ADVERTISEMENT

ಚಿಕ್ಕಬಳ್ಳಾಪುರ: ಕಾಯ್ದೆಗಳಿಗೆ ತಿದ್ದುಪಡಿ ಖಂಡಿಸಿ ರಾಷ್ಟ್ರವ್ಯಾಪಿ ಚಳವಳಿ

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಸಹಯೋಗದಲ್ಲಿ ದುಂಡುಮೇಜಿನ ಸಭೆ

​ಪ್ರಜಾವಾಣಿ ವಾರ್ತೆ
Published 26 ಜೂನ್ 2020, 13:28 IST
Last Updated 26 ಜೂನ್ 2020, 13:28 IST
ದುಂಡುಮೇಜಿನ ಸಭೆಯಲ್ಲಿ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಕೆ.ಪ್ರಕಾಶ್ ಮಾತನಾಡಿದರು.
ದುಂಡುಮೇಜಿನ ಸಭೆಯಲ್ಲಿ ಸಿಪಿಎಂ ರಾಜ್ಯ ಸಮಿತಿ ಸದಸ್ಯ ಕೆ.ಪ್ರಕಾಶ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ‘ಲಾಕ್‌ಡೌನ್‌ನಂತಹ ಸಂದರ್ಭದಲ್ಲಿ ಸರ್ವಾಧಿಕಾರಿ ಕ್ರಮದಿಂದ ಸುಗ್ರಿವಾಜ್ಞೆ ಮೂಲಕ ಹಲವು ಕಾಯ್ದೆಗಳಿಗೆ ತಿದ್ದುಪಡಿ ತರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ಮತ್ತು ಜನವಿರೋಧಿ ನೀತಿಗಳನ್ನು ಖಂಡಿಸಿ ರಾಷ್ಟ್ರವ್ಯಾಪಿ ಚಳವಳಿ ನಡೆಸುವ ಅಗತ್ಯವಿದೆ’ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯಕೆ.ಪ್ರಕಾಶ್ ಅಭಿಪ್ರಾಯಪಟ್ಟರು.

ನಗರದಲ್ಲಿ ಶುಕ್ರವಾರ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ದುಂಡುಮೇಜಿನ ಸಭೆಯಲ್ಲಿ ಅವರು ಮಾತನಾಡಿದರು.

‘ಭೂಸುಧಾರಣೆ, ಎಪಿಎಂಸಿ, ಅಗತ್ಯ ವಸ್ತುಗಳು, ವಿದ್ಯುತ್ ಹೀಗೆ ಹಲವು ಕಾಯ್ದೆಗಳಿಗೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿ, ಕೃಷಿ ಕ್ಷೇತ್ರವನ್ನು ಕಾರ್ಪೋರೆಟ್‌ ಕಂಪೆನಿಗಳು, ಬಂಡವಾಳಶಾಹಿಗಳ ಕೈಗೆ ಹಸ್ತಾಂತರಿಸುವ ಹುನ್ನಾರ ನಡೆದಿದೆ. ಇದು ಕೇಂದ್ರ ಸರ್ಕಾರದ ಒತ್ತಾಸೆಯಿಂದಲೇ ನಡೆಯುತ್ತಿದೆ’ ಎಂದು ಆರೋಪಿಸಿದರು.

ADVERTISEMENT

‘ಇಡೀ ಜನಜೀವನದ ಮೇಲೆ ಪರಿಣಾಮ ಬೀರುವಂತಹ ತಿದ್ದುಪಡಿಗಳನ್ನು ಶಾಸನಸಭೆ, ಸಂಸತ್ತಿನಲ್ಲಿ ಚರ್ಚಿಸದೆ ಸುಗ್ರಿವಾಜ್ಞೆ ಮೂಲಕ ಕಾಯ್ದೆ ಜಾರಿಗೆ ಮುಂದಾಗುತ್ತಿರುವುದು ಜನರನ್ನು ವಂಚಿಸುವ ಕೆಲಸವಾಗಿದೆ. ಬಡ ರೈತರನ್ನು ಭೂಮಿಯಿಂದ ಒಕ್ಕಲೆಬ್ಬಿಸಿ ದಿವಾಳಿ ಮಾಡುವುದು ಇದರ ಹಿಂದಿನ ಸಂಚು. ಸರ್ಕಾರದ ಈ ಕ್ರಮಗಳನ್ನು ತೀವ್ರವಾಗಿ ವಿರೋಧಿಸುವುದು ಮಾತ್ರವಲ್ಲ, ವ್ಯಾಪಕ ಚಳವಳಿ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

