ADVERTISEMENT

ನೌಕರರ ವೇತನಕ್ಕೆ ₹382 ಕೋಟಿ ಹಣ ನೀಡಿ

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 6:23 IST
Last Updated 11 ಜುಲೈ 2020, 6:23 IST
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿರವರಿಗೆ ಮನವಿ ಸಲ್ಲಿಸಲಾಯಿತು
ಬಾಗೇಪಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥಸ್ವಾಮಿರವರಿಗೆ ಮನವಿ ಸಲ್ಲಿಸಲಾಯಿತು   

ಬಾಗೇಪಲ್ಲಿ: ಗ್ರಾಮ ಪಂಚಾಯಿತಿ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ತಾಲ್ಲೂಕು ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಶುಕ್ರವಾರ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಮಾರುತಿ ಮಾನ್ಪಡೆ ಮಾತನಾಡಿ, ರಾಜ್ಯದ 6,024 ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ 65 ಸಾವಿರ ಸಿಬ್ಬಂದಿಗೆ ವೇತನ ನೀಡಲು ₹900 ಕೋಟಿ ಹಣ ಬೇಕಾಗಿದೆ. ₹900 ಕೋಟಿಯಲ್ಲಿ ಕೇವಲ ₹518 ಕೋಟಿಗೆ ಹಣಕಾಸು ಇಲಾಖೆ ಮಂಜೂರಾತಿ ನೀಡಿದೆ. 2 ವರ್ಷಗಳಿಂದ ಸಿಬ್ಬಂದಿ ವೇತನ ಬಾಕಿ ಉಳಿದಿದೆ. 3 ತಿಂಗಳಿಗೊಮ್ಮೆ ಬಿಡುಗಡೆಯಾದ ಕಂತಿನ ಹಣದಲ್ಲಿ 2 ತಿಂಗಳ ವೇತನಕ್ಕೆ ಮಾತ್ರ ಹಣ ಸಾಕಾಗುತ್ತದೆ. ಕೂಡಲೇ ಬಾಕಿ ಇರುವ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು.

ಪಂಚಾಯಿತಿ ನೌಕರರ ವೇತನಕ್ಕೆ ಕೊರತೆ ಇರುವ ₹382 ಕೋಟಿ ಹಣವನ್ನು ಮಂಜೂರು ಮಾಡಬೇಕು. ಗಣಕಯಂತ್ರ ಅಪರೇಟರ್‌ಗಳಿಗೆ ಬಡ್ತಿ ನೀಡಲು ನೇಮಕಾತಿಗಳಿಗೆ ತಿದ್ದುಪಡಿ ತರಬೇಕು. ಎಲ್ಲಾ ಸಿಬ್ಬಂದಿಗೆ ವಿಮೆ, ವೈದ್ಯಕೀಯ ವೆಚ್ಚ ನೀಡಬೇಕು. ಕನಿಷ್ಠ ವೇತನ ಪಡೆಯುವ ನೌಕರರಿಗೆ ಬಿಪಿಎಲ್ ಪಡಿತರ ಚೀಟಿ ವಿತರಿಸಬೇಕು. ತಾಲ್ಲೂಕು ಮಟ್ಟದ ಸಮಸ್ಯೆಗಳನ್ನು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಒಂದು ತಿಂಗಳ ಅವಧಿಯೊಳಗೆ ಪರಿಹರಿಸಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ ಮನವಿ ಸ್ವೀಕರಿಸಿದರು. ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಕೆ.ಎನ್.ಪಾಪಣ್ಣ, ಗೌರವಾಧ್ಯಕ್ಷ ಫಯಾಜ್, ಜಿಲ್ಲಾ ಉಪಾಧ್ಯಕ್ಷ ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್, ಕಾರ್ಯದರ್ಶಿ ವೆಂಕಟರಾಮಯ್ಯ, ಕಾರ್ಯದರ್ಶಿ ಈಶ್ವರಪ್ಪ, ಮುಖಂಡ ಸತ್ಯನಾರಾಯಣ, ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.