ADVERTISEMENT

ಸಚಿವ ಸೋಮಣ್ಣ ಕ್ಷಮೆಯಾಚನೆಗೆ ಒತ್ತಾಯ

ರಾಜ್ಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕವು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2020, 12:04 IST
Last Updated 13 ಸೆಪ್ಟೆಂಬರ್ 2020, 12:04 IST
ವಿ.ಸೋಮಣ್ಣ
ವಿ.ಸೋಮಣ್ಣ   

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ರಾಕ್ಷಸರು ಎಂಬ ಹೇಳಿಕೆ ನೀಡಿರುವ ವಸತಿ ಸಚಿವ ವಿ.ಸೋಮಣ್ಣ ಅವರು ತಮ್ಮ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ರಾಜ್ಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕವು ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಜಿಲ್ಲಾ ಘಟಕದ ಅಧ್ಯಕ್ಷ ಎಸ್‌.ಮೋಹನ್‌ ಕುಮಾರ್, ‘ಸೆಪ್ಟೆಂಬರ್ 11 ರಂದು ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಿಡಿಒಗಳನ್ನು ರಾಕ್ಷಸರಿಗೆ ಹೋಲಿಸಿ ಮಾತನಾಡಿದ್ದಾರೆ. ಇದನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ರಾಜ್ಯದಲ್ಲಿರುವ 1.80 ಲಕ್ಷ ಪಿಡಿಒಗಳು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಅಡಿ ಬರುವ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದ ಹೊಣೆ ಹೊರುವ ಜತೆಗೆ ಕೋವಿಡ್‌ 19 ನಿಯಂತ್ರಿಸುವಲ್ಲಿ ಶ್ರಮಿಸುತ್ತಿದ್ದಾರೆ. ಸಿಬ್ಬಂದಿ ಕೊರತೆಯ ನಡುವೆಯೂ ಹತ್ತು ಹಲವು ಕೆಲಸಗಳನ್ನು ಮಾಡುತ್ತಿರುವವರನ್ನು ಸಚಿವರು ಪದೇ ಪದೇ ನಿಂದಿಸಿ ಹೇಳಿಕೆ ನೀಡುವುದು ಬಿಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

‘ಸಚಿವರ ಹೇಳಿಕೆಗಳಿಂದ ಪಿಡಿಒಗಳು ಮಾನಸಿಕವಾಗಿ ನೊಂದಿದ್ದು, ಇನ್ನೊಂದೆಡೆ ಪಿಡಿಒಗಳನ್ನು ಸಾರ್ವಜನಿಕರು ಸಂಶಯದಿಂದ ನೋಡುವ ಸ್ಥಿತಿ ನಿರ್ಮಾಣವಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಪಿಡಿಒಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕೆ ವಿನಾ ಆತ್ಮಸ್ಥೈರ್ಯ ಕುಂದಿಸುವ ರೀತಿ ವರ್ತಿಸಬಾರದು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.