ಚಿಕ್ಕಬಳ್ಳಾಪುರ: ಕೆಲವು ಕಡೆಗಳಲ್ಲಿ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಟೆಂಡರ್ ಆಗಿ ಕಾರ್ಯಾದೇಶ ನೀಡಲಾಗಿತ್ತು. ಆದರೆ ರಾಜ್ಯ ಸರ್ಕಾರ ಈಗ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಆದೇಶಿಸಿದೆ. ಇದಕ್ಕೆ ಜಿಲ್ಲೆಯ ಉಸ್ತುವಾರಿ ಸಚಿವರು, ಕಾಂಗ್ರೆಸ್ ಶಾಸಕರು ಏನು ಉತ್ತರ ಹೇಳುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ನಗರದ ಸಂಸದರ ಕಚೇರಿಯಲ್ಲಿ ಸೋಮವಾರ ಸಾರ್ವಜನಿಕ ಭೇಟಿ ಕಾರ್ಯಕ್ರಮ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಎತ್ತಿನಹೊಳೆ ನೀರಾವರಿ ಯೋಜನೆ ಕಾಮಗಾರಿಯು ಮಂದಗತಿಯಲ್ಲಿ ನಡೆಯುತ್ತಿದೆ. ಜಿಲ್ಲೆಯ ಶಾಸಕರು ವಿಧಾನಸಭೆ ಅಧಿವೇಶನದಲ್ಲಿ ಧ್ವನಿ ಎತ್ತಬೇಕು. ವಿಶೇಷ ಆಸಕ್ತಿವಹಿಸಿ ಕಾಮಗಾರಿಗೆ ವೇಗ ಕೊಡಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.
ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಎತ್ತಿನಹೊಳೆ ಕಾಮಗಾರಿಗೆ ಕೋಟ್ಯಂತರ ಹಣ ನೀಡಿದರು. ಇದರಿಂದ ಕಾಮಗಾರಿ ವೇಗವಾಗಿ ನಡೆಯಿತು. ಆದರೆ ಈ ಸರ್ಕಾರಕ್ಕೆ ಕೊರಟಗೆರೆ ತಾಲ್ಲೂಕಿನಲ್ಲಿ ಬೈರಗೊಂಡ್ಲು ಬಪರ್ ಡ್ಯಾಂ ನಿರ್ಮಾಣಕ್ಕೆ ಭೂ ಸ್ವಾಧೀನ ಸಾಧ್ಯ ಆಗುತ್ತಿಲ್ಲ. ಅಂದಮೇಲೆ ಇವರು ಯಾವ ರೀತಿಯಲ್ಲಿ ಯೋಜನೆ ಬಗ್ಗೆ ಗಂಭೀರವಾಗಿದ್ದಾರೆ ಎನ್ನುವುದನ್ನು ಆಲೋಚಿಸಬೇಕು ಎಂದರು.
ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿಯ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಿಸುವ ಬಗ್ಗೆ ಅಧಿವೇಶನದಲ್ಲಿ ಶಾಸಕರು ಧ್ವನಿ ಎತ್ತಬೇಕು ಎಂದು ಹೇಳಿದರು.
ಉದ್ದಾರ ಮಾಡುತ್ತಾರೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜನರು ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡಿದರು. ಹೆಚ್ಚು ಶಾಸಕರನ್ನು ಗೆಲ್ಲಿಸಿದರು. ಎತ್ತಿನಹೊಳೆ ಕಾಮಗಾರಿ ಸ್ಥಗಿತಕ್ಕೆ ಆದೇಶಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಈ ಭಾಗದ ಜನರ ಬಗ್ಗೆ ಇರುವ ಕಾಳಜಿಯನ್ನು ತೋರುತ್ತಿದೆ ಎಂದು ವ್ಯಂಗ್ಯವಾಡಿದರು.
ಜಲ ಜೀವನ್ ಮಿಷನ್ ಕಾಮಗಾರಿಗಳು ಜಿಲ್ಲೆಯಲ್ಲಿ ಎಲ್ಲಿ ಯಾವ ರೀತಿ ನಡೆಯುತ್ತಿವೆ, ಗುಣಮಟ್ಟವೇನು ಎನ್ನುವ ಬಗ್ಗೆ ದಿಶಾ ಸಮಿತಿ ಸಭೆಯಲ್ಲಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಅಟಲ್ ಭೂ ಜಲ ಯೋಜನೆ ಇದೆ. ಈ ಯೋಜನೆಯ ಬಗ್ಗೆಯೂ ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಗುವುದು ಎಂದರು.
ಈ ಜಿಲ್ಲೆಗಳ ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು. ಯೋಜನೆಗಳಿಗೆ ಎಷ್ಟು ಹಣ ತರಬೇಕು ಎನ್ನುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಮತ್ತು ರೈತರ ಮುಖಂಡರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಹಣ ತರಲು ಪ್ರಯತ್ನಿಸುವೆ. ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಜೆಜೆಎಂ, ಅಟಲ್ ಭೂ ಜಲ ಯೋಜನೆ ಸೇರಿದಂತೆ ಪ್ರತಿ ಇಲಾಖೆಗೂ ಕೇಂದ್ರ ಸರ್ಕಾರ ಹಣ ನೀಡುತ್ತಿದೆ. ಈ ಬಾರಿಯೂ ಹೆಚ್ಚಿನ ಅನುದಾನ ತರಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.
ಅಡ್ಡಗಲ್ಲಿಗೆ ನೀರಿಲ್ಲ; ಬೋರ್‌ವೆಲ್‌ಗೆ ದುಡ್ಡಿಲ್ಲ
ಗ್ರಾಮ ಪಂಚಾಯಿತಿ ಕೇಂದ್ರ ಅಡ್ಡಗಲ್ಲಿನಲ್ಲಿ ನೀರಿಲ್ಲ ಎಂದು ಜನರು ಸಮಸ್ಯೆ ಹೇಳಿಕೊಳ್ಳುತ್ತಿದ್ದಾರೆ. ಇಲ್ಲಿ ಒಂದು ಕೊಳವೆ ಬಾವಿ ಹಾಕಿಸಲು ಸಹ ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ಕೇಳಿದರೆ ಹಣವಿಲ್ಲ ಎನ್ನುತ್ತಾರಂತೆ. ಈ ಬಗ್ಗೆ ಅಧಿಕಾರಿಗಳ ಜೊತೆ ಮಾತನಾಡುವೆ ಎಂದು ಡಾ.ಕೆ.ಸುಧಾಕರ್ ತಿಳಿಸಿದರು. ನಾನು ಶಾಸಕನಾಗಿದ್ದ ಅವಧಿಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಕೊಳವೆ ಬಾವಿ ಹಾಕಿಸಿದೆ. ನೀರಿನ ಸಮಸ್ಯೆ ಪರಿಹರಿಸಿದೆ. ಆದರೆ ಈಗ ಐದಾರು ಹಳ್ಳಿಗಳಲ್ಲಿ ನೀರಿಲ್ಲ. ಈ ಬಗ್ಗೆ ಮಾತನಾಡಿದರೆ ಸಚಿವರಿಗೆ ಕೋಪ ಬರುತ್ತದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.