ADVERTISEMENT

ಚಿಕ್ಕಬಳ್ಳಾಪುರ: ಜಾನುವಾರು ಅಕ್ರಮ ಸಾಗಣೆ ತಡೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 4:46 IST
Last Updated 17 ಜುಲೈ 2021, 4:46 IST

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜು. 21ರಂದು ಬಕ್ರೀದ್ ಹಬ್ಬವಿದೆ. ಅನಧಿಕೃತವಾಗಿ ಗೋವು, ಕರುಗಳು, ಒಂಟೆಗಳು ಮತ್ತು ಇತರ ಜಾನುವಾರುಗಳನ್ನು ಸಾಗಾಣಿಕೆ ಹಾಗೂ ವಧೆ ಮಾಡುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಅಕ್ರಮ ಸಾಗಾಟ ಹಾಗೂ ವಧೆ ಆಗದಂತೆ ಕ್ರಮಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎಚ್. ಅಮರೇಶ್ ಅವರು ಪೊಲೀಸ್ ಹಾಗೂ ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಪ್ರಯುಕ್ತ ಜಾನುವಾರು ಅಕ್ರಮ ಸಾಗಾಣಿಗೆ ಹಾಗೂ ವಧೆ ತಡೆಗಟ್ಟುವ ಸಂಬಂಧ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ಎಮ್ಮೆ ಹಾಗೂ ಕೋಣಗಳಿಗೆ ಮಾತ್ರ 13 ವರ್ಷವಾದ ಬಳಿಕ ವಧೆ ಮಾಡಬಹುದು. ಸಾಕಾಣಿಕೆ ಹಾಗೂ ವಧೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಗಡಿಭಾಗಗಳಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ಭದ್ರತಾ ಕ್ರಮಗಳನ್ನು ಜರುಗಿಸಬೇಕು ಎಂದರು.

ADVERTISEMENT

ಅಧಿಕಾರಿಗಳು ಹೆಚ್ಚು ಜಾಗೃತರಾಗಿರಬೇಕು. ಒಂದು ವೇಳೆ ವಧೆ ಪ್ರಕರಣಗಳು ಕಂಡುಬಂದಲ್ಲಿ ಪ್ರಕರಣ ದಾಖಲಿಸಬೇಕು. ಆಂಧ್ರದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡಿಲ್ಲ. ಗಡಿ ಭಾಗಗಳ ಮೂಲಕ ಜಾನುವಾರುಗಳ ಸಾಗಾಣಿಕೆ ನಡೆಯುವ ಸಾಧ್ಯತೆ ಇದೆ. ಗಡಿ ಮೂಲಕ ಜಿಲ್ಲೆಗೆ ಬರುವವರ ಬಗ್ಗೆ ಎಚ್ಚರವಹಿಸಬೇಕು. ಜಿಲ್ಲೆಯೊಳಗೆ ಬರುವ ನಾಲ್ಕು ಚಕ್ರದ ವಾಹನಗಳ ತಪಾಸಣೆಯನ್ನು ಕಟ್ಟುನಿಟ್ಟಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಡಿವೈಎಸ್‌ಪಿ ರವಿಶಂಕರ್, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಜನಾರ್ದನ್, ಜಿಲ್ಲಾ ಪ್ರಾಣಿ ದಯಾ ಸಂಘದ ಸದಸ್ಯರಾದ ರಾಧಾ, ಪೃಥ್ವಿರಾಜ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.