ADVERTISEMENT

ಜನಸ್ನೇಹಿ ಆಡಳಿತ: ಸಿಬ್ಬಂದಿಗೆ ತಾಕೀತು

ಗುಡಿಬಂಡೆ ತಾಲ್ಲೂಕು ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಸಭೆ

​ಪ್ರಜಾವಾಣಿ ವಾರ್ತೆ
Published 29 ಜನವರಿ 2026, 6:00 IST
Last Updated 29 ಜನವರಿ 2026, 6:00 IST
ಗುಡಿಬಂಡೆ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ 
ಗುಡಿಬಂಡೆ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಸಾರ್ವಜನಿಕರ ಕುಂದುಕೊರತೆ ಆಲಿಸಿದ ಜಿಲ್ಲಾಧಿಕಾರಿ    

ಗುಡಿಬಂಡೆ: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಮೂಲ ಸೌಕರ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಬೇಕು. ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ. ಪ್ರಭು ಅವರು ಅಧಿಕಾರಿಗಳಿಗ ತಾಕೀತು ಮಾಡಿದರು. 

ಗುಡಿಬಂಡೆ ತಾಲ್ಲೂಕು ಕಚೇರಿಗೆ ಬುಧವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ. ಪ್ರಭು, ತಹಶೀಲ್ದಾರ್, ಭೂದಾಖಲೆಗಳ ಸಹಾಯಕ ನಿರ್ದೇಶಕರು, ಪಟ್ಟಣ ಪಂಚಾಯಿತಿ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಚೇಳೂರು ತಾಲ್ಲೂಕು ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಸಭೆ ನಡೆಸಿದರು. 

ಸಭೆಯಲ್ಲಿ ತಾಲ್ಲೂಕು ಸಿಬ್ಬಂದಿ ಉದ್ದೇಶಿಸಿ ಮಾತನಾಡಿದ ಅವರು, ‘ಕಚೇರಿಯಲ್ಲಿ ಕಡತಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಹಾಜರಾತಿ ನಿರ್ವಹಣೆ ಮತ್ತು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು’ ಎಂದು ಸಲಹೆ ನೀಡಿದರು. 

ADVERTISEMENT

ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರದ ವಿವಿಧ ಯೋಜನೆಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡಬೇಕು. ತಾಲ್ಲೂಕಿನ ಶಾಲೆ, ಕಾಲೇಜುಗಳು, ಅಂಗನವಾಡಿಗಳು, ಆಸ್ಪತ್ರೆಗಳು, ವಿದ್ಯಾರ್ಥಿನಿಲಯಗಳು ಹಾಗೂ ಇತರೆ ಸರ್ಕಾರಿ ಕಚೇರಿಗಳ ದುರಸ್ತಿ ಕುರಿತು ವರದಿ ನೀಡಬೇಕು ಎಂದು ಸೂಚಿಸಿದರು. 

ಈ ವೇಳೆ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಾಯಿತು. ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ, ನಿಗದಿತ ಅವಧಿಯೊಳಗೆ ವಿಲೇವಾರಿಗೊಳಿಸಲು ಹಾಗೂ ಅರ್ಜಿದಾರರಿಗೆ ಸೂಕ್ತ ಹಿಂಬರಹ/ ಮಾಹಿತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ವೇಳೆ ಗುಡಿಬಂಡೆ ತಹಶೀಲ್ದಾರ್ ಸಿಗ್ಬತುಲ್ಲ, ಚೇಳೂರು ತಹಶೀಲ್ದಾರ್ ಶ್ವೇತಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾಗಮಣಿ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.