ADVERTISEMENT

ಮಾ.27ಕ್ಕೆ ಮೆಗಾ ಲೋಕ್‌ ಅದಾಲತ್‌

ಕಳೆದ ಬಾರಿ 3,894 ಪ್ರಕರಣ ಇತ್ಯರ್ಥ: ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 7:25 IST
Last Updated 18 ಫೆಬ್ರುವರಿ 2021, 7:25 IST
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಮಾತನಾಡಿದರು
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ಮಾತನಾಡಿದರು   

ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಮಾರ್ಚ್ 27 ರಂದು ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಭೈರಪ್ಪ ಶಿವಲಿಂಗ ನಾಯಿಕ ತಿಳಿಸಿದರು.

ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಮಾರ್ಚ್ 27ರಂದು ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದರು.

ಈ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಛಿಸಿದ್ದಲ್ಲಿ ಸಾರ್ವಜನಿಕರು ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಾಹಿತಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಒಟ್ಟು 21,091 ಸಿವಿಲ್ ಪ್ರಕರಣಗಳು, 15,528 ಕ್ರಿಮಿನಲ್ ಪ್ರಕರಣಗಳು ಸೇರಿ ಒಟ್ಟಾರೆ 36,619 ಪ್ರಕರಣಗಳು ವರದಿಯಾಗಿದೆ. ಇದರಲ್ಲಿ ರಾಜಿಯಾಗಬಲ್ಲಂತಹ 11,615 ಸಿವಿಲ್ ಪ್ರಕರಣಗಳು, 5,494 ಕ್ರಿಮಿನಲ್ ಪ್ರಕರಣಗಳು ಸೇರಿ ಒಟ್ಟು 17,109 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದರು.

ಮಾರ್ಚ್ 27ರಂದು ಸುಮಾರು 6,000 ಪ್ರಕರಣಗಳನ್ನು ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ. ಕಳೆದ ಬಾರಿ ನಡೆದ ಲೋಕ್ ಅದಾಲತ್‌ನಲ್ಲಿ 3,894 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಅನೇಕ ಕಡೆ ವಿದ್ಯಾರ್ಥಿಗಳ ಜನ್ಮ ಪ್ರಮಾಣ ಪತ್ರಗಳ ಗೊಂದಲಗಳು ಹೆಚ್ಚಾಗಿರುವುದು ಕಂಡು ಬಂದಿರುತ್ತದೆ. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಇಲಾಖೆ ಹಾಗೂ ತಹಸೀಲ್ದಾರ್ ಅಧಿಕಾರಿಗಳೊಂದಿಗೆ ಚರ್ಚಿಸಿ ಜನ್ಮ ಪ್ರಮಾಣ ಪತ್ರ ನೀಡಲು ಸೂಚನೆ ನೀಡಲಾಗಿದೆ. ಈಗಾಗಲೇ ಈ ಸಂಬಂಧ 100 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಅಥವಾ ಸಹಾಯವಾಣಿ ಸಂಖ್ಯೆ 1800-425-90900 ಅನ್ನು ಸಂಪರ್ಕಿಸಬಹುದು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಎಚ್‌.ದೇವರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.