ADVERTISEMENT

ಕೇಂದ್ರ ಸರ್ಕಾರದ ನೀತಿ ವಿರುದ್ಧ ಆಕ್ರೋಶ

ಕಾರ್ಮಿಕ ಸಂಘಟನೆಗಳಿಂದ ರಸ್ತೆ ತಡೆ l ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 2:27 IST
Last Updated 30 ಮಾರ್ಚ್ 2022, 2:27 IST
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಟ್ಟದ ಮುಷ್ಕರ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿದರು
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಟ್ಟದ ಮುಷ್ಕರ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಮೆರವಣಿಗೆ ನಡೆಸಿದರು   

ಚಿಕ್ಕಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿಕಾರ್ಮಿಕ ಸಂಘಟನೆಗಳುಅಖಿಲ ಭಾರತ ಮಟ್ಟದಲ್ಲಿ ಕರೆ ನೀಡಿದ್ದ ಮುಷ್ಕರದ ಪ್ರಯುಕ್ತ ನಗರದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಮುಖಂಡರು ಮುಷ್ಕರ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಿಐಟಿಯು ನೇತೃತ್ವದಲ್ಲಿ ನಗರದ ಬಿಬಿ ರಸ್ತೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಶಿಡ್ಲಘಟ್ಟ ವೃತ್ತದಲ್ಲಿ ಸಮಾವೇಶಗೊಂಡರು. ಬಿ.ಬಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ನಿಯಂತ್ರಿಸಬೇಕು. ಪೆಟ್ರೋಲಿಯಂ ವಸ್ತುಗಳ ಮೇಲಿನ ಅಬಕಾರಿ ತೆರಿಗೆ ಕಡಿಮೆ ಮಾಡಬೇಕು. ಸಾರ್ವಜನಿಕ ಉದ್ದಿಮೆಗಳ ಖಾಸಗೀ ಕರಣ ನಿಲ್ಲಬೇಕು. ಅಸಂಘಟಿತ ಕಾರ್ಮಿಕರಿಗೆ ಉದ್ಯೋಗ ಭದ್ರತೆ ನೀಡಬೇಕು. ರೈತ ಕಾರ್ಮಿಕ ವಿರೋಧಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ADVERTISEMENT

ಅಂಗನವಾಡಿ, ಆಶಾ, ಬಿಸಿಯೂಟ ಹಾಗೂ ಇತರೆ ಯೋಜನೆಗಳ ನೌಕರರಿಗೆ ಶಾಸನಬದ್ಧ ವೇತನ ಹಾಗೂ ಸಾಮಾಜಿಕ ಭದ್ರತೆ ಜಾರಿಗೊಳಿಸಬೇಕು. ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಹೆಚ್ಚುವರಿ ಜಿಲ್ಲಾಧಿ ಕಾರಿ ಅಮರೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮುನಿವೆಂಕಟಪ್ಪ, ಸಿಐಟಿಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಎನ್. ಮುನಿಕೃಷ್ಣಪ್ಪ, ಅಂಗನವಾಡಿ ನೌಕರರ ಸಂಘದ ಖಜಾಂಚಿ ವೆಂಕಟಲಕ್ಷ್ಮಮ್ಮ, ಕೆ. ರತ್ನಮ್ಮ, ಎಚ್.ಪಿ. ಲಕ್ಷ್ಮಿನಾರಾಯಣ, ಮುನಿಕೃಷ್ಣಮ್ಮ, ನರಸಮ್ಮ, ರಾಜಮ್ಮ, ವಿ. ರವಿಕುಮಾರ್ ಪ್ರತಿಭಟನೆಯ ನೇತೃತ್ವವಹಿಸಿದ್ದರು.

ಎಐಯುಟಿಯುಸಿ ಪ್ರತಿಭಟನೆ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಎಐಯುಟಿಯುಸಿ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟಿಸಿದರು.

ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿತ್ತು. ಅದಕ್ಕೆ ಮತ್ತಷ್ಟು ಜನವಿರೋಧಿ ನೀತಿಗಳನ್ನು ಬಿಜೆಪಿ ಸೇರಿಸಿದೆ ಎಂದು ಪ್ರತಿಭಟನಕಾರರು ದೂರಿದರು. ಜಿ. ಹನುಮೇಶ್, ಸರಸ್ವತಮ್ಮ, ಲಕ್ಷ್ಮಿ, ರೇಷ್ಮಾ, ಸುಶೀಲ, ಸುಜಾತಾ, ಕೃಷ್ಣವೇಣಿ, ಪಾರ್ವತಿ, ಪಂಕಜ ಸೇರಿದಂತೆ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.