ADVERTISEMENT

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಬಿ.ಸಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 3:11 IST
Last Updated 19 ಸೆಪ್ಟೆಂಬರ್ 2020, 3:11 IST
ಚಿಂತಾಮಣಿ ತಾಲ್ಲೂಕಿನ ಕುರುಬೂರಿನ ರೇಷ್ಮೆ ಕೃಷಿ ಮಹಾವಿದ್ಯಾಪಯದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಚಿಂತಾಮಣಿ ತಾಲ್ಲೂಕಿನ ಕುರುಬೂರಿನ ರೇಷ್ಮೆ ಕೃಷಿ ಮಹಾವಿದ್ಯಾಪಯದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು   

ಚಿಂತಾಮಣಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ 3 ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ತಾಲ್ಲೂಕಿನ ಕುಬೂರಿನಲ್ಲಿರುವ ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ ಚಂದ್ರಕಳಸ ಸಭಾಂಗಣ ಮತ್ತು ಕ್ರೀಡಾಂಗಣವನ್ನು ಶುಕ್ರವಾರ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹೈಕಮಾಂಡ್ ಮಟ್ಟದಲ್ಲೂ ಮುಖ್ಯಮಂತ್ರಿ ಬದಲಾವಣೆಯ ವಿಷಯವಿಲ್ಲ. ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಡುತ್ತಿವೆ. ಆದರೆ ಅದರಲ್ಲಿ ಯಾವುದೇ ಹುರುಳಿಲ್ಲ. ಕೊರೊನಾ ಸೋಂಕಿನಿಂದಾಗಿ 6 ತಿಂಗಳಿನಿಂದ ಮುಖ್ಯಮಂತ್ರಿ ದೆಹಲಿಗೆ ಭೇಟಿ ನೀಡಿರಲಿಲ್ಲ. ನೆರೆ ಪರಿಹಾರ, ಜಿಎಸ್‌ಟಿ ಬಗ್ಗೆ ಬೇಡಿಕೆ ಮತ್ತಿತರ ಹಣಕಾಸಿನ ವಿಷಯಗಳ ಚರ್ಚೆಗಾಗಿ ಮುಖ್ಯಮಂತ್ರಿ ದೆಹಲಿಗೆ ತೆರಳಿದ್ದಾರೆ ಎಂದರು.

ADVERTISEMENT

ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಲು ಆಯಾ ಇಲಾಖೆಯ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತಾರೆ. ಹಣಕಾಸು ಮತ್ತು ಆಡಳಿತಾತ್ಮಕ ವಿಷಯಗಳನ್ನು ಹೊರತುಪಡಿಸಿ ಬೇರೆ ವಿಷಯಗಳಿಲ್ಲ. ದೆಹಲಿ ಭೇಟಿ ಕುರಿತು ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದರು.

ಮುಖ್ಯಮಂತ್ರಿ ಕೇವಲ ಶಿವಮೊಗ್ಗಕ್ಕೆ ಮಾತ್ರ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಬಿಜೆಪಿ ಹಿರಿಯ ನಾಯಕ ಉಮೇಶಕತ್ತಿ ಹೇಳಿಕೆ ಒಪ್ಪುವಂತಹುದಲ್ಲ. ಅದು ಅವರ ವೈಯುಕ್ತಿಕ ಹೇಳಿಕೆ. ರಾಜ್ಯಲ್ಲಿ ಅಂತಹ ಪರಿಸ್ಥಿತಿ ಇಲ್ಲ. ಮುಖ್ಯಮಂತ್ರಿ ಗುರುವಾರವೂ ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಿ ₹1,300 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ಶಾಸಕ ಎಂ.ಕೃಷ್ಣಾರೆಡ್ಡಿ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.