ADVERTISEMENT

ಕೆಳಸೇತುವೆ ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಅಗಲಗುರ್ಕಿ ರಸ್ತೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ನಡೆಸಿದ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ಎನ್.ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 11:46 IST
Last Updated 29 ಜನವರಿ 2020, 11:46 IST
ಸಂಸದ ಬಿ.ಎನ್.ಬಚ್ಚೇಗೌಡ ಅವರು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಂಸದ ಬಿ.ಎನ್.ಬಚ್ಚೇಗೌಡ ಅವರು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.   

ಚಿಕ್ಕಬಳ್ಳಾಪುರ: ಅಗಲಗುರ್ಕಿ ರಸ್ತೆಯಲ್ಲಿ ರೈಲ್ವೆ ಇಲಾಖೆಯಿಂದ ನಿರ್ಮಿಸುತ್ತಿರುವ ಕೆಳಸೇತುವೆ ಕಾಮಗಾರಿಯನ್ನು ಮಂಗಳವಾರ ವೀಕ್ಷಿಸಿದ ಸಂಸದ ಬಿ.ಎನ್.ಬಚ್ಚೇಗೌಡ ಅವರು, ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಕಾಮಗಾರಿ ಸ್ಥಗಿತಗೊಳಿಸಿ ಸದ್ಯ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ‘ಅಗಲಗುರ್ಕಿ ಮುಖ್ಯ ರಸ್ತೆಗೆ ಬದಲಾಗಿ ತಿರುವು ಪಡೆದು ಬೇರೆ ದಿಕ್ಕಿನಲ್ಲಿ ಕೆಳಸೇತುವೆ ಕಾಮಗಾರಿಯನ್ನು ನಡೆಸಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಅನಾನುಕೂಲವಾಗುತ್ತದೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದಿವೆ. ಈ ಕಾಮಗಾರಿಯಿಂದ ಮೂರು ಪಟ್ಟು ಅನುದಾನ ಹೆಚ್ಚು ಬಳಕೆಯಾಗಲಿದೆ. ಆದ್ದರಿಂದ, ಯೋಜನೆ ಬದಲಾಯಿಸಿ ಜನರಿಗೆ ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದ ರೀತಿಯಲ್ಲಿ ಸೇತುವೆ ನಿರ್ಮಿಸುವ ಅಗತ್ಯವಿದೆ’ ಎಂದು ಹೇಳಿದರು.

‘ಸಮೀಪದಲ್ಲಿಯೇ ಆದಿಚುಂಚನಗಿರಿ ಮಠದ ಬಿಜಿಎಸ್ ಪ್ರೌಢಶಾಲೆ, ಕಾಲೇಜು, ವಿದ್ಯಾರ್ಥಿ ನಿಲಯವಿದೆ. ಆ ಶಾಲೆಯಿಂದ ನಿತ್ಯ 150ಕ್ಕೂ ಅಧಿಕ ಬಸ್‌ಗಳು ಸಂಚರಿಸುತ್ತವೆ. ಚಿಕ್ಕಬಳ್ಳಾಪುರದಿಂದ ಮೇಲೂರು ಸಂಪರ್ಕಿಸಿರುವ ಈ ರಸ್ತೆ ಮಾರ್ಗವಾಗಿ ನಿತ್ಯ ಸಾವಿರಾರು ಮಂದಿ ಸಂಚರಿಸುತ್ತಾರೆ. ಇದೀಗ ರೈಲ್ವೆ ಇಲಾಖೆ ನಿರ್ಮಿಸಲು ಹೊರಟಿರುವ ಸೇತುವೆ ರಸ್ತೆಯಿಂದ ಸುತ್ತಿ ಬಳಸಿ ಬರುವಂತೆ ನಿರ್ಮಿಸಲಾಗುತ್ತಿದೆ. ಅಲ್ಲದೆ ಮಳೆಗಾಲದಲ್ಲಿ ಕೆಳಸೇತುವೆಯಲ್ಲಿ ನೀರು ಮಡುಗಟ್ಟಿ ನಿಂತು ತೀವ್ರ ಸಮಸ್ಯೆ ಉಂಟು ಮಾಡುತ್ತದೆ’ ಎಂದು ತಿಳಿಸಿದರು.

ADVERTISEMENT

‘ಸಾರ್ವಜನಿಕರಿಗೆ ಉಪಯೋಗವಾಗುವ, ಸರಳ ರೀತಿಯಲ್ಲಿ ಬಳಸಲು ಅನುಕೂಲವಾಗುವಂತೆ ವೈಜ್ಞಾನಿಕವಾಗಿ ರೀತಿಯಲ್ಲಿ ಕೆಳಸೇತುವೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ. ಇಲ್ಲದಿದ್ದರೆ ಕೆಳಸೇತುವೆ ನಿರ್ಮಿಸಿಯೂ ಉಪಯೋಗವಿಲ್ಲದಂತಾಗುತ್ತದೆ. ಆದ್ದರಿಂದ ಈ ವಿಚಾರವನ್ನು ಕೇಂದ್ರ ಸಚಿವರ ಗಮನಕ್ಕೆ ತಂದು ಯೋಜನೆ ಮಾರ್ಪಡಿಸುವಂತೆ ಒತ್ತಾಯಿಸುತ್ತೇನೆ. ಅಲ್ಲಿಯವರೆಗೆ ಕಾಮಗಾರಿ ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವೆ’ ಎಂದರು.

ಕಾಮಗಾರಿ ಪರಿಶೀಲನೆ ವೇಳೆ ಆದಿಚುಂಚನಗಿರಿಯ ಚಿಕ್ಕಬಳ್ಳಾಪುರದ ಶಾಖಾ ಮಠಾಧೀಶ ಮಂಗಳನಾಥ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಿವರಾಮರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ರೈಲ್ವೆ ಅಧಿಕಾರಿಗಳು, ಎಂಜಿನಿಯರ್‌ಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.