ADVERTISEMENT

ರಾಷ್ಟ್ರೀಯ ಮತದಾರರ ದಿನ: ಸಿದ್ಧತೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2025, 13:35 IST
Last Updated 22 ಜನವರಿ 2025, 13:35 IST
ಚಿಕ್ಕಬಳ್ಳಾಪುರದಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು
ಚಿಕ್ಕಬಳ್ಳಾಪುರದಲ್ಲಿ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಮಾತನಾಡಿದರು   

ಚಿಕ್ಕಬಳ್ಳಾಪುರ: ಯುವಜನರಲ್ಲಿ ಮತದಾನದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಜ.25ರಂದು ‘ರಾಷ್ಟ್ರೀಯ ಮತದಾರರ ದಿನಾಚರಣೆ’ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ‘ರಾಷ್ಟ್ರೀಯ ಮತದಾರರ ದಿನಾಚರಣೆ’ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಯುವಜನರಿಗೆ, ಸಾರ್ವಜನಿಕರಿಗೆ ಪ್ರಜಾಪ್ರಭುತ್ವದಲ್ಲಿ ಚುನಾವಣೆ ಪ್ರಕ್ರಿಯೆಯ ಪಾತ್ರ, ಮತದಾನದ ಮಹತ್ವದ ಕುರಿತು ಅರಿವು ಮೂಡಿಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಕ್ರಮ ವಹಿಸಬೇಕಿದೆ. ಆ ನಿಟ್ಟಿನಲ್ಲಿ ಈ ವರ್ಷವೂ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಗುವುದು. ಪ್ರತಿ ವರ್ಷವೂ ಜ.25 ರಂದು ವಿನೂತನ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ADVERTISEMENT

ಹೊಸ ಹಾಗೂ ಯುವ ಮತದಾರರಿಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ನೀಡಿ ಮತದಾನದ ಸಾಕ್ಷರತೆಯ ಜಾಗೃತಿ ಮೂಡಿಸಲಾಗುತ್ತದೆ. ಅದೇ ರೀತಿ ಈ ವರ್ಷವೂ ಮಾಡಬೇಕಿದೆ. ಜಿಲ್ಲೆಯ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಪ್ರಬಂಧ ಸ್ಪರ್ಧೆ, ಭಿತ್ತಿಪತ್ರ, ರಸ ಪ್ರಶ್ನೆ ಹಾಗೂ ಚರ್ಚಾ ಸ್ಪರ್ಧೆ ಆಯೋಜಿಸಬೇಕು ಎಂದರು.

ಪದವಿ, ಸ್ನಾತಕೋತ್ತರ, ತತ್ಸಮಾನ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ರೀಲ್ಸ್ ಚಟುವಟಿಕೆಗಳನ್ನು ಆಯೋಜಿಸಬೇಕು. ಎಲ್ಲ ಸ್ಪರ್ಧೆಗಳ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಬೇಕು. ಸ್ಪರ್ಧೆಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು  ಎಂದು ತಿಳಿಸಿದರು.

ರಾಷ್ಟ್ರೀಯ ಮತದಾರ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜ.25 ರಂದು ಆಯೋಜಿಸಬೇಕು. ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಜ.24 ರಂದು ಕಡ್ಡಾಯವಾಗಿ ಪ್ರತಿಜ್ಞಾವಿಧಿ ಬೋಧಿಸಿ ರಾಷ್ಟ್ರೀಯ ಮತದಾರ ದಿನ ಆಚರಿಸಬೇಕು ಎಂದು ಹೇಳಿದರು.

ಚುನಾವಣಾ ಆಯೋಗದ ಅಂತರ್ಜಾಲ ಹಾಗೂ ಸಾಮಾಜಿಕ ಜಾಲತಾಣಕ್ಕೆ ಪ್ರತಿಜ್ಞಾವಿಧಿ ಬೋಧನೆಯ ವಿಡಿಯೊಗಳನ್ನು ಹಂಚಿಕೊಳ್ಳಬೇಕು. ಜಿಲ್ಲೆಯ ಎಲ್ಲ ಮತಗಟ್ಟೆಗಳ ಹಂತದಲ್ಲಿಯೂ ರಾಷ್ಟ್ರೀಯ ಮತದಾರರ ದಿನಾಚರಣೆಯ ಕಾರ್ಯಕ್ರಮ ಆಚರಿಸಬೇಕು. ಆ ನಿಟ್ಟಿನಲ್ಲಿ ಸ್ಥಳೀಯ ಅಧಿಕಾರಿಗಳು ಸಿಬ್ಬಂದಿ ನಿಗಾ ವಹಿಸಬೇಕು ಎಂದರು.

ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಈಶ್ವರಪ್ಪ, ತಹಶೀಲ್ದಾರ್ ಕೆ.ಶ್ವೇತಾ, ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.