾಲ್ಲೂಕು ಘಟಕದ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್‌, ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತಪ್ಪ, ನಗರ ಘಟಕದ ಅಧ್ಯಕ್ಷ ಮಂಜುನಾಥ್, ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಕಿರಣ್, ಜಿಲ್ಲಾ ವಕ್ತಾರ ಲಕ್ಷ್ಮಿಪತಿ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ನಗರ ಘಟಕದ ಅಧ್ಯಕ್ಷ ಮಧುಚಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.