ADVERTISEMENT

ಭಿನ್ನಾಭಿಪ್ರಾಯ ಬೇಡ: ಶಾಸಕ ಎಂ. ಕೃಷ್ಣಾರೆಡ್ಡಿ ಸಲಹೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 8:31 IST
Last Updated 6 ಡಿಸೆಂಬರ್ 2020, 8:31 IST

ಚಿಂತಾಮಣಿ: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸಬೇಕು. ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಿನಿಂದ ಶ್ರಮಿಸಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ. ಕೃಷ್ಣಾರೆಡ್ಡಿ ಮನವಿ ಮಾಡಿದರು.

ನಗರ ಹೊರವಲಯದ ಆಲಂಬಗಿರಿ ರಸ್ತೆಯಲ್ಲಿರುವ ತಮ್ಮ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಅಂಗವಾಗಿ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಳೆದ ಬಾರಿ ಗ್ರಾಮ ಪಂಚಾಯಿತಿಗಳಲ್ಲಿ ಪರಾಜಯದ ಕಾರಣ ಜೆಡಿಎಸ್ ಕಾರ್ಯಕರ್ತರಿಗೆ ಆಗುತ್ತಿರುವ ಅನ್ಯಾಯಗಳನ್ನು ತಡೆಗಟ್ಟಬೇಕಾದರೆ ಡಿ. 22ರಂದು ನಡೆಯುವ ಚುನಾವಣೆಯಲ್ಲಿ ನಿಮ್ಮ ಶಕ್ತಿ ತೋರಿಸಬೇಕು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರವಿದೆ ಎಂಬುದನ್ನು ಮರೆಯಬಾರದು ಎಂದರು.

ADVERTISEMENT

ಶೌಚಾಲಯ, ಕುಡಿಯುವ ನೀರು, ಮನೆ, ನಿವೇಶನ, ಬೀದಿದೀಪ, ರಸ್ತೆ, ನರೇಗಾ ಹೀಗೆ ಎಲ್ಲ ಅಧಿಕಾರಗಳು ಗ್ರಾಮ ಪಂಚಾಯಿತಿಗೆ ಇದೆ. ಪ್ರತಿಯೊಂದಕ್ಕೂ ಗ್ರಾಮ ಪಂಚಾಯಿತಿಗಳಿಗೆ ಎಡತಾಕಬೇಕಾಗುತ್ತದೆ. ಈಗ ಮೈಮರೆತರೆ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹರಿಯಬಿಟ್ಟರೆ ಮುಂದಿನ 5 ವರ್ಷ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.‌

ಭಿನ್ನಾಭಿಪ್ರಾಯಗಳಿಂದ ನಗರಸಭೆಯಲ್ಲಿ ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂಬುದನ್ನು ಮರೆಯಬಾರದು. ಅಸಮಾಧಾನವನ್ನು ನನಗೆ ತಿಳಿಸಿದರೆ ಸರಿಪಡಿಸಲಾಗುವುದು. ಕಳೆದ 7 ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸರ್ಕಾರಿ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಲು ಶ್ರಮಿಸಿದ್ದೇನೆ. ಹೆಚ್ಚಿನ ಗ್ರಾಮ ಪಂಚಾಯಿತಿಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ಪಕ್ಷಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.