ADVERTISEMENT

ಡಿ.20ಕ್ಕೆ ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ನ್ಯಾ ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಟಾನಕ್ಕೆ ಮಾದಿಗ ದಂಡೋರ ಹೋರಾಟ ಸಮಿತಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 11:21 IST
Last Updated 16 ಡಿಸೆಂಬರ್ 2019, 11:21 IST

ಚಿಕ್ಕಬಳ್ಳಾಪುರ: ‘ರಾಜ್ಯ ಸರ್ಕಾರ ನ್ಯಾ ಎ.ಜೆ.ಸದಾಶಿವ ಆಯೋಗ ವರದಿ ಅನುಷ್ಟಾನಕ್ಕೆ ತೋರುತ್ತಿರುವ ವಿಳಂಬ ಧೋರಣೆ ಖಂಡಿಸಿ ಮಾದಿಗ ದಂಡೋರ ಹೋರಾಟ ಸಮಿತಿ ವತಿಯಿಂದ ಡಿ.20 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಾದಿಗ ದಂಡೋರ ಹೋರಾಟ ಸಮಿತಿಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಳೆದ 25 ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ನಿರಂತರ ಹೋರಾಟಗಳು ನಡೆಯುತ್ತಿದ್ದರೂ ರಾಜ್ಯ ಸರ್ಕಾರ ಸದಾಶಿವ ಆಯೋಗ ವರದಿ ಜಾರಿಗೊಳಿಸಲು ಮಿನಮೇಷ ಎಣಿಸುತ್ತ ಬಂದಿದೆ. ಹೀಗಾಗಿ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲಾಗುತ್ತಿದೆ’ ಎಂದು ಹೇಳಿದರು.

‘ನ್ಯಾ.ಸದಾಶಿವ ಆಯೋಗ ಸತತ 7 ವರ್ಷಗಳ ಕಾಲ ರಾಜ್ಯದಲ್ಲಿ ಅಧ್ಯಯನ ನಡೆಸಿ, ವೈಜ್ಞಾನಿಕ ಆಧಾರಗಳ ಮೇಲೆ ಸಮಗ್ರ ವರದಿ ತಯಾರಿಸಿ 2012ರಲ್ಲಿಯೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಅದರ ಅನುಷ್ಠಾನದ ಬಗ್ಗೆ ಈವರೆಗೆ ಆಡಳಿತ ನಡೆಸಿದ ಒಬ್ಬರೂ ಕಾಳಜಿ ತೋರಲಿಲ್ಲ. ವರದಿ ಜಾರಿಗೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಿ ಪಡಿಸುತ್ತಿವೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ವರದಿ ಜಾರಿಗೆ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ರಾಜ್ಯ ಸರ್ಕಾರ ಕೂಡಲೇ ವರದಿ ಜಾರಿ ಮಾಡಿ ಶೈಕ್ಷಣಿಕ, ಉದ್ಯೋಗ, ರಾಜಕೀಯ ಕ್ಷೇತ್ರಗಳಲ್ಲಿ ಅಂತ್ಯಂತ ಹಿಂದುಳಿದ ಮಾದಿಗ ಸಮುದಾಯದವರಿಗೆ ಪರಿಶಿಷ್ಟ ಜಾತಿಗಳ ಸೌಲಭ್ಯಗಳನ್ನು ಜನಸಂಖ್ಯೆಗೆ ಅನುಗುಣವಾಗಿ ನೀಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಆಡಳಿತ ಇರುವುದರಿಂದ ರಾಜ್ಯ ಸರ್ಕಾರ ಕೂಡಲೇ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಸಮಿತಿ ವತಿಯಿಂದ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ಹೇಳಿದರು.

ಮಾದಿಗ ದಂಡೋರ ಹೋರಾಟ ಸಮಿತಿಯ ಯುವ ಘಟಕದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಅಂಜಿ, ವಿದ್ಯಾರ್ಥಿ ಘಟಕದ ಅಧ್ಯಕ್ಷ ನರಸಿಂಹಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಎಂ.ವಿ.ಧನಲಕ್ಷ್ಮೀ, ಜಿಲ್ಲಾ ಮುಖಂಡರಾದ ಕೃಷ್ಣಪ್ಪ, ನರಸಿಂಹಪ್ಪ, ಎಂ.ಎಂ.ಮಂಜುನಾಥ್, ನಲ್ಲಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.