ADVERTISEMENT

ಮಹಿಳೆಯರಿಗೆ ಸವಲತ್ತುಗಳ ಬಗ್ಗೆ ಅರಿವು ಮೂಡಿಸಿ

ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2019, 13:41 IST
Last Updated 3 ಅಕ್ಟೋಬರ್ 2019, 13:41 IST
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಮಹಿಳೆಯರು ಮತ್ತು ಮಕ್ಕಳ ಸಾಗಣೆ ಹಾಗೂ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುವ ಪದ್ಧತಿಯನ್ನು ತಡೆಗಟ್ಟುವ ಬಗ್ಗೆ ಅಧಿಕಾರಿಗಳು ಪೋಷಕರಲ್ಲಿ ಅರಿವು ಮೂಡಿಸಬೇಕು. ಮಹಿಳೆಯರಿಗೆ ರಕ್ಷಣೆ ಒದಗಿಸುವ ಸಲುವಾಗಿ ವಿಶೇಷ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾ ಕಾನೂನು ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಆಯೋಜಿಸಿದ್ದ ಸ್ತ್ರೀಶಕ್ತಿ ಯೋಜನೆ, ವರದಕ್ಷಿಣೆ ನಿಷೇಧ ಕಾಯ್ದೆ, ಮಹಿಳೆಯರು ಮತ್ತು ಮಕ್ಕಳ ಸಾಗಣೆ ಹಾಗೂ ಬಾಲ್ಯ ವಿವಾಹ ಪದ್ಧತಿ ತಡೆಗಟ್ಟುವ ಜಿಲ್ಲಾಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಅಕ್ರಮವಾಗಿ ಮಹಿಳೆಯರು ಹಾಗೂ ಮಕ್ಕಳ ಸಾಗಾಣಿಕೆ ಮಾಡುವ ಜಾಲಗಳನ್ನು ಪ್ರತಿ ತಾಲ್ಲೂಕು ಮಟ್ಟದಲ್ಲಿರುವ ಸಾಂತ್ವಾನ ಕೇಂದ್ರಗಳು, ಸ್ತ್ರೀಶಕ್ತಿ ಸಂಘಗಳ ನೆರವಿನಿಂದ ಪತ್ತೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನೊಂದವರಿಗೆ ಸಾಂತ್ವಾನ ಹೇಳುವ ಕೆಲಸ ಮಾಡಬೇಕು’ ಹೇಳಿದರು.

ADVERTISEMENT

‘ಗ್ರಾಮೀಣ ಮಟ್ಟದಲ್ಲಿ ಮಹಿಳೆಯರಿಗೆ ವಿವಿಧ ಕರಕುಶಲ ಕಸುಬುಗಳನ್ನು ಮಾಡಲು ಸರ್ಕಾರ ಸಾಲ ಸೌಲಭ್ಯ ನೀಡುತ್ತಿದೆ. ಹೂ, ಹಣ್ಣು, ತರಕಾರಿ, ಮಸಾಲೆ, ಹಪ್ಪಳ ವ್ಯಾಪಾರದ ಮೂಲಕ ಮಹಿಳೆಯರು ಬದುಕು ಕಟ್ಟಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಆದ್ದರಿಂದ ಅಧಿಕಾರಿಗಳು ಮಹಿಳೆಯರಿಗೆ ಸಾಲದ ಹಣವನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕಿ ಜೆ.ಕೆ.ಲಕ್ಷ್ಮೀದೇವಮ್ಮ ಮಾತನಾಡಿ, ‘ಜಿಲ್ಲೆಯಲ್ಲಿ 1,225 ಪರಿಶಿಷ್ಟ ಜಾತಿ, 580 ಪರಿಶಿಷ್ಟ ಪಂಗಡ, 93 ಅಲ್ಪಸಂಖ್ಯಾತರು, 3,861 ಇತರೆ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 5,759 ಸ್ತ್ರೀಶಕ್ತಿ ಸಂಘಗಳಿವೆ. ಇವುಗಳಲ್ಲಿ 91,929 ಸದಸ್ಯೆಯರಿದ್ದಾರೆ. ಈ ಪೈಕಿ 4,045 ಸಂಘಗಳಿಗೆ ₹62.85 ಕೋಟಿ ಸಾಲ ವಿತರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ದೇವರಾಜು ಮಾತನಾಡಿ, ‘ವರದಕ್ಷಿಣೆ ನಿಷೇಧ ಕಾಯ್ದೆಯು ಪರಿಣಾಮಕಾರಿಯಾಗಿ ಜಾರಿಯಾಗಿರುವ ಕಾರಣ ವರದಕ್ಷಿಣೆ ಪ್ರಕರಣಗಳು ಹೆಚ್ಚಿನ ಮಟ್ಟದಲ್ಲಿ ಬೆಳಕಿಗೆ ಬರುತ್ತಿಲ್ಲ. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಕಡ್ಡಾಯವಾಗಿ ಜಾಮೀನು ರಹಿತ ಜೈಲು ಶಿಕ್ಷೆ ಹಾಗೂ ದಂಡ ವಿಧಿಸುತ್ತಿರುವುದರಿಂದ ಮಹಿಳೆಯರು ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಅರಿವು ಮೂಡಿಸಬೇಕಾದ ಅಗತ್ಯವಿದೆ’ ಎಂದು ಹೇಳಿದರು. ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.