ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿದರೆ ₹1 ಲಕ್ಷ ಬಹುಮಾನ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 5:13 IST
Last Updated 22 ಫೆಬ್ರುವರಿ 2026, 5:13 IST
ಶಿಡ್ಲಘಟ್ಟ ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಶಾಸಕ ಬಿ.ಎನ್.ರವಿಕುಮಾರ್ ಉದ್ಘಾಟಿಸಿದರು
ಶಿಡ್ಲಘಟ್ಟ ತಾಲ್ಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರವನ್ನು ಶಾಸಕ ಬಿ.ಎನ್.ರವಿಕುಮಾರ್ ಉದ್ಘಾಟಿಸಿದರು   

ಶಿಡ್ಲಘಟ್ಟ: ‘ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲಾ ಮಕ್ಕಳು 625ಕ್ಕೆ 625 ಅಂಕ ಗಳಿಸಿದರೆ ಅವರಿಗೆ ₹1 ಲಕ್ಷ ಹಾಗೂ ಆ ಶಾಲಾ ಶಿಕ್ಷಕರಿಗೆ ಸೂಕ್ತ ಬಹುಮಾನ ನೀಡಲಾಗುವುದು’ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ತಾಲ್ಲೂಕಿನ ಕೊಂಡಪ್ಪಗಾರಹಳ್ಳಿಯ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆಯೋಜಿಸಿದ್ದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ ಮತ್ತು ಪೂರ್ವ ಸಿದ್ಧತಾ ಪರೀಕ್ಷೆ 1-2ರ ಫಲಿತಾಂಶ ವಿಶ್ಲೇಷಣೆ ಬಗ್ಗೆ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು.

‘ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು 625 ಅಂಕ ಪಡೆಯುತ್ತಾರೋ ಅಷ್ಟು ವಿದ್ಯಾರ್ಥಿಗಳಿಗೂ ಬಹುಮಾನ ನೀಡುತ್ತೇನೆ. ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಶಿಡ್ಲಘಟ್ಟ ಮೂರನೇ ಸ್ಥಾನ ಹಾಗೂ ಕಳೆದ ಬಾರಿ ಎರಡನೇ ಸ್ಥಾನ ಪಡೆದಿತ್ತು. ಈ ಬಾರಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಬೇಕು’ ಎಂದರು.

ADVERTISEMENT

‘ನಾನು ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡುತ್ತಿದ್ದೇನೆ. ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಚಿಂತಾಮಣಿಯ ಡಾ.ಎಂ.ಸಿ ಸುಧಾಕರ್ ಉತ್ತಮ ವಿದ್ಯಾಭ್ಯಾಸ ಮಾಡಿದ್ದಾರೆ. ಜಿಲ್ಲೆಯ ಶಾಸಕರ ಪೈಕಿ ಕಡಿಮೆ ಓದಿರುವುದು ನಾನೇ. ನಾನು ಓದಿರುವುದು ಕೇವಲ 7ನೇ ತರಗತಿ. ನಾನು ಪಡೆಯದ ಶಿಕ್ಷಣವನ್ನು ಈ ಕ್ಷೇತ್ರದ ಎಲ್ಲ ಮಕ್ಕಳು ಪಡೆಯಬೇಕು’ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ರಮೇಶ್ ಮಾತನಾಡಿ, ‘ಜಿಲ್ಲೆಯು ಈ ಹಿಂದೆ ಮೊದಲನೇ ಸ್ಥಾನ ಗಳಿಸಿದೆ. ಕಳೆದ ಬಾರಿ 22ನೇ ಸ್ಥಾನ ಪಡೆದು ಹಿನ್ನಡೆ ಅನುಭವಿಸಿದೆ. ಹಾಗಾಗಿ ಈ ಬಾರಿ ಚಿಕ್ಕಬಳ್ಳಾಪುರ ಜಿಲ್ಲೆಯು ಕನಿಷ್ಠ 10 ಒಳಗೆ 8, 7, 6ನೇ ಸ್ಥಾನಗಳಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯು ಶೇಕಡಾ 95, 96 ರಷ್ಟು ಫಲಿತಾಂಶ ಬರಬೇಕು ಎನ್ನುವ ಗುರಿಯನ್ನು ಹೊಂದಿರಬೇಕು’ ಎಂದರು.

ಇಒ ಆರ್. ಹೇಮಾವತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರ ಕುಮಾರ್, ಇಸಿಒ ಮಂಜುನಾಥ್, ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್, ವಿಷಯ ಪರಿವೀಕ್ಷಕ ಆಂಜಿನಪ್ಪ, ಬಿಆರ್‌ಸಿ ಪ್ರಸನ್ನ ಕುಮಾರ್, ಎಲ್.ವಿ. ವೆಂಕಟರೆಡ್ಡಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.