‘ರೈತಪರ ಸಂಘಟನೆಗಳ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಕರೆಯ ಮೆರೆಗೆ ಕಾಯ್ದೆಗಳ ಬದಲಾವಣೆಗೆ ಸುಗ್ರಿವಾಜ್ಞೆ ಕ್ರಮ ವಿರೋಧಿಸಿ ರಾಜ್ಯದಲ್ಲಿ ಶನಿವಾರದಿಂದ (ಜೂನ್ 26) ಮೂರು ದಿನ ಸುಮಾರು 1,000 ಗ್ರಾಮ ಪಂಚಾಯಿತಿಗಳ ಎದುರು ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

‘ಜುಲೈ 3 ರಂದು ರೈತ, ಕಾರ್ಮಿಕ ಮತ್ತು ಕೂಲಿಕಾರರ ಸಂಘಟನೆಗಳ ಸಹಯೋಗದಲ್ಲಿ ದೇಶವ್ಯಾಪಿ ಅಸಹಕಾರ ಚಳವಳಿ ಆರಂಭವಾಗಲಿದೆ. ಕ್ವಿಟ್‌ ಇಂಡಿಯಾ ಚಳವಳಿಗೆ ಚಾಲನೆ ದೊರೆತ ದಿನವಾದ ಆಗಸ್ಟ್ 9 ರಂದು ದೇಶವ್ಯಾಪ್ತಿ ರೈತ ಹೋರಾಟಕ್ಕೆ ನಿರ್ಧರಿಸಲಾಗಿದೆ’ ಎಂದರು.

ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಪಿ.ಮುನಿವೆಂಕಟಪ್ಪ ಮಾತನಾಡಿ, ‘ಲಾಕ್‌ಡೌನ್‌ನಂತಹ ವಿಷಮ ಪರಿಸ್ಥಿತಿಯಲ್ಲಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಳ್ಳರ ರೀತಿಯಲ್ಲಿ ಕಾರ್ಪೋರೆಟ್‌ ಕಂಪೆನಿಗಳಿಗೆ ಧಾರೆ ಎರೆದಿರುವುದು ಅತ್ಯಂತ ಅಮಾನವೀಯ ಕ್ರಮ. ಇದು ಕೃಷಿ ರಂಗಕ್ಕೆ ಕಂಟಕ. ಇದನ್ನು ಖಂಡಿಸಿ ಸಮರಶೀಲ ಹೋರಾಟ ರೂಪಿಸುವ ಅಗತ್ಯವಿದೆ’ ಎಂದು ಹೇಳಿದರು.

ಸಭೆಯಲ್ಲಿ ಸಿಪಿಎಂ ಬಾಗೇಪಲ್ಲಿ ಶಾಖೆಯ ಕಾರ್ಯದರ್ಶಿ ಡಾ.ಅನಿಲ್ ಕುಮಾರ್ ಅವಲಪ್ಪ ಅವರು ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯಪಿ.ಮಂಜುನಾಥ್‌ ರೆಡ್ಡಿ ವಿದ್ಯುತ್‌ ಕಾಯ್ದೆ ತಿದ್ದುಪಡಿ, ಗುಡಿಬಂಡೆ ತಾಲ್ಲೂಕು ಘಟಕದ ಕಾರ್ಯದರ್ಶಿ ಎಚ್‌.ಪಿ. ಲಕ್ಷ್ಮಿನಾರಾಯಣ ಅವರು ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ಮಾತನಾಡಿದರು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಹೇಮಚಂದ್ರ, ಹಿರಿಯ ಹೋರಾಟಗಾರ ಲಕ್ಷ್ಮಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.